ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧದ ದೋಷಾರೋಪ ಪಟ್ಟಿ ರದ್ದು; ಮೇಲ್ಮನವಿಗೆ ಸರ್ಕಾರ ನಕಾರ
x

ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧದ ದೋಷಾರೋಪ ಪಟ್ಟಿ ರದ್ದು; ಮೇಲ್ಮನವಿಗೆ ಸರ್ಕಾರ ನಕಾರ

ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಯೋಗ್ಯ ಪ್ರಕರಣವಾಗಿಲ್ಲ ಎಂದು ಸರ್ಕಾರ ತೀರ್ಮಾನಿಸಿದ ಬೆನ್ನಲ್ಲೇ ಹೈಕೋರ್ಟ್ ಆದೇಶವು ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿಲ್ಲ ಎಂದು ಅಭಿಯೋಜನಾ ಇಲಾಖೆ ಅಭಿಪ್ರಾಯಪಟ್ಟಿದೆ.

ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣದ ಆರೋಪಿಗಳಾದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಹಾಗೂ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ದೋಷಾರೋಪ ಪಟ್ಟಿ ರದ್ದುಪಡಿಸಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಯೋಗ್ಯ ಪ್ರಕರಣವಾಗಿಲ್ಲ ಎಂದು ಸರ್ಕಾರ ತೀರ್ಮಾನಿಸಿದ ಬೆನ್ನಲ್ಲೇ ಹೈಕೋರ್ಟ್ ಆದೇಶವು ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿಲ್ಲ ಎಂದು ಅಭಿಯೋಜನಾ ಇಲಾಖೆ ಅಭಿಪ್ರಾಯಪಟ್ಟಿದೆ.

ಹೈಕೋರ್ಟ್ ನೀಡಿರುವ ಆದೇಶ ಪರಿಶೀಲಿಸಿ, ಸರ್ಕಾರಿ ವಕೀಲರ ಅಭಿಪ್ರಾಯವನ್ನೂ ಪಡೆಯಲಾಗಿದೆ. ಹೈಕೋರ್ಟ್ ಸಕಾರಣಗಳನ್ನು ನೀಡಿ ಆದೇಶ ಹೊರಡಿರುವುದರಿಂದ ಈ ಪ್ರಕರಣವು ಮೇಲ್ಮನವಿಗೆ ಯೋಗ್ಯವಲ್ಲ ಎಂಬ ಅಭಿಪ್ರಾಯಕ್ಕೆ ಬರಲಾಗಿದೆ ಎಂದು ಅಭಿಯೋಜನಾ ಇಲಾಖೆ ಉಪ ಕಾರ್ಯದರ್ಶಿ ತಿಳಿಸಿದ್ದಾರೆ.

ನ್ಯಾಯಾಲಯವು ಪ್ರಕರಣದ ವಾದ-ವಿವಾದ ಆಲಿಸಿ, ಆರೋಪಗಳಿಗೆ ಅನ್ವಯವಾಗುವ ಕಾಯ್ದೆಯನ್ನು ಪರಿಶೀಲಿಸಿದೆ. ದಂಡ ಪ್ರಕ್ರಿಯೆ ಸಂಹಿತೆ ಕಲಂ ಅಡಿಯಲ್ಲಿ ಆದೇಶ ಹೊರಡಿಸಿರುವುದು ಕಂಡು ಬರುತ್ತದೆ. ಹೀಗಿರುವಾಗ ಉಚ್ಚ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸದಿರಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯ ಪತಿಯ ಸಹೋದರ ಶ್ಯಾಮ್ ಪ್ರಸಾದ್ ಶಾಸ್ತ್ರಿ 2014 ಸೆ.1 ರಂದು ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸಿಐಡಿ ಅಧಿಕಾರಿಗಳು ಪುತ್ತೂರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದನ್ನು ಹೈಕೋರ್ಟ್ ರದ್ದುಪಡಿಸಿತ್ತು.

Read More
Next Story