Cauvery Water Supply | ಅ.16ಕ್ಕೆ 5ನೇ ಹಂತದ ಯೋಜನೆ ಲೋಕಾರ್ಪಣೆ
x

Cauvery Water Supply | ಅ.16ಕ್ಕೆ 5ನೇ ಹಂತದ ಯೋಜನೆ ಲೋಕಾರ್ಪಣೆ

110 ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಏಷ್ಯಾದ ಅತಿ ದೊಡ್ಡ ಕುಡಿಯುವ ನೀರಿನ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲೋಕಾರ್ಪಣೆ ಮಾಡಲಿದ್ದಾರೆ.


ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ 5ನೇ ಹಂತದ ಕುಡಿಯುವ ನೀರು ಯೋಜನೆಯ ಲೋಕಾರ್ಪಣಾ ಕಾರ್ಯಕ್ರಮ ಅ.16 ರಂದು ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆಯಲಿದೆ.

ಏಷ್ಯಾದ ಅತಿ ದೊಡ್ಡ ಕುಡಿಯುವ ನೀರಿನ ಯೋಜನೆ ಎಂದು ಗುರುತಿಸಲಾಗಿರುವ ಕಾವೇರಿ 5ನೇ ಹಂತದ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲೋಕಾರ್ಪಣೆ ಮಾಡಲಿದ್ದಾರೆ.

ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿ (ಟಿ.ಕೆ.ಹಳ್ಳಿ) ಅ.16ರಂದು ಬೆಳಿಗ್ಗೆ 10.30 ಕ್ಕೆ ಯೋಜನೆ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಭಾಗವಹಿಸಲಿದ್ದಾರೆ.

ಏನಿದು ಯೋಜನೆ?

775 ಎಂ.ಎಲ್. ಡಿ ಹೆಚ್ಚುವರಿ ನೀರು ಪೂರೈಸುವ 5ನೇ ಹಂತದ ಕುಡಿಯುವ ನೀರು ಯೋಜನೆಯಿಂದ 50 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ಯೋಜನೆಯಡಿ ಮನೆ-ಮನೆಗೂ ಕಾವೇರಿ ನೀರು ತಲುಪಿಸಲು 4 ಲಕ್ಷ ನಳ ಸಂಪರ್ಕಗಳಿವೆ. ಯೋಜನೆಗೆ ಒಟ್ಟು ₹4,336 ಕೋಟಿ ವೆಚ್ಚವಾಗಿದ್ದು, ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಸರಬರಾಜಾಗಲಿದೆ. ಪ್ರಮುಖವಾಗಿ ಯಲಹಂಕ, ಯಶವಂತಪುರ, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ, ಬೊಮ್ಮನಹಳ್ಳಿ ವಲಯ ವ್ಯಾಪ್ತಿಯ ಮನೆಗಳಿಗೆ ಕಾವೇರಿ ನೀರು ಪೂರೈಕೆಯಾಗಲಿದೆ.

Read More
Next Story