
ಸಿಎಂ ಸಿದ್ದರಾಮಯ್ಯ
ಒತ್ತುವರಿ ತೆರವು ಅನಿವಾರ್ಯ, ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸೂಚನೆ: ಸಿಎಂ
ಬೆಂಗಳೂರಿನ ಯಲಹಂಕದಲ್ಲಿ ನಡೆದ ತೆರವು ಕಾರ್ಯಾಚರಣೆಯ ಕುರಿತು ಮಾತನಾಡಿದ ಸಿಎಂ, "ಆ ಪ್ರದೇಶವು ಮೂಲತಃ ತ್ಯಾಜ್ಯ ನಿರ್ವಹಣೆಗೆ ಮೀಸಲಿಟ್ಟ ಜಾಗವಾಗಿದ್ದು, ಜನವಸತಿಗೆ ಯಾವುದೇ ರೀತಿಯಲ್ಲೂ ಸೂಕ್ತವಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿ ನಡೆದ ಒತ್ತುವರಿ ತೆರವು ಕಾರ್ಯಾಚರಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. "ಸರ್ಕಾರಿ ಜಮೀನು ಒತ್ತುವರಿ ತೆರವು ಮಾಡುವುದು ಅನಿವಾರ್ಯವಾಗಿದ್ದರೂ, ಅಲ್ಲಿನ ನಿರಾಶ್ರಿತರಿಗೆ ಮಾನವೀಯತೆಯ ದೃಷ್ಟಿಯಿಂದ ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ" ಎಂದು ಅವರು ತಿಳಿಸಿದರು.
ದೆಹಲಿಯ ಕರ್ನಾಟಕ ಭವನದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.
ಯಲಹಂಕ ತೆರವು ಕಾರ್ಯಾಚರಣೆ: ಕಾರಣವೇನು?
ಬೆಂಗಳೂರಿನ ಯಲಹಂಕದಲ್ಲಿ ನಡೆದ ತೆರವು ಕಾರ್ಯಾಚರಣೆಯ ಕುರಿತು ಮಾತನಾಡಿದ ಸಿಎಂ, "ಆ ಪ್ರದೇಶವು ಮೂಲತಃ ತ್ಯಾಜ್ಯ ನಿರ್ವಹಣೆಗೆ ಮೀಸಲಿಟ್ಟ ಜಾಗವಾಗಿದ್ದು, ಜನವಸತಿಗೆ ಯಾವುದೇ ರೀತಿಯಲ್ಲೂ ಸೂಕ್ತವಲ್ಲ. ಅನಧಿಕೃತವಾಗಿ ಅಲ್ಲಿ ನೆಲೆಸಿದ್ದವರಿಗೆ ಮುಂಚಿತವಾಗಿಯೇ ನೋಟಿಸ್ ನೀಡಿ ತೆರವುಗೊಳಿಸಲು ಸೂಚಿಸಲಾಗಿತ್ತು. ಆದರೆ, ಸರ್ಕಾರದ ಎಚ್ಚರಿಕೆಗೆ ಸ್ಪಂದಿಸದ ಕಾರಣ ಅನಿವಾರ್ಯವಾಗಿ ಈ ಕ್ರಮ ಕೈಗೊಳ್ಳಬೇಕಾಯಿತು," ಎಂದರು.
ಮಾನವೀಯ ನೆಲೆಗಟ್ಟಿನಲ್ಲಿ ಪುನರ್ವಸತಿ
ತೆರವುಗೊಂಡ ಪ್ರದೇಶದಲ್ಲಿದ್ದವರಲ್ಲಿ ಬಹುತೇಕರು ವಲಸೆ ಕಾರ್ಮಿಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮಾನವೀಯ ದೃಷ್ಟಿಕೋನವನ್ನು ವ್ಯಕ್ತಪಡಿಸಿದರು. "ಅವರು ಬೀದಿಗೆ ಬೀಳಬಾರದು ಎಂಬುದು ಸರ್ಕಾರದ ಆಶಯ. ಹೀಗಾಗಿ, ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚನೆ ನೀಡಿದ್ದೇನೆ," ಎಂದು ಅವರು ಹೇಳಿದರು.
ವಿವಾದ ಸೃಷ್ಟಸಿದ್ದ ಕೇರಳ ಸಿಎಂ
ಯಲಹಂಕದಲ್ಲಿ ತೆರವುಗೊಂಡವರಲ್ಲಿ ಕೇರಳ ಮೂಲದವರೂ ಸೇರಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಕೇರಳ ಸಿಎಂ, ಒತ್ತುವರಿ ತೆರವು ಪ್ರಕರಣವನ್ನು ಉತ್ತರ ಪ್ರದೇಶದಲ್ಲಿ ಚಾಲ್ತಿಯಲ್ಲಿರುವ ಬುಲ್ಡೋಜರ್ ನ್ಯಾಯಕ್ಕೆ ಹೋಲಿಕೆ ಮಾಡಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, "ಕಾನೂನು ಬಾಹಿರ ಒತ್ತುವರಿಗಳನ್ನು ಸಹಿಸಲು ಸಾಧ್ಯವಿಲ್ಲ. ಆದರೆ ಸಿಎಂ ಸೂಚನೆಯಂತೆ ಮಾನವೀಯ ನೆಲೆಯಲ್ಲಿ ಅವರಿಗೆ ಪುನರ್ವಸತಿ ಕಲ್ಪಿಸಲು ಸರ್ಕಾರ ಬದ್ಧವಾಗಿದೆ," ಎಂದು ತಿಳಿಸಿದ್ದಾರೆ. ಈ ವೇಳೆ ಕೇರಳ ಸಿಎಂ ಆರೋಪಕ್ಕೆ ಬಲವಾದ ಖಂಡನೆ ವ್ಯಕ್ತಪಡಿಸಿದ್ದಾರೆ.

