ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
x
ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಚಾಮುಂಡೇಶ್ವರಿ ಧಾರ್ಮಿಕ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


Click the Play button to hear this message in audio format

ಚಾಮುಂಡೇಶ್ವರಿ ಧಾರ್ಮಿಕ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಮಂಗಳವಾರ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಚಾಮುಂಡೇಶ್ವರಿ ಪ್ರಾಧಿಕಾರವನ್ನು ಸರ್ಕಾರ ರಚಿಸಿದ್ದು, ಹಿಂದೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯಡಿ ಕಾರ್ಯನಿರ್ವಾಹಕ ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಮತ್ತು ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತಿದ್ದರು. ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವೂ ರಚನೆಯಾಗಿದೆ. ಹುಲಿಗೆಮ್ಮ ದೇವಸ್ಥಾನ ಮಹದೇಶ್ವರ ದೇವಸ್ಥಾನ, ಸವದತ್ತಿಯ ಎಲ್ಲಮ್ಮ, ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಪ್ರಾಧಿಕಾರವನ್ನು ಸರ್ಕಾರ ರಚಿಸಿದೆ. ವಿಶ್ವವಿಖ್ಯಾತ ದಸರಾ ಹಬ್ಬದ ಜೊತೆಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾವಿರಾರು ಜನ ಭಕ್ತಾದಿಗಳು ಭೇಟಿ ನೀಡುತ್ತಾರೆ. ಶ್ರೀಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಅವುಗಳ ಪೈಕಿ ಕೆಲವು ಪೂರ್ಣಗೊಂಡಿದ್ದರೆ ಕೆಲವು ಪೂರ್ಣಗೊಂಡಿಲ್ಲ ಎಂದರು.

23 ದೇವಾಲಯಗಳ ಅಭಿವೃದ್ದಿ

ಪ್ರಾಧಿಕಾರವು ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ಧಿ, ಹಾಗೂ ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂಬ ಉದ್ದೇಶದಿಂದ ಪ್ರಾಧಿಕಾರ ರಚನೆಯಾಗಿದೆ. ಹಿಂದೆ ಬಸ್ ನಿಲ್ದಾಣ, ವಾಹನ ನಿಲುಗಡೆ ಮತ್ತು ಮಳಿಗೆಗಳ ನಿರ್ಮಾಣವಾಗಿದೆ. ಹಿಂದೆ ಕೈಗೆತ್ತಿಕೊಂಡಿರುವ ಕಾರ್ಯಕ್ರಮಗಳನ್ನು ಕೂಡಲೇ ಪೂಣಗೊಳಿಸಲು ಸೂಚನೆ ನೀಡಲಾಗಿದೆ. 2018 ರಲ್ಲಿ ಕುಡಿಯುವ ನೀರಿನ ಕಾಮಗಾರಿ ಮಂಜೂರಾಗಿದ್ದರೂ ಇನ್ನೂ ಪೂರ್ಣವಾಗಿಲ್ಲ. ಅದನ್ನು ಕೂಡಲೇ ಪೂರ್ಣಗೊಳಿಸಲು ನಗರಾಭಿವೃದ್ಧಿ ಪ್ರಾಧಿಕಾರದವರಿಗೆ ಸೂಚನೆ ನೀಡಲಾಗಿದೆ. ಕಸ ವಿಲೇವಾರಿ ಕಾಮಗಾರಿಯ ಸಿವಿಲ್ ಕಾಮಗಾರಿಗಳು ಪೂರ್ಣವಾಗಿದ್ದು, ಈ ತಿಂಗಳೊಳಗೆ ವಿದ್ಯುದ್ದೀಕರಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸವೇಕು. ಸ್ವಚ್ಛತೆಗೆ ಗಮನ ಹರಿಸಬೇಕೆಂದು ಸೂಚಿಸಲಾಗಿದೆ. ಚಾಮುಂಡಿ ದೇವಸ್ಥಾನ ಮಾತ್ರವಲ್ಲದೇ ಎಲ್ಲಾ ದೇವಸ್ಥಾನಗಳಲ್ಲಿಯೂ ಸ್ವಚ್ಛತೆಯನ್ನು ಕಾಪಾಡಬೇಕು ಎಂದರು.

ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ರೋಪ್ ವೇ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿಲ್ಲ. ಪರಿಸರವಾದಿಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಅದನ್ನು ಹಿಂದೆಯೇ ಸ್ಥಗಿತಗೊಳಿಸಲಾಗಿದೆ ಎಂದರು.

ವಸ್ತ್ರ ಸಂಹಿತೆ ಇಲ್ಲ

ಬೆಟ್ಟಕ್ಕೆ ಬರುವ ಮೆಟ್ಟಿಲುಗಳನ್ನು ಅಭಿವೃದ್ಧಿಪಡಿಲಾಗುವುದು ಎಂದ ಮುಖ್ಯಮಂತ್ರಿಗಳು, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವವರಿಗೆ ಯಾವುದೇ ವಸ್ತ್ರ ಸಂಹಿತೆಯನ್ನು ಜಾರಿ ಮಾಡಿಲ್ಲ. ಎಲ್ಲಾ ಜಾತಿ , ಧರ್ಮದವರು ದೇವಸ್ಥಾನಕ್ಕೆ ಬರಬಹುದು ಎಂದರು.

ಅಪರಾಧ ತಡೆಗೆ ಟಾಸ್ಕ್ ಫೋರ್ಸ್

ದೇವಾಲಯಗಳಲ್ಲಿ ಅಗತ್ಯವಿರುವೆಡೆ ಸಿಸಿಟಿವಿ ಅಳವಡಿಸಬೇಕೆಂದು ತೀರ್ಮಾನಿಸಿದ್ದು, ಯೂನಿಯನ್ ಬ್ಯಾಂಕ್ ನವರು ಸಿಎಸ್ ಆರ್ ನಿಧಿಯಿಂದ ಸಿಸಿಟಿವಿಗಳನ್ನು ಅಳವಡಿಕೆಗೆ ಸಹಕಾರ ನೀಡಲಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ದೀಪದ ವ್ಯವಸ್ಥೆಗೊಳಿಸುವ ಜೊತೆಗೆ ಈ ಪ್ರದೇಶದಲ್ಲಿ ಅಪರಾಧಗಳನ್ನು ನಿಗ್ರಹಿಸಲು ಒಂದು ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು ಎಂದರು.

ಪ್ಲಾಸ್ಟಿಕ್ ಮುಕ್ತಗೊಳಿಸಲು ಕ್ರಮ

ಚಾಮುಂಡಿ ಬೆಟ್ಟದ ಮೇಲೆ ಧೂಮಪಾನ, ಮದ್ಯಪಾನ, ಗುಟ್ಕಾ ಪಾನ್ ಗಳನ್ನು ಸಂಪೂರ್ಣ ನಿಷೇದಿಸಲಾಗಿದೆ. ಬೆಟ್ಟದ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ತೀರ್ಮಾನಿಸಲಾಗಿದೆ. ಪ್ರಸಾದ ಯೋಜನೆಯನ್ನು ಕೇಂದ್ರ ಸರ್ಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದ್ದು, ಈ ಯೋಜನೆಗೆ ಹೆಚ್ಚುವರಿಯಾಗಿ ಬೇಕಾಗುವ 11 ಕೋಟಿ ರೂ.ಗಳನ್ನು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಭರಿಸಲಾಗುವುದು. ದೇವಾಲಯದ ಒಳಗೆ ಛಾಯಾಗ್ರಹಣವನ್ನು ನಿಷೇದಿಸಲಾಗಿದ್ದು, ಮೊಬೈಲ್ ಗಳನ್ನು ಬಂದ್ ಮಾಡಿಕೊಳ್ಳುವ ಆದೇಶ ನೀಡಲಾಗುವುದು ಎಂದರು.

ದೇವಸ್ಥಾನದ ಆಸ್ತಿಗಳ ಸರ್ವೆ

ದೇವಸ್ಥಾನದ ಆಸ್ತಿಯಾಗಿರುವ ಭೂಮಿ ಒತ್ತುವರಿ ಆಗಿರುವ ಸಾಧ್ಯತೆಯಿರುವುದರಿಂದ, ಅವುಗಳ ಸರ್ವೇ ಮಾಡಲು ತಿಳಿಸಲಾಗಿದ್ದು, ಸರ್ವೆ ನಡೆಸಿದ ವರದಿಯನ್ನು ಪ್ರಾಧಿಕಾರದ ಮುಂದಿನ ಸಭೆಯಲ್ಲಿ ಮಂಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

Read More
Next Story