Chamarajanagar | ಮಲೈ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ; ಏನಿದರ ಮಹತ್ವ?
ಚಾಮರಾಜನಗರದ ಮಲೈ ಮಹದೇಶ್ವರ ಬೆಟ್ಟದ ಮೇಲೆ ಫೆ.15 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಹಳೆ ಮೈಸೂರು ಭಾಗದ ಜಿಲ್ಲೆಗಳ ಅಭಿವೃದ್ಧಿ ಕುರಿತಂತೆ ಮಹತ್ವದ ಚರ್ಚೆ ನಡೆಯಲಿದೆ.
ಕಲ್ಯಾಣ ಕರ್ನಾಟಕದ ಕಲಬುರಗಿ, ಕಿತ್ತೂರು ಕರ್ನಾಟಕದ ಬೆಳಗಾವಿಯಲ್ಲಿ ಯಶಸ್ವಿಯಾಗಿ ಸಚಿವ ಸಂಪುಟ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದೀಗ ದಕ್ಷಿಣ ಕರ್ನಾಟಕದ ಚಾಮರಾಜನಗರದಲ್ಲಿ ಮೊದಲ ಪೂರ್ಣ ಪ್ರಮಾಣದ ಸಂಪುಟ ಸಭೆ ಆಯೋಜಿಸಿದೆ.
ಇಲ್ಲಿನ ಮಲೈ ಮಹದೇಶ್ವರ ಬೆಟ್ಟದ ಮೇಲೆ ಫೆ.15ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆಗೆ ಮೊದಲ ಬಾರಿಗೆ ಅಂದಿನ ಸಿಎಂ ಜಗದೀಶ್ ಶೆಟ್ಟರ್ ಭೇಟಿ ನೀಡಿದ್ದರು. ನಂತರ 2013 ರಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ನಂತರ ಮೂಢ ನಂಬಿಕೆ ದೂರವಾಗಿತ್ತು. ಸಿದ್ದರಾಮಯ್ಯ ಈಚೆಗೆ ಚಾಮರಾಜನಗರಕ್ಕೆ ಭೇಟಿ ನೀಡಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದರು.
ಜರ್ಮನ್ ಟೆಂಟ್‌ನಲ್ಲಿ ಸಂಪುಟ ಸಭೆ
ಮಲೈ ಮಹದೇಶ್ವರ ಬೆಟ್ಟದ ಮೇಲೆ ಜರ್ಮನ್ ಟೆಂಟ್ ನಿರ್ಮಿಸಿ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸ್ಥಳ ಪರಿಶೀಲನೆ ನಡೆಸಿದ್ದು, ಮಲೆ ಮಹದೇಶ್ವರ ಸ್ವಾಮಿ ಪ್ರತಿಮೆಯಿರುವ ಎತ್ತರದ ಪ್ರದೇಶದಲ್ಲಿ ಈ ಟೆಂಟ್ ನಿರ್ಮಿಸಿ, ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ಸಂಬಂಧ ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಲಾಗುವುದು ಎಂದು ಉಸ್ತುವಾರಿ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.
ಜರ್ಮನ್ (ಹ್ಯಾಂಗರ್ ) ಟೆಂಟ್ ಎನ್ನುವುದು ಕಾರ್ಯಕ್ರಮಗಳು, ಪ್ರದರ್ಶನಗಳು, ಉತ್ಪನ್ನ ಬಿಡುಗಡೆ, ಪ್ರದರ್ಶನಗಳು, ಮದುವೆಗಳಿಗೆ ಡೇರೆಗಳನ್ನು ನಿರ್ಮಿಸುವ ಕೃತಕ ಕಟ್ಟಡದ ರೀತಿಯ ರಚನೆ. ಅಲ್ಯೂಮಿನಿಯಂನಿಂದ ರಚಿಸಲಾದ ಸರಳುಗಳು ಮತ್ತು ಕಂಬಗಳನ್ನು ಟೆಂಟ್ ನಿರ್ಮಿಸಲು ಬಳಸಲಾಗುತ್ತದೆ.
ಅಭಿವೃದ್ಧಿ ಕುರಿತು ಚರ್ಚೆ
ಚಾಮರಾಜನಗರ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ. ಕಾಡಂಚಿನಲ್ಲಿರುವ ಹನೂರು ತಾಲೂಕಿನ ಹಲವು ಕುಗ್ರಾಮಗಳು ಇಂದಿಗೂ ಮೂಲ ಸೌಕರ್ಯದಿಂದ ವಂಚಿತವಾಗಿವೆ. ಇಂತಹ ಗ್ರಾಮಗಳ ಅಭಿವೃದ್ಧಿ, ಸ್ಥಳಾಂತರದ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.
ಈಗಾಗಲೇ ಜಿಲ್ಲಾಡಳಿತ ವಿವಿಧ ಅಭಿವೃದ್ಧಿ ಯೋಜನೆಗಳು, ಸಮಸ್ಯೆಗಳ ಕುರಿತು ಪಟ್ಟಿ ಸಿದ್ಧಪಡಿಸಿದ್ದು, ಸಚಿವ ಸಂಪುಟದ ಗಮನಕ್ಕೆ ತರಲಿದೆ. ಜೊತೆಗೆ ನೆರೆಯ ಜಿಲ್ಲೆಗಳಾದ ಮಂಡ್ಯ, ಮೈಸೂರು, ಹಾಸನ ಹಾಗೂ ಕೊಡಗಿನ ಜ್ವಲಂತ ಸಮಸ್ಯೆಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಪಶುಸಂಗೋಪನಾ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.
ಇನ್ನು ದಕ್ಷಿಣ ಕರ್ನಾಟಕದ ಜಿಲ್ಲೆಗಳನ್ನು ಕೇಂದ್ರೀಕರಿಸಿ ಸಚಿವ ಸಂಪುಟ ಸಭೆ ನಡೆಸುತ್ತಿರುವುದರ ಹಿಂದೆ ರಾಜಕೀಯ ಉದ್ದೇಶವೂ ಇದೆ ಎನ್ನಲಾಗುತ್ತಿದೆ. ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಿ, ಹಿಡಿತ ಸಾಧಿಸುವ ಉದ್ದೇಶ ಒಳಗೊಂಡಿದೆ ಎಂದು ತಿಳಿದು ಬಂದಿದೆ.
ಎಸ್.ಎಂ.ಕೃಷ್ಣ ಅವಧಿಯಲ್ಲಿ ಸಂಪುಟ ಸಭೆ
2022 ರಲ್ಲಿ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಚಾಮರಾಜನಗರ ಜಿಲ್ಲೆಯ ಬಿಳಿಗಿರಿ ರಂಗನ ಬೆಟ್ಟದಲ್ಲಿ ಮಿನಿ ಸಂಪುಟ ಸಭೆ ನಡೆದಿತ್ತು. ಅರಣ್ಯ, ಲೋಕೋಪಯೋಗಿ, ಸಮಾಜ ಕಲ್ಯಾಣ ಇಲಾಖೆ ಸಚಿವರ ಮಾತ್ರ ಸಭೆಯಲ್ಲಿ ಭಾಗವಹಿಸಿ, ಜಿಲ್ಲೆಯಲ್ಲಿ ಮೂಲಸೌಕರ್ಯ ಕಲ್ಪಿಸುವ ಸಂಬಂಧ ಚರ್ಚಿಸಲಾಗಿತ್ತು. ಅಲ್ಲದೇ ಸೋಲಿಗರು, ಗಿರಿಜನರ ಪ್ರಗತಿಗೆ ಕಾರಣವಾಗುವ ಹಲವಾರು ವಿಚಾರಗಳನ್ನು ಗಮನದಲ್ಲಿ ಇಟ್ಟುಕೊಂಡು ವಿಶೇಷ ಯೋಜನೆಗಳನ್ನು ಘೋಷಿಸಲಾಗಿತ್ತು.
ಪ್ರವಾಸೋದ್ಯಮಕ್ಕೆ ಉತ್ತೇಜನ
ಅಭಿವೃದ್ಧಿಯಲ್ಲಿ ಹಿಂದುಳಿದರೂ ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚು ಉತ್ತೇಜನ ನೀಡುವ ಕುರಿತು ಚರ್ಚೆ ನಡೆಯಲಿದೆ. ಜಿಲ್ಲೆಯ ಹಲವು ಪ್ರೇಕ್ಷಣೀಯ ಹಾಗೂ ಪ್ರವಾಸಿ ತಾಣಗಳ ಅಭಿವೃದ್ಧಿ, ಹಾಡಿ, ಕುಗ್ರಾಮಗಳಿಗೆ ರಸ್ತೆ, ಕುಡಿಯುವ ನೀರು, ವಿದ್ಯುತ್ ಸೌಲಭ್ಯ ಹಾಗೂ ಸೂರಿನ ಸಮಸ್ಯೆ ಬಗೆಹರಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಲ್ಲದೇ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಸುಧಾರಣೆ ಕುರಿತಂತೆಯೂ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಸಂಪುಟ ಸಭೆಯ ಸಿದ್ಧತೆಗೆ 19 ಸಮಿತಿ
ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯನ್ನು ಯಶಸ್ವಿಯಾಗಿ ಆಯೋಜಿಸಲು ಸಿದ್ಧತೆ ಆರಂಭಿಸಲಾಗಿದೆ. ಅದಕ್ಕಾಗಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು 19 ವಿವಿಧ ಸಮಿತಿಗಳನ್ನು ರಚಿಸಿದ್ದು, ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಮಲೆ ಮಹದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಸಂಪುಟ ಸಭೆ ನಡೆಸುವುದರಿಂದ ದೇವಾಲಯದ ಅಭಿವೃದ್ಧಿಗೂ ಸಹಾಯವಾಗಲಿದೆ.
20 ಕೋಟಿ ರೂ. ವೆಚ್ಚದ ಪ್ರತಿಮೆ ನಿರ್ಮಾಣ
2023 ಮಾರ್ಚ್ ತಿಂಗಳಲ್ಲಿ ಮಲೈ ಮಹದೇಶ್ವರ ಬೆಟ್ಟದಲ್ಲಿ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿಯ ಪ್ರತಿಮೆಯನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾಗಿತ್ತು. ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಮೆ ಅನಾವರಣ ಮಾಡಿದ್ದರು. ಇದಾದ ಕೆಲ ದಿನಗಳಲ್ಲೇ ಪ್ರತಿಮೆಯ ಮುಂದಿನ ತಡೆಗೋಡೆ ಕುಸಿದು ಬಿದ್ದಿತ್ತು. ಆದರೆ, ಪ್ರತಿಮೆಗೆ ಯಾವುದೇ ಹಾನಿಯಾಗಿರಲಿಲ್ಲ. ಇನ್ನು ಮಹದೇಶ್ವರರ ಚಾರಿತ್ರಿಕ ಹಿನ್ನೆಲೆ ಸಾರುವ ಕಲಾಕೃತಿಗಳ ಮ್ಯೂಸಿಯಂ, ಪಾರ್ಕ್ ಕೂಡ ನಿರ್ಮಿಸಲಾಗಿದೆ.
ಚಾಮರಾಜನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಾದಪ್ಪ ಒಕ್ಕಲಿನ ಸಮುದಾಯಗಳಿವೆ. ಸೋಲಿಗರು, ಕುರುಬರು, ದಲಿತರು ಹಾಗೂ ಸಣ್ಣ ಸಣ್ಣ ಜಾತಿಗಳನ್ನು ಸಾಂಸ್ಕೃತಿಕ ರಾಜಕಾರಣದ ಸೆಳೆಯುವ ಪ್ರಯತ್ನವಾಗಿ ಮಹದೇಶ್ವರ ಸ್ವಾಮಿ ಪ್ರತಿಮೆ ನಿರ್ಮಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈಗ ಸಿದ್ದರಾಮಯ್ಯ ಸರ್ಕಾರ ಸಂಪುಟ ಸಭೆಯನ್ನು ಮಲೆ ಮಹದೇಶ್ವರ ಬೆಟ್ಟದಲ್ಲೇ ಮಾಡುವ ಮೂಲಕ ʼಅಭಿವೃದ್ಧಿʼ ಹೆಸರಿನಲ್ಲಿ ಜನರನ್ನು ಸೆಳೆಯುವತ್ತ ಮನಸ್ಸು ಮಾಡಿದೆ.