NABARD Loan Cut | ಲೇವಾದೇವಿದಾರರ ಕಪಿಮುಷ್ಠಿಗೆ ರೈತರು: ದೇವೇಗೌಡ, ಎಚ್‌ಡಿಕೆ ಮೌನ ಪ್ರಶ್ನಿಸಿದ ಸಿದ್ದರಾಮಯ್ಯ
ಇಷ್ಟಾದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ. ಮಣ್ಣಿನ ಮಗ ಎಂದು ಹೇಳಿಕೊಳ್ಳುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ? ರಾಜ್ಯಸಭಾ ಸದಸ್ಯರಾದ ಮಾಜಿ ಪ್ರಧಾನಿ ದೇವೇಗೌಡರೂ ಈ ಅನ್ಯಾಯಗಳ ವಿರುದ್ಧ ಬಾಯಿಯನ್ನೇ ಬಿಡುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು
ಕೃಷಿ ಸಾಲ ನೀಡಲು ಹಣ ನೀಡುತ್ತಿದ್ದ ನಬಾರ್ಡ್ ಈ ಬಾರಿ ಶೇ.58ರಷ್ಟು ಸಾಲ ಪ್ರಮಾಣ ಕಡಿತ ಮಾಡಿದ್ದರೂ ರಾಜ್ಯದ ರೈತರ ಹಿತ ಕಾಯುವ ಬಗ್ಗೆ ದನಿ ಎತ್ತದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಣ್ಣಿನ ಮಕ್ಕಳು ಎಂದು ಹೇಳುವ ಅವರುಗಳು ಯಾಕೆ ಬಾಯಿ ಬಿಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ನವದೆಹಲಿಯಲ್ಲಿ ಶುಕ್ರವಾರ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ನಬಾರ್ಡ್ ಸಾಲ ಕಡಿತವನ್ನು ಕೈಬಿಡುವಂತೆ ಮನವಿ ನೀಡಿದ ಬೆನ್ನಲ್ಲೇ ಅವರು ಮಾಧ್ಯಮಗಳಿಗೆ ಮಾತನಾಡಿ, ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ನಿರಂತರ ಅನ್ಯಾಯ ಆಗುತ್ತಿದೆ. ಮಹದಾಯಿ, ಮೇಕೆದಾಟು ಯೋಜನೆಗೆ ಅನುಮತಿ ನೀಡುತ್ತಿಲ್ಲ. ಇದೀಗ ನಬಾರ್ಡ್ ಸಾಲ ಕಡಿತ ಮಾಡುವ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲ ಪಡೆಯುತ್ತಿದ್ದ ರಾಜ್ಯ ರೈತರನ್ನು ಲೇವಾದೇವಿಗಾರರ ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಇಷ್ಟಾದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ. ಮಣ್ಣಿನ ಮಗ ಎಂದು ಹೇಳಿಕೊಳ್ಳುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ? ರಾಜ್ಯಸಭಾ ಸದಸ್ಯರಾದ ಮಾಜಿ ಪ್ರಧಾನಿ ದೇವೇಗೌಡರೂ ರಾಜ್ಯಕ್ಕೆ ಆಗುತ್ತಲೇ ಇರುವ ಈ ಅನ್ಯಾಯಗಳ ವಿರುದ್ಧ ಬಾಯಿಯನ್ನೇ ಬಿಡುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.
ವಾರದ ಹಿಂದೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ನಬಾರ್ಡ್ ಸಾಲ ಕಡಿತವನ್ನು ಕೈಬಿಡಬೇಕು ಎಂದು ಮನವಿ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರು, ಇದೀಗ ವಾರದ ಅಂತರದಲ್ಲೇ ಪ್ರಧಾನಿ ಮೋದಿಯನ್ನೂ ಭೇಟಿಯಾಗಿ ಮನವಿ ಮಾಡಿದ್ದಾರೆ.
ಪ್ರಧಾನಿ ಜೊತೆ ಮಾತುಕತೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ರೈತರಿಗೆ ನೀಡಬೇಕಿದ್ದ ನಬಾರ್ಡ್ ಹಣದಲ್ಲಿ ಶೇ.58 ರಷ್ಟು ಕಡಿತಗೊಳಿಸಿದೆ. ಕೇಂದ್ರ ಸರ್ಕಾರದ ಈ ಕ್ರಮದಿಂದ ರೈತರು ಲೇವಾದೇವಿದಾರರ ಬಳಿ ಸಾಲದ ಸುಳಿಗೆ ಸಿಲುಕುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರಿಗೆ ನೀಡುತ್ತಿದ್ದ ಸಬ್ಸಿಡಿ ಸಾಲ ಕಡಿತಗೊಳಿಸಿರುವ ಕಾರಣ ರಾಜ್ಯ ಮತ್ತು ದೇಶದಲ್ಲಿ ಆಹಾರ ಉತ್ಪಾದನೆ ಮೇಲೆ ದುಷ್ಪರಿಣಾಮ ಬೀರಲಿದೆ. ನಬಾರ್ಡ್ ಕೇವಲ ರಾಜ್ಯದ ರೈತರಿಗೆ ಮಾತ್ರ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ. ಇಡೀ ದೇಶದಲ್ಲೇ ಕಡಿತ ಮಾಡಲಾಗಿದೆ. ಇದರಿಂದ ಇಡೀ ದೇಶದ ರೈತರನ್ನು ಸಂಕಷ್ಟಕ್ಕೆ ದೂಡಿದಂತಾಗಿದೆ. ಇಡೀ ದೇಶದ ಕೃಷಿ ಉತ್ಪಾದನೆ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.
ನಬಾರ್ಡ್ ಶೇ.4.5 ಬಡ್ಡಿಗೆ ರೈತರ ಸಾಲದ ಹಣ ನೀಡುತ್ತಿತ್ತು. ನಾವು ರೈತರಿಗೆ ಬಡ್ಡಿ ರಹಿತವಾಗಿ ಸಾಲ ನೀಡಿ ಶೇ.4.5 ರಷ್ಟು ಬಡ್ಡಿಯನ್ನು ಸರ್ಕಾರವೇ ಭರಿಸುತ್ತಿತ್ತು. ಈಗ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್ ಗಳಿಂದ ಸಾಲ ಪಡೆಯುವಂತೆ ಕೇಂದ್ರ ಸರ್ಕಾರ ಹೇಳುತ್ತಿದೆ. ಶೇ.10 ಬಡ್ಡಿ ದರದಲ್ಲಿ ವಾಣಿಜ್ಯ ಬ್ಯಾಂಕ್ ಗಳು ಸಾಲ ನೀಡುತ್ತವೆ. ಇದರಿಂದ ಬ್ಯಾಂಕ್ ಗಳಿಗೆ ಲಾಭ ಆಗುತ್ತದೆಯೇ ಹೊರತು ರೈತರಿಗೆ ಅನುಕೂಲ ಆಗುವುದಿಲ್ಲ ಎಂದು ಹೇಳಿದ್ದಾರೆ.