
ರಾಜ್ಯಾದ್ಯಂತ ಫಲಾನುಭವಿಗಳಿಗೆ 88 ಸಾವಿರ ಮನೆ ಹಸ್ತಾಂತರ ಮಾಡಿದ ಸಿಎಂ
ಫಲಾನುಭವಿಗಳಿಗೆ ಮನೆಗಳ ದಾಖಲೆ ಪತ್ರಗಳನ್ನು ವಿತರಿಸಿದ ಸಮಾರಂಭದಲ್ಲಿ ಕಟೌಟ್ ಆಕಸ್ಮಿಕವಾಗಿ ಬಿದ್ದು ಹಲವರು ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ರಾಜ್ಯ ಸರ್ಕಾರ ಗೃಹ ಮಂಡಳಿಯಿಂದ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 46,000 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ಶನಿವಾರ ಹಸ್ತಾಂತರಿಸಿದೆ. ಈ ಮೂಲಕ ಮೊದಲ ಬಾರಿಗೆ ಬೃಹತ್ ಪ್ರಮಾಣದಲ್ಲಿ ಬಡವರಿಗೆ ಮನೆಗಳನ್ನು ಒದಗಿಸುವ ಪ್ರಮುಖ ಯೋಜನೆಯನ್ನು ಸರ್ಕಾರ ಈಡೇರಿಸಿದಂತಾಗಿದೆ.
ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು ಎಂಬುದು ರಾಜ್ಯ ಸರ್ಕಾರದ ಆಶಯ, ಆದ್ದರಿಂದಲೇ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ಹುಬ್ಬಳ್ಳಿಯಲ್ಲಿ ನಡೆದ ಹಕ್ಕುಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶನಿವಾರ(ಜ.24) ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ನಿರ್ಮಿಸಿದ್ದ ಮನೆಗಳನ್ನು ವಿತರಿಸಿ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 14,58,000 ಮನೆಗಳನ್ನು ಕಟ್ಟಿ ಇತಿಹಾಸ ನಿರ್ಮಿಸಿ ವಸತಿ ಕ್ರಾಂತಿ ಮಾಡಿದ್ದೆವು. ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ 2024 ರಲ್ಲಿ 36,789 ಮನೆಗಳನ್ನು ಮೊದಲನೇ ಹಂತದಲ್ಲಿ ವಿತರಿಸಿದ್ದ ನಮ್ಮ ಸರ್ಕಾರ ಎರಡನೇ ಹಂತದಲ್ಲಿ 45 ಸಾವಿರ ಮನೆಗಳನ್ನು ಹಂಚುತ್ತಿದ್ದೇವೆ ಎಂದರು.
ಅರ್ಹ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಮನೆಗಳ ಹಂಚಿಕೆ ಪತ್ರ ವಿತರಿಸಿದರು.
ಕೇಂದ್ರದಿಂದ ರಾಜ್ಯಕ್ಕೆ ವಂಚನೆ
"ನಾವು ಹೇಳಿದ್ದನ್ನೆಲ್ಲಾ ಮಾಡಿ ನುಡಿದಂತೆ ನಡೆದಿದ್ದೇವೆ. ಅವರು ಹೇಳಿದ್ದನ್ನು ಮಾಡದೆ ನಮ್ಮ ಬಗ್ಗೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದರು. ಮಹದಾಯಿ, ಕೃಷ್ಣ ಮೇಲ್ದಂಡೆ, ಭದ್ರಾ ಮೇಲ್ದಂಡೆ ಎಲ್ಲದರಲ್ಲೂ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಾತು ತಪ್ಪಿದ್ದು, ರಾಜ್ಯದ ಜನತೆಗೆ ವಂಚಿಸಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇದಕ್ಕೆಲ್ಲಾ ಉತ್ತರಿಸಬೇಕು," ಎಂದು ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಬಿಜೆಪಿಯಿಂದ ಸುಳ್ಳು ಪ್ರಚಾರ
"ಒಂದು ಮನೆಗೆ 4 ರಿಂದ 5 ಲಕ್ಷ ರೂಪಾಯಿಯನ್ನು ಕೊಡೋದು ರಾಜ್ಯ ಸರ್ಕಾರ. ಕೇಂದ್ರ ಕೊಡೋದು ಒಂದು ಲಕ್ಷಕ್ಕಿಂತ ಕಡಿಮೆ. ಆದರೆ ಹೆಸರು ಮಾತ್ರ ಪ್ರಧಾನ ಮಂತ್ರಿ ಆವಾಸ್ ಯೋಜನೆ. ಹಣ ನಮ್ಮದು, ಹೆಸರು ಮಾತ್ರ ಕೇಂದ್ರದ್ದು," ಎಂದು ಟೀಕಿಸಿದರು. "ನಮ್ಮ ಸರ್ಕಾರ ಬಂದ ಬಳಿಕ 5,500 ಕೋಟಿ ರೂಪಾಯಿ ಹಣವನ್ನು ಎರಡು ವರ್ಷದಲ್ಲಿ ನಾವು, ನಮ್ಮ ಕಾಂಗ್ರೆಸ್ ಸರ್ಕಾರ ಮನೆಗಳಿಗಾಗಿ ಖರ್ಚು ಮಾಡಿದ್ದೇವೆ. ಇಷ್ಟೆಲ್ಲಾ ಆದರೂ ಸರ್ಕಾರದ ಬೊಕ್ಕಸ ಖಾಲಿ ಎಂದು ಬಿಜೆಪಿ ಸುಳ್ಳು ಹೇಳುತ್ತಾ ತಿರುಗುತ್ತಿದೆ. ರೈತರ ಪಂಪ್ ಸೆಟ್ ಗಳಿಗೆ 2,500 ಕೋಟಿ ರೂ. ಸಬ್ಸಿಡಿ ಪ್ರತಿ ವರ್ಷ ಕೊಡುತ್ತಿದ್ದೇವೆ. ಇದರ ಜೊತೆಗೆ ವಿಧವಾ ವೇತನ, ವೃದ್ದಾಪ್ಯ ವೇತನ ಸೇರಿ ಪ್ರತಿಯೊಂದಕ್ಕೂ ಹೇರಳವಾಗಿ ಹಣ ಬಿಡುಗಡೆ ಮಾಡುತ್ತಲೇ ಇದ್ದೇವೆ," ಎಂದು ವಿರೋಧ ಪಕ್ಷಗಳ ಟೀಕೆಗೆ ಪ್ರತ್ಯುತ್ತರ ನೀಡಿದರು.
ಕಟೌಟ್ ಬಿದ್ದು ಹಲವರಿಗೆ ಗಾಯ
ಸರ್ಕಾರ ಅರ್ಹ ಫಲಾನುಭವಿಗಳಿಗೆ ಮನೆಗಳ ದಾಖಲೆ ಪತ್ರಗಳನ್ನು ವಿತರಿಸಿದ ಸಮಾರಂಭದಲ್ಲಿ ಕಟೌಟ್ ಆಕಸ್ಮಿಕವಾಗಿ ಬಿದ್ದು ಹಲವರು ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ವಿಷಯ ತಿಳಿದ ನಂತರ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಭರ್ಜರಿ ಭೋಜನ
ಸಮಾರಂಭದಲ್ಲಿ ಊಟ, ಉಪಹಾರ ವಿತರಣೆಗೆ ಒಟ್ಟು 124 ಕೌಂಟರ್‌ಗಳನ್ನು ಸ್ಥಾಪಿಸಲಾಗಿತ್ತು. ಬೆಳಗಿನ ಉಪಹಾರವಾಗಿ 30,000 ಜನರಿಗೆ ಉಪ್ಪಿಟ್ಟು ವಿತರಣೆ ಮಾಡಲಾಗಿದೆ. ನಂತರ ಮಧ್ಯಾಹ್ನದ ಊಟವಾಗಿ ಪಲಾವ್, ಮೊಸರನ್ನ, ಮೈಸೂರು ಪಾಕ್ ನೀಡಲಾಯಿತು. ಒಟ್ಟು 1.50 ಲಕ್ಷಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದಲ್ಲದೆ, 2 ಲಕ್ಷ ಜನರಿಗೆ ವಾಟರ್ ಬಾಟಲ್ ವ್ಯವಸ್ಥೆ ಮಾಡಲಾಗಿತ್ತು. ಉಪಹಾರ, ಊಟದ ಸಿದ್ಧತೆಗಾಗಿ 300 ಜನ, ಊಟದ ವಿತರಣೆಗಾಗಿ 200 ಸಿಬ್ಬಂದಿ ಹಾಗೂ ಸ್ವಚ್ಛತಾ ಕಾರ್ಯಕ್ಕೆ 150 ಕಾರ್ಮಿಕರನ್ನು ನಿಯೋಜಿಸಲಾಗಿತ್ತು.

