
ರಾಜಕೀಯ ಮೇಲಾಟದ ನಡುವೆಯೂ ಬಜೆಟ್ ರಚನೆ ಕಸರತ್ತು ಆರಂಭಿಸಲಿದ್ದಾರೆ ಸಿಎಂ
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಇದು ಮುಂಬರುವ ಆಯವ್ಯಯ ಮಂಡನೆಗೆ ವೇದಿಕೆ ಸಿದ್ಧಪಡಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಮೊದಲ ಅಧಿಕೃತ ಸಭೆ.
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತಾರಕಕ್ಕೇರಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ರಚನೆಗೆ ಮುಂದಾಗಿದ್ದಾರೆ. ನಾಳೆಯಿಂದ (ಮಂಗಳವಾರ) ಅಧಿಕೃತವಾಗಿ ಬಜೆಟ್ ಪೂರ್ವಭಾವಿ ಸಭೆಗಳನ್ನು ಆರಂಭಿಸಲಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲೇ ಬೀಡುಬಿಟ್ಟಿದ್ದು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೈಕಮಾಂಡ್ ಮಟ್ಟದಲ್ಲಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ದೆಹಲಿ ನಾಯಕರ ಮನವೊಲಿಕೆ ಮತ್ತು ನಾಯಕತ್ವ ಬದಲಾವಣೆಗಾಗಿ ಡಿಕೆಶಿ ಪ್ರಯತ್ನ ಮುಂದುವರಿಸಿದ್ದಾರೆ. ಆದರೆ, ಇದರ ನಡುವೆಯೂ ಸಿಎಂ ಸಿದ್ದರಾಮಯ್ಯ ಅವರು ಮುಂಬರುವ ರಾಜ್ಯ ಬಜೆಟ್ ಮಂಡನೆಗೆ ಸಿದ್ಧತೆ ಆರಂಭಿಸಿದ್ದಾರೆ.
ನಾಳೆ ಅಧಿಕಾರಿಗಳ ಮಹತ್ವದ ಸಭೆ
ನಾಳೆ ಮಧ್ಯಾಹ್ನ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಇದು ಮುಂಬರುವ ಆಯವ್ಯಯ ಮಂಡನೆಗೆ ವೇದಿಕೆ ಸಿದ್ಧಪಡಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಮೊದಲ ಅಧಿಕೃತ ಸಭೆ.
ಸಭೆಯಲ್ಲಿ ಪ್ರಮುಖವಾಗಿ ರಾಜ್ಯದ ಪ್ರಸ್ತುತ ಆರ್ಥಿಕ ಸ್ಥಿತಿಗತಿ, ಆದಾಯ ಸಂಗ್ರಹಣೆ, ಜಿಎಸ್‌ಟಿ ಪಾಲು ಮತ್ತು ಪ್ರಮುಖ ಇಲಾಖೆಗಳ ಆರ್ಥಿಕ ಬೇಡಿಕೆಗಳ ಕುರಿತು ಸಿಎಂ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆಯಲಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಿರುವ ಬೃಹತ್ ಮೊತ್ತದ ಅನುದಾನ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಸಂಪನ್ಮೂಲ ಕ್ರೋಢೀಕರಣದ ಬಗ್ಗೆಯೂ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯುವ ಸಾಧ್ಯತೆಯಿದೆ.
2025-26ರ ಸಾಲಿನ ಕರ್ನಾಟಕ ಬಜೆಟ್ ಕುರಿತಾದ ಸಂಕ್ಷಿಪ್ತ ಮಾಹಿತಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025ರ ಮಾರ್ಚ್‌ನಲ್ಲಿ ಮಂಡಿಸಿದ 2025-26ನೇ ಸಾಲಿನ ಆಯವ್ಯಯವು 'ಗ್ಯಾರಂಟಿ' ಯೋಜನೆಗಳ ಅನುಷ್ಠಾನ ಮತ್ತು ಮೂಲಸೌಕರ್ಯ ಅಭಿವೃದ್ಧಿಯ ನಡುವೆ ಸಮತೋಲನ ಕಾಯ್ದುಕೊಳ್ಳುವ ಪ್ರಯತ್ನವಾಗಿತ್ತು. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ. ಗಡಿ ದಾಟಿತ್ತು. ಕಾಂಗ್ರೆಸ್ ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಿಗೆ ಸುಮಾರು 52,000 ಕೋಟಿ ರೂ.ಗಳನ್ನು ಮೀಸಲಿಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣಕ್ಕೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದರು.
ಬೆಂಗಳೂರು ಅಭಿವೃದ್ಧಿ ಮತ್ತು ನೀರಾವರಿ ವಲಯಕ್ಕೂ ಬಜೆಟ್‌ನಲ್ಲಿ ಸಿಂಹಪಾಲು ನೀಡಲಾಗಿತ್ತು. ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಉಸ್ತುವಾರಿಯಲ್ಲಿರುವ ಬೆಂಗಳೂರು ನಗರಾಭಿವೃದ್ಧಿಗೆ ಹಿಂದಿನ ಸಾಲಿಗಿಂತ ಹೆಚ್ಚಿನ ಅನುದಾನ ಒದಗಿಸಲಾಗಿತ್ತು (ಸುಮಾರು 12,917 ಕೋಟಿ ರೂ.). ಇದಲ್ಲದೆ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ (ಎಸ್‌ಸಿಎಸ್‌ಪಿ/ಟಿಎಸ್‌ಪಿ) 39,121 ಕೋಟಿ ರೂ. ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕೆ 4,500 ಕೋಟಿ ರೂ. ಮೀಸಲಿರಿಸಲಾಗಿತ್ತು. ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಒತ್ತು ನೀಡುವ ಮೂಲಕ ಸರ್ವವ್ಯಾಪಿ ಅಭಿವೃದ್ಧಿಯ ದೃಷ್ಟಿಕೋನವನ್ನು ಬಜೆಟ್ ಬಿಂಬಿಸಿತ್ತು.

