
ಸಾಂದರ್ಭಿಕ ಚಿತ್ರ
ಬ್ಯಾಲೆಟ್ ಪೇಪರ್‌ಗೆ ಮರುಜೀವ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬದಲಾವಣೆಗೆ ರಾಜ್ಯ ಸಂಪುಟ ಶಿಫಾರಸು
ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಇವಿಎಂ ಬಗ್ಗೆ ಮೊದಲಿನಿಂದಲೂ ಅನುಮಾನ ವ್ಯಕ್ತಪಡಿಸುತ್ತಲೇ ಬಂದಿವೆ. ಇವಿಎಂಗಳನ್ನು ಸುಲಭವಾಗಿ ಟ್ಯಾಂಪರ್ ಮಾಡಬಹುದು ಎಂದು ಆರೋಪಿಸುತ್ತಿವೆ.
ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ರಾಜ್ಯ ಸಚಿವ ಸಂಪುಟ ಮುಂದಾಗಿದೆ. ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಬದಲಿಗೆ, ಮತಪತ್ರ (ಬ್ಯಾಲೆಟ್ ಪೇಪರ್) ಮೂಲಕವೇ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ಸಂಪುಟ ಸಭೆ ಅನುಮೋದನೆ ನೀಡಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. "ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸುವ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ. ಇದಕ್ಕಾಗಿ ಅಗತ್ಯವಿರುವ ಕಾನೂನು ತಿದ್ದುಪಡಿ ಮತ್ತು ನಿಯಮಾವಳಿಗಳ ಪರಿಷ್ಕರಣೆಗೂ ಒಪ್ಪಿಗೆ ಸೂಚಿಸಲಾಗಿದೆ," ಎಂದು ಅವರು ತಿಳಿಸಿದರು.
ಮತದಾರರ ಪಟ್ಟಿ ಸಿದ್ಧತೆ ಇನ್ನು ರಾಜ್ಯ ಆಯೋಗದ ಹೊಣೆ
ಇದೇ ವೇಳೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಅಧಿಕಾರವನ್ನು ಭಾರತೀಯ ಚುನಾವಣಾ ಆಯೋಗದಿಂದ ರಾಜ್ಯ ಚುನಾವಣಾ ಆಯೋಗಕ್ಕೆ ವರ್ಗಾಯಿಸುವ ನಿರ್ಧಾರವನ್ನೂ ಕೈಗೊಳ್ಳಲಾಗಿದೆ. ಈ ಮೂಲಕ, ಇನ್ನು ಮುಂದೆ ರಾಜ್ಯ ಚುನಾವಣಾ ಆಯೋಗವೇ ಸ್ವತಂತ್ರವಾಗಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಿದೆ.
ಬ್ಯಾಲೆಟ್ ಪೇಪರ್ ಮರುಬಳಕೆಗೆ ಕಾರಣವೇನು?
ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಇವಿಎಂ ಬಗ್ಗೆ ಮೊದಲಿನಿಂದಲೂ ಅನುಮಾನ ವ್ಯಕ್ತಪಡಿಸುತ್ತಲೇ ಬಂದಿವೆ. ಇವಿಎಂಗಳನ್ನು ಸುಲಭವಾಗಿ ಟ್ಯಾಂಪರ್ ಮಾಡಬಹುದು ಮತ್ತು ಮತಗಳನ್ನು ತಿರುಚಬಹುದು ಎಂಬ ಗಂಭೀರ ಆರೋಪಗಳು ಕೇಳಿಬರುತ್ತಲೇ ಇವೆ. ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಈ ಬಗ್ಗೆ ನಿರಂತರವಾಗಿ ಧ್ವನಿ ಎತ್ತಿದ್ದಾರೆ.
ಇವಿಎಂಗಳ ಕೊರತೆ ಮತ್ತು ಒಟ್ಟಿಗೆ ಚುನಾವಣೆ ನಡೆಸುವ ಸವಾಲುಗಳ ಹಿನ್ನೆಲೆಯಲ್ಲಿ, ರಾಜ್ಯ ಚುನಾವಣಾ ಆಯೋಗವೇ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಸುವ ಬಗ್ಗೆ ಒಲವು ವ್ಯಕ್ತಪಡಿಸಿತ್ತು. ಕಳೆದ ನಾಲ್ಕು ವರ್ಷಗಳಿಂದ ಚುನಾವಣೆ ನಡೆಯದ ಕಾರಣ, ಎರಡೂ ಚುನಾವಣೆಗಳನ್ನು ಒಟ್ಟಿಗೆ ನಡೆಸಬೇಕಾದ ಅನಿವಾರ್ಯತೆ ಇದೆ. ಇದಕ್ಕೆ ಬೇಕಾದಷ್ಟು ಇವಿಎಂಗಳನ್ನು ಕ್ರೋಢೀಕರಿಸುವುದು ಕಷ್ಟಸಾಧ್ಯವಾದ್ದರಿಂದ, ಬ್ಯಾಲೆಟ್ ಪೇಪರ್ ಬಳಕೆಯೇ ಸೂಕ್ತ ಎಂಬ ತೀರ್ಮಾನಕ್ಕೆ ಆಯೋಗ ಬಂದಿತ್ತು.
ಇವಿಎಂ ಕುರಿತ ಆರೋಪ-ಪ್ರತ್ಯಾರೋಪಗಳಿಗೆ ತೆರೆ ಎಳೆಯಲು ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಹೆಚ್ಚು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ, ರಾಜ್ಯ ಚುನಾವಣಾ ಆಯೋಗವು ಬ್ಯಾಲೆಟ್ ಪೇಪರ್ ಬಳಕೆಗೆ ಮುಂದಾಗಿದೆ.
ಈ ನಿರ್ಧಾರದಿಂದಾಗಿ, ದಶಕಗಳ ಬಳಿಕ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತದಾರರು ಮತ್ತೆ ಬ್ಯಾಲೆಟ್ ಪೇಪರ್ ಮೂಲಕ ತಮ್ಮ ಹಕ್ಕು ಚಲಾಯಿಸುವ ದಿನಗಳು ಮರಳಿ ಬರಲಿವೆ.