ಭಾನುವಾರ ಸಿಎಲ್‌ಪಿ ಸಭೆ: ಸಚಿವ ನಾಗೇಂದ್ರ ರಾಜೀನಾಮೆ ವಿಚಾರ ಚರ್ಚೆ ಸಾಧ್ಯತೆ
x

ಭಾನುವಾರ ಸಿಎಲ್‌ಪಿ ಸಭೆ: ಸಚಿವ ನಾಗೇಂದ್ರ ರಾಜೀನಾಮೆ ವಿಚಾರ ಚರ್ಚೆ ಸಾಧ್ಯತೆ


ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ(ಸಿಎಲ್‌ಪಿ) ಸಭೆ ನಡೆಯಲಿದೆ. ಸಭೆಯಲ್ಲಿ ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ ನಾಗೇಂದ್ರ ಅವರ ರಾಜೀನಾಮೆ ವಿಚಾರ ಚರ್ಚೆಯಾಗುವ ಸಾಧ್ಯತೆ ಇದೆ.

ಭಾನುವಾರ ಬೆಂಗಳೂರಿನ ಖಾಸಗಿ ಹೋಟೆಲ್‌ ಒಂದರಲ್ಲಿ ಸಿಎಲ್‌ಪಿ ಸಭೆ ನಡೆಯಲಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ. ಪ್ರತಿಯೊಬ್ಬರು ಕಡ್ಡಾಯವಾಗಿ ಸಭೆಯಲ್ಲಿ ಭಾಗಿಯಾಗುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು ಕಾಂಗ್ರೆಸ್‌ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್‌ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಈ ನಿಟ್ಟಿನಲ್ಲಿ ಸರ್ಕಾರದ ನಡೆಯ ಬಗ್ಗೆ ಸಿಎಲ್‌ಪಿ ಸಭೆಯಲ್ಲಿ ಚರ್ಚೆ ಮಾಡುವ ಸಾಧ್ಯತೆ ಇದೆ. ವಿಪಕ್ಷಗಳ ಆರೋಪಗಳಿಗೆ ಯಾವ ರೀತಿಯಲ್ಲಿ ತಿರುಗೇಟು ನೀಡಬೇಕು. ಯಾವ ವಿಚಾರಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಬೇಕು ಎಂಬ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ.

ಅಷ್ಟೇ ಅಲ್ಲದೇ ಸಭೆಯಲ್ಲಿ ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಶನಿವಾರ ಪ್ರಕಟಗೊಳ್ಳಲಿದೆ. ಈ ನಿಟ್ಟಿನಲ್ಲಿಯೂ ಸಿಎಲ್‌ಪಿ ಸಭೆಯಲ್ಲಿ ಚರ್ಚೆಗಳು ನಡೆಯುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸರ್ಕಾರಕ್ಕೆ ಸಿಕ್ಕ ಗುಪ್ತಚರ ಇಲಾಖೆಯ ಮಾಹಿತಿಗಳು ಹಾಗೂ ಚುನಾವಣೋತ್ತರ ಸಮೀಕ್ಷೆಗಳ ವರದಿಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಪ್ರಜ್ವಲ್ ರೇವಣ್ಣ ವಿಚಾರವೂ ಸಿಎಲ್‌ಪಿ ಸಭೆಯಲ್ಲಿ ಚರ್ಚೆಗೆ ಬರಬಹುದು. ಪ್ರಜ್ವಲ್ ವಿಚಾರವಾಗಿ ಜೆಡಿಎಸ್ ನಾಯಕರು ಕಾಂಗ್ರೆಸ್ ವಿರುದ್ಧ ನಡೆಸುತ್ತಿರುವ ಆರೋಪಗಳು ಹಾಗೂ ಅವರ ರಾಜಕೀಯ ಪರಿಣಾಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ಆಗುವ ಸಾಧ್ಯತೆ ಇದೆ. ಸಚಿವರು, ಶಾಸಕರು ಹೇಳಿಕೆಗಳನ್ನು ಕೊಡುವ ಸಂದರ್ಭದಲ್ಲಿ ಯಾವ ರೀತಿಯಲ್ಲಿ ವರ್ತಿಸಬೇಕು ಎಂಬ ವಿಚಾರವಾಗಿಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

Read More
Next Story