Cabinet Approves Separate Ministry for Kalyana Karnataka Region
x

ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಸಂಪುಟ ಅಸ್ತು

ಈ ಮಹತ್ವದ ನಿರ್ಧಾರವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್​ ಮೂಲಕ ಪ್ರಕಟಿಸಿದ್ದಾರೆ.


Click the Play button to hear this message in audio format

ಕಲ್ಯಾಣ ಕರ್ನಾಟಕ ಪ್ರದೇಶದ ದಶಕಗಳ ಬೇಡಿಕೆಯೊಂದು ಇದೀಗ ಈಡೇರುವ ಕಾಲ ಸನ್ನಿಹಿತವಾಗಿದೆ. ಈ ಭಾಗದ ಅಭಿವೃದ್ಧಿ ಕಾಮಗಾರಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಮೇಲ್ವಿಚಾರಣೆ ನಡೆಸಲು, ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಸಭೆಯು ಮಂಗಳವಾರ ಅನುಮೋದನೆ ನೀಡಿದೆ.

ಈ ಮಹತ್ವದ ನಿರ್ಧಾರವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್​ ಮೂಲಕ ಪ್ರಕಟಿಸಿದ್ದಾರೆ.

ಹಿಂದೆ ಹೈದರಾಬಾದ್-ಕರ್ನಾಟಕ ಎಂದು ಕರೆಯಲ್ಪಡುತ್ತಿದ್ದ, ಸಂವಿಧಾನದ 371(ಜೆ) ವಿಧಿಯಡಿ ವಿಶೇಷ ಸ್ಥಾನಮಾನ ಪಡೆದಿರುವ ಕಲ್ಯಾಣ ಕರ್ನಾಟಕ ಭಾಗವು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳನ್ನು ಒಳಗೊಂಡಿದೆ. ಈ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಕಾರ್ಯನಿರ್ವಹಿಸುತ್ತಿದ್ದು, ಅದಕ್ಕೆ ಸರ್ಕಾರವು ಪ್ರತಿವರ್ಷ ಸಾವಿರಾರು ಕೋಟಿ ಅನುದಾನವನ್ನು ಒದಗಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ 5,000 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ.

ಈ ಬೃಹತ್​ ಪ್ರಮಾಣದ ಅನುದಾನ ಬಳಸಿಕೊಂಡು ಕೈಗೆತ್ತಿಕೊಳ್ಳುವ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಲು ಮತ್ತು ಅವುಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಒಂದು ಪ್ರತ್ಯೇಕ ಸಚಿವಾಲಯದ ಅವಶ್ಯಕತೆಯಿತ್ತು. ಈ ಹೊಸ ಸಚಿವಾಲಯವು, ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ವೇಗವನ್ನು ತರುವುದಲ್ಲದೆ, ಆಡಳಿತಾತ್ಮಕ ತೊಡಕುಗಳನ್ನು ನಿವಾರಿಸಿ, ಹೆಚ್ಚು ಪಾರದರ್ಶಕತೆ ಮತ್ತು ಜವಾಬ್ದಾರಿಯನ್ನು ತರಲಿದೆ ಎಂದು ನಿರೀಕ್ಷಿಸಲಾಗಿದೆ.

ಹೆಚ್ಚುವರಿ ಹುದ್ದೆಗಳ ಸೃಷ್ಟಿ

ಸಚಿವಾಲಯದ ಸ್ಥಾಪನೆಯ ಜೊತೆಗೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮತ್ತು ಈ ಭಾಗದ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗಳನ್ನು ಮತ್ತಷ್ಟು ಬಲಪಡಿಸಲು ಹೆಚ್ಚುವರಿ ಹುದ್ದೆಗಳನ್ನು ಸೃಷ್ಟಿಸಲೂ ಸಚಿವ ಸಂಪುಟವು ನಿರ್ಧರಿಸಿದೆ. ಇದು ಯೋಜನೆಗಳ ಅನುಷ್ಠಾನ ಮತ್ತು ಮೇಲ್ವಿಚಾರಣೆಗೆ ಇನ್ನಷ್ಟು ಬಲ ನೀಡಲಿದೆ.

ಈ ಕುರಿತು ತಮ್ಮ 'ಎಕ್ಸ್' ಖಾತೆಯಲ್ಲಿ ಸಂತಸ ಹಂಚಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, "ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ನಿಟ್ಟಿನಲ್ಲಿ ಈ ಐತಿಹಾಸಿಕ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ನನ್ನೆಲ್ಲಾ ಸಹೋದ್ಯೋಗಿಗಳಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ. ಈ ಸಚಿವಾಲಯದ ಸ್ಥಾಪನೆಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತಷ್ಟು ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ," ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Read More
Next Story