ಬಜೆಟ್‌ ಅನ್ಯಾಯ | ನೀತಿ ಆಯೋಗದ ಸಭೆಗೆ ಬಹಿಷ್ಕಾರ: ಸಿಎಂ ಸಿದ್ದರಾಮಯ್ಯ
x

ಬಜೆಟ್‌ ಅನ್ಯಾಯ | ನೀತಿ ಆಯೋಗದ ಸಭೆಗೆ ಬಹಿಷ್ಕಾರ: ಸಿಎಂ ಸಿದ್ದರಾಮಯ್ಯ


ಮಂಗಳವಾರ ಮಂಡನೆಯಾದ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಅನುದಾನ ನೀಡದೇ ಅನ್ಯಾಯ ಎಸಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಜು.27ರಂದು ದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಿರ್ಧರಿಸಿದೆ.

ಬಜೆಟ್‌ನಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳ ಸರ್ಕಾರಗಳಿರುವ ರಾಜ್ಯಗಳಿಗೆ ಅನ್ಯಾಯ ಎಸಗಿರುವುದನ್ನು ಖಂಡಿಸಿ ಈಗಾಗಲೇ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳು ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ. ಆ ಸಾಲಿಗೆ ಇದೀಗ ಕರ್ನಾಟಕವೂ ಸೇರಿದ್ದು, ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಖಂಡಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ʻಎಕ್ಸ್ʼನಲ್ಲಿ ಪೋಸ್ಟ್ ಮಾಡಿದ್ದು, "ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಕೇಂದ್ರ ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಕೇಂದ್ರ ಸರ್ಕಾರದ ಈ ಉದ್ದೇಶಪೂರ್ವಕ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಇದೇ ಜುಲೈ ತಿಂಗಳ 27ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರ್ಕಾರ ನಿರ್ಧರಿಸಿದೆʼʼ ಎಂದಿ ತಿಳಿಸಿದ್ದಾರೆ.

ʻʻ2024-25ರ ಸಾಲಿನ ಬಜೆಟ್ ನೋಡಿದ ನಂತರ ನಮಗೆ ಕೇಂದ್ರ ಸರ್ಕಾರದ ಮೇಲಿನ ವಿಶ‍್ವಾಸವೇ ಹೊರಟುಹೋಗಿದೆ. ಬಜೆಟ್ ನಲ್ಲಿ ರೈತರ ಕಲ್ಯಾಣದ ಕಾಳಜಿ ವ್ಯಕ್ತಪಡಿಸಿರುವ ಹಣಕಾಸು ಸಚಿವರು ನಮ್ಮ ಬಹುದಿನಗಳ ಬೇಡಿಕೆಯಾಗಿರುವ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ. ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ -ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ ಯೋಜನೆ ಮತ್ತು ಬೆಂಗಳೂರು ನಗರದ ಉದ್ದೇಶಿತ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಅನುದಾನವನ್ನೂ ನೀಡಿಲ್ಲʼʼ ಎಂದು ಹರಿಹಾಯ್ದಿದ್ದಾರೆ.

ʻʻತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಸೂಚನೆ ಕೂಡಾ ಬಜೆಟ್ ನಲ್ಲಿ ಇಲ್ಲ. ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಸೂಕ್ಷ್ಮವಾಗಿ ಅವಲೋಕಸಿದರೆ ಬಿಜೆಪಿಯನ್ನು ತಿರಸ್ಕರಿಸಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ನರೇಂದ್ರ ಮೋದಿ ಅವರ ಸರ್ಕಾರ ನಿರ್ಧಾರ ಮಾಡಿದಂತಿದೆʼʼ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ʻʻದೇಶದಲ್ಲಿ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿವೆ ಎನ್ನುವುದನ್ನು ನರೇಂದ್ರ ಮೋದಿ ಸರ್ಕಾರ ಮರೆತಂತಿದೆ. ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಸುರಿದಿರುವ ವಿಶೇಷ ಅನುದಾನದ ಸುರಿಮಳೆಯನ್ನು ನೋಡಿದರೆ ನರೇಂದ್ರ ಮೋದಿಯವರ ಲೆಕ್ಕಾಚಾರದಲ್ಲಿ ಆ ಎರಡು ರಾಜ್ಯಗಳು ಮಾತ್ರ ಅಸ್ತಿತ್ವದಲ್ಲಿರುವ ಹಾಗೆ ಕಾಣುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆʼʼ ಟೀಕೆ ಮಾಡಿದ್ದಾರೆ.

ʻʻಈ ಅನ್ಯಾಯವನ್ನು ಸಹಿಸಲಾಗದು. ಈ ರೀತಿ ನಿರ್ಲಕ್ಷ್ಯಕ್ಕೊಳಗಾಗಿರುವ ಬಿಜೆಪಿಯೇತರ ಪಕ್ಷಗಳ ಆಡಳಿತದ ರಾಜ್ಯಗಳ ಜೊತೆ ಸೇರಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಸೇಡಿನ ರಾಜಕಾರಣದ ವಿರುದ್ಧ ಹೋರಾಟ ನಡೆಸಲಾಗುವುದು. ಈ ಹೋರಾಟದಲ್ಲಿ ಕೇಂದ್ರ ಸರ್ಕಾರದ ಕರ್ನಾಟಕ ವಿರೋಧಿ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ರಾಜ್ಯದ ಜನತೆ ನಮ್ಮ ಜೊತೆ ನಿಲ್ಲಲಿದ್ದಾರೆ ಎಂಬ ಭರವಸೆ ಇದೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Read More
Next Story