
ದಲಿತರಿಗೆ ಸಿಎಂ ಸ್ಥಾನ; ಸತೀಶ್ ಜಾರಕಿಹೊಳಿ ನಿವಾಸದ ಬಳಿ ಪ್ರತಿಭಟನೆ
ಮಲ್ಲಿಕಾರ್ಜುನ ಖರ್ಗೆ ಅಥವಾ ಸತೀಶ್ ಜಾರಕಿಹೊಳಿ ಅವರಂತಹ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆದಿ ಜಾಂಬವ ಸಮುದಾಯದ ಮುಖಂಡರು ಒತ್ತಾಯಿಸಿದರು.
ರಾಜ್ಯದಲ್ಲಿ ‘ನವಂಬರ್ ಕ್ರಾಂತಿ’ಯ ಹೇಳಿಕೆಗಳು ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ʼದಲಿತ ಸಿಎಂʼ ಬೇಡಿಕೆ ಜೋರಾಗಿ ಕೇಳಿ ಬರುತ್ತಿದೆ.
ದಲಿತ ಸಮುದಾಯದವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಆದಿ ಜಾಂಬವ ಸಂಘಟನೆಯ ಸದಸ್ಯರು ಗುರುವಾರ ಬೆಳಿಗ್ಗೆ ಬೆಂಗಳೂರಿನ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸದ ಎದುರು ಭಾರೀ ಪ್ರತಿಭಟನೆ ನಡೆಸಿದರು.
ದಲಿತರಿಗೆ ಸಿಎಂ ಸ್ಥಾನ ನೀಡಬೇಕು. ದಶಕಗಳಿಂದ ದಲಿತ ನಾಯಕರು ಮುಖ್ಯಮಂತ್ರಿ ಸ್ಥಾನದಿಂದ ವಂಚಿತರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾಯಿಸಿದರೆ ದಲಿತರಿಗೆ ಆ ಸ್ಥಾನ ಬಿಟ್ಟುಕೊಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಸತೀಶ್ ಜಾರಕಿಹೊಳಿ, ಡಾ.ಜಿ. ಪರಮೇಶ್ವರ್, ಡಾ.ಎಚ್.ಸಿ. ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಬೇಡಿಕೆ ಸಲ್ಲಿಸಲು ಪ್ರಯತ್ನಿಸಿದರೂ ಪೊಲೀಸರ ಅನುಮತಿ ನೀಡಲಿಲ್ಲ. ಪ್ರತಿಭಟನಾಕಾರರನ್ನು ಗೇಟ್ ಬಳಿಯೇ ತಡೆದರು. ಆಗ ಪ್ರತಿಭಟನಾಕಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಪೊಲೀಸರ ವಿರುದ್ಧ ಘೋಷಣೆ ಕೂಗಿದರು.
ದಲಿತ ಸಮುದಾಯದವರಿಗೆ ಸಿಎಂ ಸ್ಥಾನ ನೀಡದೇ ನಿರ್ಲಕ್ಷ್ಯ ಮಾಡಲಾಗುತ್ತಿದೆ. ದಶಕಗಳಿಂದ ದಲಿತರು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತರಾಗಿದ್ದಾರೆ. ಈಗ ಸಮುದಾಯದ ನಾಯಕರು ಸಿಎಂ ಆಗುವ ಅವಕಾಶ ಕೂಡಿಬಂದಿದೆ. ಮಲ್ಲಿಕಾರ್ಜುನ ಖರ್ಗೆ ಅಥವಾ ಸತೀಶ್ ಜಾರಕಿಹೊಳಿ ಅವರಂತಹ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆದಿ ಜಾಂಬವ ಸಮುದಾಯದ ಮುಖಂಡರು ಒತ್ತಾಯಿಸಿದರು.
ಕಾಂಗ್ರೆಸ್ ಹೈಕಮಾಂಡ್ ನಾಯಕರು ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡದೇ ಹೋದರೆ ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಚಳವಳಿಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು.
ಕೊನೆಗೆ ಸಚಿವ ಸತೀಶ್ ಜಾರಕಿಹೊಳಿ ಅವರೇ ಖುದ್ದು ಬಂದು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು.
ಈ ಬಾರಿ ಸಿಎಂ ಸ್ಥಾನ ಬದಲಾವಣೆಯಾದರೆ ದಲಿತ ಮುಖ್ಯಮಂತ್ರಿ ಆಗಲೇಬೇಕು ಎಂದು ಒತ್ತಾಯಿಸಿದ್ದಾರೆ. ಸಂಘಟನೆಯ ಬೇಡಿಕೆಯನ್ನು ವರಿಷ್ಠರ ಗಮನಕ್ಕೆ ತರಲಾಗುವುದೆಂದು ಸತೀಶ್ ಜಾರಕಿಹೊಳಿ ಹೇಳಿದರು.

