Karnataka By-Election | ಜನರಿಗಾಗಿ ದುಡಿಯುವ ಸಂಕಲ್ಪಕ್ಕೆ ಫಲಿತಾಂಶ ಬಲ ತಂದಿದೆ: ಸಿಎಂ ಸಿದ್ದರಾಮಯ್ಯ
x

Karnataka By-Election | ಜನರಿಗಾಗಿ ದುಡಿಯುವ ಸಂಕಲ್ಪಕ್ಕೆ ಫಲಿತಾಂಶ ಬಲ ತಂದಿದೆ: ಸಿಎಂ ಸಿದ್ದರಾಮಯ್ಯ


ಬಿಜೆಪಿ ಮತ್ತು ಜೆಡಿಎಸ್ ನನ್ನ ವಿರುದ್ಧ ನಡೆಸಿದ ಅಪಪ್ರಚಾರ ಮತ್ತು ಷಢ್ಯಂತ್ರಗಳಿಗೆ ರಾಜ್ಯದ ಜನತೆ ಈ ಉಪ ಚುನಾವಣೆಯ ಮೂಲಕ ಉತ್ತರ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ಈ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ- ಜೆಡಿಎಸ್ ಎರಡೂ ಪಕ್ಷಗಳು ಸೇರಿಕೊಂಡು ರಾಜಭವನದಿಂದ ಹಿಡಿದು ಕೇಂದ್ರ ತನಿಖಾ ಸಂಸ್ಥೆಗಳ ವರೆಗೆ ಎಲ್ಲವನ್ನೂ ದುರ್ಬಳಕೆ ಮಾಡಿ ಹಗರಣವನ್ನು ಸೃಷ್ಟಿಸಿ, ನನ್ನನ್ನು ಮತ್ತು ನನ್ನ ಕುಟುಂಬವನ್ನು ಹಣಿಯುವ ಪ್ರಯತ್ನ ಮಾಡಿದ್ದರು. ರಾಜಕೀಯ ದ್ವೇಷ ಸಾಧನೆಗಾಗಿ ನನ್ನ ಕುಟುಂಬದ ವಿರುದ್ಧವೂ ಸುಳ್ಳು ಆರೋಪ ಮಾಡಿ ತನಿಖೆ ನಡೆಸುವಂತೆ ಮಾಡಿದರು. ನನ್ನನ್ನು ಕಟ್ಟಿಹಾಕುವ ದೂರಾಲೋಚನೆಯಿಂದಲೇ ಬಿಜೆಪಿ ನಾಯಕರು ನನ್ನ ಮತ್ತು ನನ್ನ ಪತ್ನಿಯ ಮೇಲೆ ಸುಳ್ಳು ಆರೋಪಗಳನ್ನು ಮಾಡಿದ್ದರು. ಆದರೆ ರಾಜ್ಯದ ಜನತೆ ಕಳೆದ ನಾಲ್ಕು ದಶಕಗಳ ನನ್ನ ರಾಜಕಾರಣವನ್ನು ಕಂಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸುಳ್ಳುಗಳನ್ನು ಯಾರೂ ನಂಬಿಲ್ಲ. ಇದಕ್ಕೆ ಚುನಾವಣಾ ಫಲಿತಾಂಶವೇ ಸಾಕ್ಷಿ ಎಂದು ಹೇಳಿದ್ದಾರೆ.

ಎಲ್ಲಕ್ಕಿಂತ ಮಿಗಿಲಾಗಿ ಈ ಉಪಚುನಾವಣಾ ಫಲಿತಾಂಶ ಬೇರೆ ಕಾರಣಕ್ಕಾಗಿ ನನಗೆ ಮಹತ್ವದ್ದಾಗಿತ್ತು. ಈ ಬಾರಿ ನಾನು ಮುಖ್ಯಮಂತ್ರಿಯಾದ ನಂತರ ನನ್ನ ಮತ್ತು ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಾ ನನ್ನ ಚಾರಿತ್ರ್ಯ ಹನನ ಮಾಡುವ ಪ್ರಯತ್ನವನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಾ ಬಂದಿದ್ದಾರೆ. ಆದರೆ, ಈ ಚುನಾವಣಾ ಫಲಿತಾಂಶ ಅವರ ಅಂತಹ ಪ್ರಯತ್ನಗಳಿಗೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ವ್ಯಾಖ್ಯಾನಿಸಿದ್ದಾರೆ.

ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು. ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ. ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ಸಿಎಂ ವಿಜೇತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ. ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಎಂದು ಟ್ವೀಟ್ ಮೂಲಕ ಮತದಾರರಿಗೆ ಧನ್ಯವಾದ ಸಲ್ಲಿಸಿದ್ದಾರೆ.

Read More
Next Story