ಕ್ಷಮೆಯಾಚನೆ | ಅರವಿಂದ ಬೆಲ್ಲದ್ ನಡೆ ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿಂದನೆಯ ದನಿಯಲ್ಲಿ ಮಾತನಾಡಿದ್ದಕ್ಕೆ ಬಿಜೆಪಿ ಶಾಸಕ, ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಕ್ಷಮೆ ಯಾಚಿಸಿದ ಬೆನ್ನಲ್ಲೇ, ಅವರ ಕ್ಷಮೆ ಯಾಚನೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಅವರು ಇತ್ತೀಚೆಗೆ ಅರಮನೆ ಮೈದಾನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ವಿಷಯವಾಗಿ ಪ್ರತಿಕ್ರಿಯಿಸಿ 'ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ' ಎಂಬ ಪದ ಬಳಸಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಬೆಲ್ಲದ್, ಉದ್ವೇಗದಲ್ಲಿ ಹಾಗೆ ಮಾತನಾಡಿದ್ದಕ್ಕೆ ಕ್ಷಮೆ ಇರಲಿ ಎಂದು ಕೋರಿದ್ದರು. ಇದೀಗ ಬೆಲ್ಲದ್ ಅವರ ಪತ್ರವನ್ನು ತಮ್ಮ ʼಎಕ್ಸ್ʼ ಖಾತೆಯಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಉದ್ವೇಗದ ಮಾತಿನಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವ ಮಾತುಗಳು ಅರಿವಿಗೆ ಬಾರದೇ ಬಂದುಬಿಡುತ್ತವೆ. ತಪ್ಪಿನ ಅರಿವಾಗಿ ಕ್ಷಮೆ ಕೋರಿರುವ ಬೆಲ್ಲದ್ ಅವರ ನಡೆಯನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.
"ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ. ಜಿಂದಾಲ್ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ" ಎಂದಿದ್ದಾರೆ.
"ನಾನೂ ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ. ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಆದರೆ, ಮೊದಲ ಬಾರಿಗೆ ಅರವಿಂದ ಬೆಲ್ಲದ್ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ" ಎಂದು ಸಿದ್ದರಾಮಯ್ಯ ಅವರು ಬೆಲ್ಲದ್ ನಡೆಯನ್ನು ಶ್ಲಾಘಿಸಿದ್ದಾರೆ.
"ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘ ಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ. ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. ʼಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲʼ ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ" ಎಂದು ಸಿಎಂ ಹೇಳಿದ್ದಾರೆ.