
ದೀರ್ಘಾವಧಿ ದಾಖಲೆ ಸಂಭ್ರಮದ ನಡುವೆಯೇ ಪೂರ್ಣಾವಧಿ ಸಿಎಂ ಆಸೆ ಬಿಚ್ಚಿಟ್ಟ ಸಿದ್ದರಾಮಯ್ಯ
ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿದೆ. ಮಾಜಿ ಸಿಎಂ ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ದೀರ್ಘಾವಧಿ ಸಿಎಂ ಆಗುವ ಮೂಲಕ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ, ಇದೀಗ ಮತ್ತೆ ಪೂರ್ಣಾವಧಿ ಸಿಎಂ ಕನಸಿನ ಬಗ್ಗೆ ಪುನರುಚ್ಛರಿಸಿದ್ದಾರೆ. ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎನ್ನುವ ಮೂಲಕ ಪೂರ್ಣಾವಧಿ ಸಿಎಂ ಆಗುವ ಆಸೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.
ಮಂಗಳವಾರ(ಜ.6) ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಐಸಿಸಿ ವರಿಷ್ಠರು ಸೂಚನೆ ನೀಡಿದರೆ ಎರಡನೇ ಅವಧಿಯಲ್ಲಿಯೂ ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸುವ ವಿಶ್ವಾಸವಿದೆ ಎನ್ನುವ ಮೂಲಕ ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದರು. ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿದೆ. ಮಾಜಿ ಸಿಎಂ ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದು ತಿಳಿಸಿದರು.
ಸಿಎಂ ಆಗಿರುವುದರಿಂದ ನಾಟಿಕೋಳಿಗೆ ಪ್ರಚಾರ
ಮುಖ್ಯಮಂತ್ರಿಗಳ ಅಭಿಮಾನಿಗಳು ನಾಟಿ ಕೋಳಿ, ಪಲಾವ್ ಹಂಚಿರುವ ಬಗ್ಗೆ ಪ್ರತಿಕ್ರಿಯಿಸಿ, ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಸಿಎಂ ಆಗಿರುವುದರಿಂದ ಸ್ವಲ್ಪ ಪ್ರಚಾರ ಸಿಗುತ್ತಿದೆ ಎಂದರು.
ರಾಜಕಾರಣ ತೃಪ್ತಿ ತಂದಿದೆ
ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ. ಜನರ ಕೆಲಸ ಮಾಡುವುದು ಖುಷಿಯ ಸಂಗತಿ. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು. ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದು ಕಾಲಘಟ್ಟ ಬೇರೆ ಬೇರೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಮೈಸೂರಿನ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಬಜೆಟ್‌ನಲ್ಲಿ ವಿಶೇಷ ಘೋಷಣೆ: ಕಾದು ನೋಡಿ
ಫೆಬ್ರವರಿಯಲ್ಲಿ ನಡೆಯಲಿರುವ ಬಜೆಟ್‌ನಲ್ಲಿ ವಿಶೇಷ ಕಾರ್ಯಕ್ರಮಗಳು ಘೋಷಣೆಯಾಗಬಹುದು. ಆದರೆ ಅಲ್ಲಿಯವರೆಗೂ ನೀವು ಕಾಯಬೇಕು. ಬಳ್ಳಾರಿ ಘಟನೆ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ಮಾತನಾಡಿ ಅಗತ್ಯ ತೀರ್ಮಾನ ಕೈಗೊಳ್ಳಲಾಗುವುದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದ್ದು, ಕೆಲವರನ್ನು ಬಂಧಿಸಲಾಗಿದೆ. ಈ ಘಟನೆ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕೇವಲ ರಾಜಕೀಯ ಉದ್ದೇಶದಿಂದ ಹೇಳಿಕೆ ನೀಡಿದ್ದಾರೆ ಎಂದರು.
ಸೌಹಾರ್ದ ಭೇಟಿ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಕೇರಳದ ವಯನಾಡಿನಿಂದ ಬೆಂಗಳೂರು ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಅವರನ್ನು ಸೌಹಾರ್ದಯುತವಾಗಿ ಅವರನ್ನು ಮೈಸೂರಿನಲ್ಲಿ ಭೇಟಿ ಮಾಡಲಾಯಿತು. ಈ ವೇಳೆ ಯಾವುದೇ ರಾಜಕೀಯ ಮಾತುಕತೆ ನಡೆದಿಲ್ಲ. ಸಂಪುಟ ಪುನರ್ ರಚನೆಯ ಬಗ್ಗೆ ದೆಹಲಿಯಿಂದ ಕರೆ ಬಂದರೆ ಮಾತ್ರ ವರಿಷ್ಠರನ್ನು ಭೇಟಿ ಮಾಡಲಾಗುವುದು ಎಂದು ತಿಳಿಸಿದರು
ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ದೇವರಾಜ ಅರಸು ದಾಖಲೆ ಮುರಿದು ರಾಜ್ಯದಲ್ಲಿ ಇತಿಹಾಸ ನಿರ್ಮಿಸಿದರೆ, ಪ್ರತಿಪಕ್ಷ ಬಿಜೆಪಿ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ನಡೆದ ಹಲವು ಹಗರಣ ಹಾಗೂ ವೈಫಲ್ಯಗಲ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪಟ್ಟಿ ಮಾಡಿದ್ದು, ಹಲವು ಆರೋಪಗಳನ್ನು ಮಾಡಿದೆ.
ಬಿಜೆಪಿ ಆರೋಪವೇನು ?
ದಾಖಲೆ ಬರೆದ "ಅಭಿನವ ಅರಸು"ಗೆ ಅಭಿನಂದನೆಗಳು ನಿಮ್ಮ ದಾಖಲೆ ಆಡಳಿತದ ವೈಫಲ್ಯದ ಸಾಧನೆಗಳನ್ನು ಬಿಡುವು ಸಿಕ್ಕಾಗ ಒಮ್ಮೆ ಕಣ್ಣಾಡಿಸಿ ಎಂದಿರುವ ಬಿಜೆಪಿ, 7 ವರ್ಷ 240 ದಿನಗಳ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ, ಸಾಲದ ಹೊರೆ ಅಧಿಕವಾಗಿದೆ, ಅಭಿವೃದ್ಧಿ ಶೂನ್ಯವಾಗಿದೆ, ಕರುನಾಡು ಗೂಂಡಾ ರಾಜ್ಯವಾಗಿದೆ, ಶಾಲೆಗಳು ಪಾಳು ಬಿದ್ದಿದೆ, ಜಲಾಶಯಗಳು ಹೂಳು ತುಂಬಿವೆ, ನೇಮಕಾತಿಗಳು ನಡೆಯುತ್ತಿಲ್ಲ ಎಂದಿದ್ದಾರೆ.
ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ, ರೈತರ ಆತ್ಮಹತ್ಯೆ ಲೆಕ್ಕಕ್ಕೆ ಸಿಗದಾಗಿದೆ, ರಾಜ್ಯದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಮುಟ್ಟಿದೆ, ಓಲೈಕೆ ರಾಜಕಾರಣ ಮಿತಿಮೀರಿದೆ. ಸಿದ್ದರಾಮಯ್ಯನವರೇ, ತಾವು ದಾಖಲೆಯ ಪುಸ್ತಕದಲ್ಲಿ ಬರೆದಿರುವುದು ಕೇವಲ ದಿನಗಳ ಸಂಖ್ಯೆಯನ್ನೇ ಹೊರತು, ಸಾಧನೆಯ ಅಕ್ಷರಗಳನ್ನಲ್ಲ! ತಮ್ಮ ತುಘಲಕ್ ಆಡಳಿತದ ದುಸ್ಥಿತಿಯ ದಿನಗಳನ್ನು ಕನ್ನಡಿಗರು ಎಂದಿಗೂ ಮರೆಯುವುದಿಲ್ಲ, ಕ್ಷಮಿಸುವುದಿಲ್ಲ ಎಂದು ತಮ್ಮ ʼಎಕ್ಸ್ʼ ಖಾತೆಯಲ್ಲಿಆರೋಪಿಸಿದೆ.

