CT Ravi Case | ಕರ್ತವ್ಯಲೋಪ ಆರೋಪದಡಿ ಖಾನಾಪುರ ಸಿಪಿಐ ಅಮಾನತು
x
ಸಿ.ಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್‌

CT Ravi Case | ಕರ್ತವ್ಯಲೋಪ ಆರೋಪದಡಿ ಖಾನಾಪುರ ಸಿಪಿಐ ಅಮಾನತು

ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಖಾನಾಪುರ ಸಿಪಿಐ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ ನಾಯಕ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.


ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರಿಗೆ ಬಿಜೆಪಿಯ ಮಾಜಿ ಸಚಿವ, ಎಂಎಲ್‌ ಸಿ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಖಾನಾಪುರ ಸಿಪಿಐ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ ನಾಯಕ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸ್‌ ಕುಮಾರ್ ಅವರು ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ ನಾಯಕ್ ಅವರನ್ನು ಅಮಾನತು ಮಾಡಿದ್ದು, ಸಿ.ಟಿ ರವಿ ಅವರನ್ನು ಖಾನಾಪುರ ಠಾಣೆಗೆ ಕರೆತಂದು ಕರ್ತವ್ಯ ಲೋಪ, ನಿಷ್ಕಾಳಜಿತನ ಮತ್ತು ಬೇಜಬ್ದಾರಿತನ ತೋರಿದ್ದಲ್ಲದೇ, ಆಪಾದಿತನರನ್ನು ಹೊರತುಪಡಿಸಿ ಠಾಣೆ ಒಳಗಡೆ ಯಾರನ್ನು ಬಿಡದಂತೆ ಆದೇಶವಿದ್ದರೂ ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ ಮಾಡಿದ ಆರೋಪದಡಿ ಇನ್ಸ್‌ಪೆಕ್ಟರ್ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ.

ದೂರು ನೀಡಿದ ಸಿ.ಟಿ ರವಿ

ಈ ಪ್ರಕರಣಕ್ಕೆ ಕುರಿತಂತೆ ಸಿ.ಟಿ ರವಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಪ್ರಕರಣದ ಬಗ್ಗೆ ಸಿ.ಟಿ ರವಿ ಅವರು ಸಭಾಪತಿ ಬಸವರಾಜ್ ಹೊರಟ್ಟಿ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಹಾಗೂ ಪೊಲೀಸ್ ಮಹಾ ನಿರೀಕ್ಷಕರಿಗೆ ದೂರು ನೀಡಿದ್ದು, 7 ಪುಟಗಳ ವಿಸ್ತಾರವಾದ ದೂರಿನಲ್ಲಿ ಸಿಟಿ ರವಿ ಅವರು, ಸದನದಲ್ಲಿ ನಡೆದ ಘಟನೆ, ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ಉಲ್ಲೇಖ ಮಾಡಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಳ‌ರ್, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಪರಿಷತ್ ಸದಸ್ಯರಾದ ಬೋಸರಾಜ್ ಸೇರಿದಂತೆ ಹಲವರು ತನ್ನ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ಸಿಟಿ ರವಿ ನೀಡಿದ್ದಾರೆ. ಸಭಾಪತಿಗಳಿಗೆ ಕೊಟ್ಟ ದೂರಿನಲ್ಲಿ ಪೊಲೀಸರಿಂದ ಹಕ್ಕು ಚ್ಯುತಿ ಆಗಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದು, ಜೀವ ಬೆದರಿಕೆ, ಮಾನಹಾನಿಯಾಗಿದೆ ಎಂದು ದೂರು ನೀಡಿದ್ದಾರೆ. ಅಲ್ಲದೇ, ಸಚಿವರ ಬೆಂಬಲಿಗರಿಂದ ಹಲ್ಲೆ ಯತ್ನ ನಡೆದ ಬಗ್ಗೆಯೂ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಸರ್ಕಾರದಿಂದ ಸಿಐಡಿ ತನಿಖೆ

ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕುರಿತ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಇನ್ನೂ ಕೆಲವರು ಅಶ್ಲೀಲ ಪದ ಬಳಸಿಲ್ಲ ಎಂದು ಹೇಳುತ್ತಿದ್ದಾರೆ. ಸಿಟಿ ರವಿ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಹೀಗಾಗಿ, ಸತ್ಯಾಸತ್ಯತೆ ತಿಳಿಯಲು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಏನಿದು ಪ್ರಕರಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಕೊನೆಯ ದಿನ ಗುರುವಾರ (ಡಿ.19) ರಂದು ವಿಧಾನ ಪರಿಷತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ಸಚಿವ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರ ಕುರಿತು ಅವಹೇಳನಕಾರಿ ಪದಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ ಅವರನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ರವಿ ಹೊರಬಂದಿದ್ದರು. ಈ ಪ್ರಕರಣವನ್ನು ಇಲ್ಲಿಗೆ ಮುಗಿಸುವ ಪ್ರಶ್ನೆಯೇ ಇಲ್ಲ ಎಂದಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಸಿ.ಟಿ ರವಿಗೆ ಸರಿಯಾದ ಶಿಕ್ಷೆಯಾಗುವವರೆಗೆ ತಾವು ಕಾನೂನು ಹೋರಾಟ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಈಗಾಗಲೇ ಸಿ.ಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎನ್ನಲಾಗಿರುವ ಎರಡು ವಿಡಿಯೋಗಳನ್ನು ಸೋಮವಾರ ಬಿಡುಗಡೆ ಮಾಡಿರುವ ಲಕ್ಷ್ಮೀ ಹೆಬ್ಬಾಳ್ಳ‌ರ್ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದೌಪತಿ ಮುರ್ಮು ಅವರಿಗೆ ಪತ್ರ ಬರೆಯುವುದಾಗಿಯೂ ಘೋಷಿಸಿದ್ದಾರೆ. ಅಲ್ಲದೆ, ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡುವಂತೆಯೂ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಸಿ ಟಿ ರವಿ ಅವರಿಗೆ ಸವಾಲು ಹಾಕಿದ್ದಾರೆ.

Read More
Next Story