ಗಣೇಶ ವಿಸರ್ಜನೆ ವೇಳೆ ಗಲಭೆ: ಮದ್ದೂರು ಬಂದ್‌ಗೆ ಉತ್ತಮ ಸ್ಪಂದನೆ, ಅಂಗಡಿಗಳು ಸಂಪೂರ್ಣ ಬಂದ್
x

ಗಣೇಶ ವಿಸರ್ಜನೆ ವೇಳೆ ಗಲಭೆ: ಮದ್ದೂರು ಬಂದ್‌ಗೆ ಉತ್ತಮ ಸ್ಪಂದನೆ, ಅಂಗಡಿಗಳು ಸಂಪೂರ್ಣ ಬಂದ್

ಭಾನುವಾರ ರಾತ್ರಿ ಪಟ್ಟಣದ ರಾಮ್ ರಹೀಮ್ ನಗರದ ಬಳಿ ಗಣೇಶ ವಿಸರ್ಜನೆ ಮೆರವಣಿಗೆ ಸಾಗುತ್ತಿದ್ದಾಗ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿತ್ತು.


Click the Play button to hear this message in audio format

ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಮತ್ತು ಗಲಭೆಯನ್ನು ಖಂಡಿಸಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ‘ಮದ್ದೂರು ಬಂದ್‌’ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವರ್ತಕರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್‌ಗೆ ಸಂಪೂರ್ಣ ಬೆಂಬಲ ಸೂಚಿಸಿದರು.

ಭಾನುವಾರ ರಾತ್ರಿ ಪಟ್ಟಣದ ರಾಮ್ ರಹೀಮ್ ನಗರದ ಬಳಿ ಗಣೇಶ ವಿಸರ್ಜನೆ ಮೆರವಣಿಗೆ ಸಾಗುತ್ತಿದ್ದಾಗ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿತ್ತು. ಇದನ್ನು ವಿರೋಧಿಸಿ ಬಂದ್‌ಗೆ ಕರೆ ನೀಡಲಾಗಿದ್ದು, ಪಟ್ಟಣದಾದ್ಯಂತ ಜನಜೀವನ ಭಾಗಶಃ ಅಸ್ತವ್ಯಸ್ತಗೊಂಡಿತ್ತು.

ಬಂದ್‌ನಿಂದ ಏನೇನು ವ್ಯತ್ಯಯ?

ಬೆಳಿಗ್ಗೆಯಿಂದಲೇ ಪೇಟೆ ಬೀದಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿನ ದಿನಸಿ ಅಂಗಡಿಗಳು, ಚಿತ್ರಮಂದಿರಗಳು, ಮಾಲ್‌ಗಳು, ಬ್ಯಾಂಕ್‌ಗಳು ಹಾಗೂ ಇತರೆ ವಾಣಿಜ್ಯ ಮಳಿಗೆಗಳು ಬಾಗಿಲು ತೆರೆಯಲಿಲ್ಲ. ಆದಾಗ್ಯೂ, ಹಾಲು, ಔಷಧಿ ಮತ್ತು ವೈದ್ಯಕೀಯ ಕ್ಲಿನಿಕ್‌ಗಳಂತಹ ತುರ್ತು ಸೇವೆಗಳಿಗೆ ವಿನಾಯಿತಿ ನೀಡಲಾಗಿತ್ತು.

ಸರ್ಕಾರಿ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಬಸ್ ಸಂಚಾರ ಸೇರಿದಂತೆ ವಾಹನಗಳ ಓಡಾಟದಲ್ಲಿ ಯಾವುದೇ ವ್ಯತ್ಯಯ ಕಂಡುಬರಲಿಲ್ಲ. ಬಂದ್ ಹಿನ್ನೆಲೆಯಲ್ಲಿ ಪಟ್ಟಣದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.

ಏನಿದು ಗಲಾಟೆ?

ಗಣೇಶ ವಿಸರ್ಜನಾ ಮೆರವಣಿಗೆಯು ಮದ್ದೂರಿನ ನಿರ್ದಿಷ್ಟ ಪ್ರದೇಶವನ್ನು ಹಾದು ಹೋಗುತ್ತಿದ್ದಾಗ, ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿದೆ. ಈ ಕೃತ್ಯದಿಂದ ಎರಡು ಕೋಮುಗಳ ನಡುವೆ ಘರ್ಷಣೆ ಉಂಟಾಗಿ, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಘಟನೆಯ ಸಮಯದಲ್ಲಿ ಬೀದಿ ದೀಪಗಳನ್ನು ಆಫ್ ಮಾಡಲಾಗಿತ್ತು ಎಂಬ ಆರೋಪಗಳು ಕೂಡ ಕೇಳಿಬಂದಿವೆ. ಈ ಘಟನೆಯ ನಂತರ, ಪರಿಸ್ಥಿತಿಯನ್ನು ನಿಯಂತ್ರಿಸಲು ಜಿಲ್ಲಾಡಳಿತವು ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಸುಮಾರು 800 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, 22 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಘಟನೆಯು ಪೂರ್ವ ನಿಯೋಜಿತ ಕೃತ್ಯವೇ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಕೃತ್ಯವನ್ನು ಖಂಡಿಸಿ ಬಿಜೆಪಿ ಮತ್ತು ಇತರ ಹಿಂದೂ ಸಂಘಟನೆಗಳು ಮದ್ದೂರು ಬಂದ್‌ಗೆ ಕರೆ ನೀಡಿದ್ದವು. ಇದಕ್ಕೆ ಪಟ್ಟಣದಲ್ಲಿ ಸ್ವಯಂಪ್ರೇರಿತ ಬೆಂಬಲ ವ್ಯಕ್ತವಾಗಿ, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಘಟನೆಯು ರಾಜಕೀಯ ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಲು ಸೂಚನೆ ನೀಡಿದ್ದಾರೆ.

ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯೇ ಇಂತಹ ಘಟನೆಗಳಿಗೆ ಕಾರಣ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, "ರಾಜ್ಯ ಸರ್ಕಾರಕ್ಕೆ ಗಲಭೆ ತಡೆಯುವ ಯೋಗ್ಯತೆ ಇಲ್ಲ" ಎಂದು ಟೀಕಿಸಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಈ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರಲ್ಲಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಸರ್ಕಾರದ ವೈಫಲ್ಯವನ್ನು ಖಂಡಿಸಿ, ಬಿಜೆಪಿ ನಿಯೋಗವು ಮದ್ದೂರಿಗೆ ಭೇಟಿ ನೀಡಲು ನಿರ್ಧರಿಸಿದೆ.

Read More
Next Story