ಸಚಿವ ಸಂಪುಟ ಸಭೆ | ರಾಜ್ಯಪಾಲರ ತಾರತಮ್ಯ ನಡೆ ಖಂಡಿಸಿ, ನಿರ್ಣಯ ಸಾಧ್ಯತೆ
x

ಸಚಿವ ಸಂಪುಟ ಸಭೆ | ರಾಜ್ಯಪಾಲರ ತಾರತಮ್ಯ ನಡೆ ಖಂಡಿಸಿ, ನಿರ್ಣಯ ಸಾಧ್ಯತೆ

ಒಟ್ಟಾರೆ, ಮುಡಾ ಪ್ರಕರಣದ ವಿಷಯದಲ್ಲಿ ರಾಜ್ಯಪಾಲರ ಪಕ್ಷಪಾತಿ ಧೋರಣೆಯ ವಿರುದ್ಧ ಈಗಾಗಲೇ ಬೀದಿ ಹೋರಾಟ ಮತ್ತು ಕಾನೂನು ಹೋರಾಟವನ್ನು ತೀವ್ರಗೊಳಿಸಿರುವ ಕಾಂಗ್ರೆಸ್‌, ಇದೀಗ ಶಾಸಕಾಂಗ ಸಮರವನ್ನೂ ಸಾರುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​​ ನಡೆಯ ವಿರುದ್ಧ ಕಾಂಗ್ರೆಸ್‌ ನಾಯಕರು ಸಿಡಿದೆದ್ದಿದ್ದಾರೆ. ರಾಜ್ಯಪಾಲರು ತಾರತಮ್ಯ ನಡೆ ಅನುಸರಿಸುತ್ತಿದ್ದಾರೆ ಎನ್ನುವ ವಿಚಾರವನ್ನು ಮುಂದಿಟ್ಟುಕೊಂಡು ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದೆ.

ಈ ಸಚಿವ ಸಂಪುಟ ಸಭೆಯಲ್ಲಿ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧದ ಪ್ರಕರಣಗಳ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಮೈತ್ರಿ ನಾಯಕರ ಮೇಲಿನ ಪ್ರಕರಣಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಸಲಹೆ ನೀಡಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.

ಸಂವಿಧಾನದ ವಿಧಿ 163 ಅಡಿ ಇರುವ ಅಧಿಕಾರ ಚಲಾಯಿಸಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಇದರ ಅಡಿ ರಾಜ್ಯಪಾಲರ ಬಳಿ ಬಾಕಿ ಇರುವ ಪ್ರಾಸಿಕ್ಯೂಷನ್ ಅರ್ಜಿಗಳ ವಿಲೇವಾರಿಗೆ ಸಲಹೆ ನೀಡಲಿದೆ. ರಾಜ್ಯಪಾಲರ ಬಳಿ ಬಿಜೆಪಿ, ಜೆಡಿಎಸ್ ನಾಯಕರ ಪ್ರಾಸಿಕ್ಯೂಷನ್ ಅನುಮತಿ ಕೋರಿಕೆ ಅರ್ಜಿಗಳು ಬಾಕಿ ಇರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. 163 ನೇ ವಿಧಿಯ ಅಡಿಯಲ್ಲಿ ರಾಜ್ಯಪಾಲರಿಗೆ ಸಲಹೆ ನೀಡುವ ಅಧಿಕಾರ ರಾಜ್ಯ ಸಚಿವ ಸಂಪುಟಕ್ಕೆ ಇದೆ. ಇದೇ ಅಧಿಕಾರವನ್ನು ಬಳಸಿ ರಾಜ್ಯಪಾಲರಿಗೆ ಸರ್ಕಾರ ಸಲಹೆ ನೀಡಲಿದೆ.

ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಲೋಕಾಯುಕ್ತ ಎಸ್ಐಟಿ ಈಗಾಗಲೇ ಮನವಿ ಮಾಡಿದೆ. ಇದರ ಜೊತೆಗೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧದ ಪ್ರಾಸಿಕ್ಯೂಷನ್ ಕೋರಿಕೆ ಅರ್ಜಿಗಳೂ ಬಾಕಿ ಇವೆ. ಈ ಪ್ರಾಸಿಕ್ಯೂಷನ್ ಅರ್ಜಿಗಳ ಇತ್ಯರ್ಥಕ್ಕೆ ಸರ್ಕಾರ ಸಲಹೆ ರವಾನಿಸಲಿದೆ.

ಒಟ್ಟಾರೆ, ಮುಡಾ ಪ್ರಕರಣದ ವಿಷಯದಲ್ಲಿ ರಾಜ್ಯಪಾಲರ ಪಕ್ಷಪಾತಿ ಧೋರಣೆಯ ವಿರುದ್ಧ ಈಗಾಗಲೇ ಬೀದಿ ಹೋರಾಟ ಮತ್ತು ಕಾನೂನು ಹೋರಾಟವನ್ನು ತೀವ್ರಗೊಳಿಸಿರುವ ಕಾಂಗ್ರೆಸ್‌, ಇದೀಗ ಶಾಸಕಾಂಗ ಸಮರವನ್ನೂ ಸಾರುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

Read More
Next Story