ದ್ವೇಷ ಭಾಷಣ | ಕೆ ಎಸ್‌ ಈಶ್ವರಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲು
x
ಕೆ.ಎಸ್‌ ಈಶ್ವರಪ್ಪ

ದ್ವೇಷ ಭಾಷಣ | ಕೆ ಎಸ್‌ ಈಶ್ವರಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರದ ವಿರುದ್ಧ ಪ್ರತಿಭಟನೆಯ ಕಾರ್ಯಕ್ರಮವೊಂದರಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.


Click the Play button to hear this message in audio format

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರದ ವಿರುದ್ಧ ಪ್ರತಿಭಟನೆಯ ಕಾರ್ಯಕ್ರಮವೊಂದರಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. ಮೂರು ವಾರಗಳ ಅವಧಿಯಲ್ಲಿಈಶ್ವರಪ್ಪ ವಿರುದ್ಧ ದಾಖಲಾದ ಎರಡನೇ ದ್ವೇಷ ಭಾಷಣದ ಪ್ರಕರಣ ಇದಾಗಿದೆ.

ಬಾಂಗ್ಲಾದಲ್ಲಿ ಇಸ್ಕಾನ್ ಸಂಸ್ಥೆಯ ಸ್ವಾಮಿ ಚಿನ್ಮಯಾನಂದ ದಾಸ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಹಿಂದೂ ಹಿತರಕ್ಷಣಾ ಸಮಿತಿಯಿಂದ ಮಂಗಳವಾರ ಶಿವಮೊಗ್ಗದ ಗಾಂಧಿ ಪಾರ್ಕ್‌ ಎದುರು ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ್ದ ಕೆ.ಎಸ್.ಈಶ್ವರಪ್ಪ, 'ಮುಸ್ಲಿಮರು ಅನ್ನ ಹಾಕಿದ ಮನೆಗೆ ಕನ್ನ ಹಾಕುವ ರಕ್ತದವರು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ನೋಡಿದರೆ ಅದು ಮನದಟ್ಟಾಗುತ್ತದೆ' ಎಂದು ಹೇಳಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೆಂಬರ್ 16 ರಂದು ಈಶ್ವರಪ್ಪ ವಿರುದ್ಧ ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವಾಗ ಮುಸ್ಲಿಮರಿಗೆ ಬೆದರಿಕೆ ಹಾಕಿದ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ 15 ದಿನಗಳ ಹಿಂದೆ ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಕೆ.ಎಸ್.ಈಶ್ವರಪ್ಪ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.

ಪಕ್ಷದ ನಿಯಮಗಳನ್ನು ಉಲ್ಲಂಘಿಸಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಕ್ಕಾಗಿ ಬಿಜೆಪಿ ಈಶ್ವರಪ್ಪ ಅವರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ಈಶ್ವರಪ್ಪ ಅವರು ಹಾವೇರಿಯಿಂದ ಸ್ಪರ್ಧಿಸಲು ತಮ್ಮ ಮಗ ಕೆ ಇ ಕಾಂತೇಶ್‌ಗೆ ಟಿಕೆಟ್ ನೀಡದಿದ್ದಕ್ಕಾಗಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಅವರ ತಂದೆ ಮತ್ತು ಪಕ್ಷದ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು.

Read More
Next Story