
ಸಿಎಂ ಸಿದ್ದರಾಮಯ್ಯ
ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಂಪುಟ ಸಭೆ: ದ್ವೇಷ ಅಪರಾಧ ವಿಧೇಯಕಕ್ಕೆ ಅನುಮೋದನೆ ಸಾಧ್ಯತೆ
ದ್ವೇಷ ಅಪರಾಧ ವಿಧೇಯಕ ದ್ವೇಷ ಭಾಷಣ ಮತ್ತು ದ್ವೇಷದ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ತೆಗೆದುಕೊಂಡಿರುವ ಒಂದು ಮಹತ್ವದ ಹೆಜ್ಜೆಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ನಿರೀಕ್ಷಿತ ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025 ಕ್ಕೆ ಅನುಮೋದನೆ ದೊರೆಯುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷದ ಅಪರಾಧಗಳನ್ನು ತಡೆಗಟ್ಟಲು ಈ ಕಾಯ್ದೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ.ಈ ವಿಧೇಯಕದ ಕರಡನ್ನು ಕಳೆದ ಜೂನ್‌ನಲ್ಲೇ ನಡೆದ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾದ್ದು, ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಸಂಪುಟ ಸಭಾಂಗಣದಲ್ಲಿ ನಡೆಯಲಿರುವ ಸಭೆಯಲ್ಲಿ ಇದಕ್ಕೆ ಅಂತಿಮ ಮುದ್ರೆ ಬೀಳುವ ನಿರೀಕ್ಷೆಯಿದೆ.
ಈ ವಿಧೇಯಕವು ದ್ವೇಷ ಭಾಷಣ ಮತ್ತು ದ್ವೇಷದ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ತೆಗೆದುಕೊಂಡಿರುವ ಒಂದು ಮಹತ್ವದ ಹೆಜ್ಜೆಯಾಗಿದೆ. ಇಂದು ಚರ್ಚೆ ನಡೆಸಿ ಅನುಮೋದನೆ ನೀಡಿದ ಬಳಿಕ, ಈ ವಿಧೇಯಕವನ್ನು ಬೆಳಗಾವಿ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ.
ದ್ವೇಷ ಭಾಷಣಕ್ಕೆ ಮೂರು ವರ್ಷ ಜೈಲು ಶಿಕ್ಷೆ
ದ್ವೇಷ ಅಪರಾಧಗಳ ತಡೆಗೆ ಸಂಬಂಧಿಸಿದ ಈ ವಿಧೇಯಕದಲ್ಲಿ ದ್ವೇಷ ಭಾಷಣ ಮಾಡಿದರೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಧಾರ್ಮಿಕ, ಜನಾಂಗೀಯ, ಜಾತಿ, ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ಅಂಗವೈಕಲ್ಯ ಅಥವಾ ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವುದು ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ಅಥವಾ 5 ಸಾವಿರ ರೂಪಾಯಿ ದಂಡದ ಜತೆಗೆ ಶಿಕ್ಷೆ ವಿಧಿಸಬಹುದೆಂದು ವಿಧೇಯಕದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
ಸಂಪುಟ ಸಭೆಯಲ್ಲಿ ಇಂದು ಹಲವಾರು ಪ್ರಮುಖ ವಿಧೇಯಕಗಳಿಗೂ ಅನುಮೋದನೆ ನೀಡುವ ಸಾಧ್ಯತೆ ಇದೆ. ಅವುಗಳಲ್ಲಿ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ತಿದ್ದುಪಡಿ ವಿಧೇಯಕ- 2025, ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ ತಿದ್ದುಪಡಿ ವಿಧೇಯಕ -2025, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ತಿದ್ದುಪಡಿ ವಿಧೇಯಕ - 2025, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ತಿದ್ದುಪಡಿ ವಿಧೇಯಕ 2025, ಘಾಟಿ ಸುಬ್ರಮಣ್ಯ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ- 2025 ಹಾಗೂ ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ ಮತ್ತು ಕರ್ನಾಟಕ ಒಳನಾಡು ನೌಕೆ ನಿಯಮಗಳು -2025 ವಿಧೇಯಕಗಳ ಮಂಡನೆ ಕುರಿತು ಚರ್ಚೆ ನಡೆಯಲಿದೆ.
ಇದಲ್ಲದೆ, ಸಂಜೆ ನಾಲ್ಕು ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರ ಜೊತೆ ಮತ್ತೊಂದು ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಈ ಸಭೆಯಲ್ಲಿ ಕಾರ್ಯತಂತ್ರವನ್ನು ರೂಪಿಸಲಾಗುವುದು. ಅಧಿಕಾರ ಹಂಚಿಕೆ ಕಿತ್ತಾಟ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿ ಅವಿಶ್ವಾಸ ಮಂಡನೆಗೆ ಸಿದ್ಧತೆ ಮಾಡಿಕೊಂಡಿರುವ ಪ್ರತಿಪಕ್ಷಗಳ ಅಸ್ತ್ರಗಳಿಗೆ ಯಾವ ರೀತಿ ಪ್ರತ್ಯಸ್ತ್ರ ನೀಡಬೇಕು ಎಂಬ ಕುರಿತು ಸಿಎಂ ಸಮಾಲೋಚನೆ ನಡೆಸಲಿದ್ದಾರೆ. ಜೊತೆಗೆ, ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ವಿಧೇಯಕಗಳು ಹಾಗೂ ಪ್ರತಿಪಕ್ಷಗಳು ಇಲಾಖಾವಾರು ಕೇಳುವ ಪ್ರಶ್ನೆಗಳಿಗೆ ಸಿದ್ಧತೆ ನಡೆಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ.

