ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಆರೋಪಿಗೆ ಕೇಂದ್ರ ಸರ್ಕಾರ ರಕ್ಷಣೆ ನೀಡುತ್ತಿದೆ: ಸಿದ್ದರಾಮಯ್ಯ ಗಂಭೀರ ಆರೋಪ
x

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಆರೋಪಿಗೆ ಕೇಂದ್ರ ಸರ್ಕಾರ ರಕ್ಷಣೆ ನೀಡುತ್ತಿದೆ: ಸಿದ್ದರಾಮಯ್ಯ ಗಂಭೀರ ಆರೋಪ


ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡಲು ಸೂಚಿಸಿದ್ದೇನೆ. ವಿಪರ್ಯಾಸವೆಂದರೆ ಕೇಂದ್ರ ಬಿಜೆಪಿ ಸರ್ಕಾರ ಆರೋಪಿಯ ರಕ್ಷಣೆಗೆ ನಿಂತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಈ ಬಗ್ಗೆ ʼxʼ ನಲ್ಲಿ ಸರಣಿ ಪೋಸ್ಟ್‌ ಮಾಡಿರುವ ಅವರು, ʻʻಅಂತಾರಾಷ್ಟ್ರೀಯ ಪ್ರಯಾಣ ಮಾಡುವಾಗ ಎಲ್ಲರ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಬಿಜೆಪಿ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ. ಪ್ರಜ್ವಲ್ ರೇವಣ್ಣ ದುಬೈ ಬಿಟ್ಟು ಇನ್ನು ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆʼʼ ಎಂದು ಹೇಳಿದ್ದಾರೆ.

ʻʻಪ್ರಜ್ವಲ್ ರೇವಣ್ಣ ಅವರ ಕೃತ್ಯದ ಬಗ್ಗೆ ತಿಳಿದೂ ಬಿಜೆಪಿ ಪಕ್ಷ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆʼʼ ಎಂದು ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ.

ʻʻಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡಲು ಸೂಚಿಸಿದ್ದೇನೆ. ವಿಪರ್ಯಾಸವೆಂದರೆ ಕೇಂದ್ರ ಬಿಜೆಪಿ ಸರ್ಕಾರ ಆರೋಪಿಯ ರಕ್ಷಣೆಗೆ ನಿಂತಿದೆ. ತಮಗೂ ರೇವಣ್ಣನ ಕುಟುಂಬಕ್ಕೂ ಸಂಬಂಧವಿಲ್ಲ ಎನ್ನುತ್ತಿದ್ದ ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದರು. ರಾಜಕೀಯ ಹಾಗೂ ಪಾಪ ಕೃತ್ಯಗಳನ್ನು ಅವರೆಲ್ಲರೂ ಒಟ್ಟಿಗೆ ಮಾಡುತ್ತಾರೆʼʼ ಎಂದು ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಕುರಿತು ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ʻʻಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊಲೆ ನಡೆದ ದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆʼʼ ಎಂದು ಪ್ರತ್ಯುತ್ತರ ನೀಡಿದ್ದಾರೆ.

ʻʻನೊಂದ ಕುಟುಂಬಕ್ಕೆ ನ್ಯಾಯ ಕೊಡಿಸಲು ಒಂದು ಸರ್ಕಾರವಾಗಿ ನಾವು ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇವೆ. ಸುಳ್ಳು ಸುಳ್ಳೇ ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ?" ಎಂದು ಸಿ ಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

Read More
Next Story