
ಸಾಧನಾ ಸಮಾವೇಶದಲ್ಲಿ ಭಾಗವಹಿಸಿರುವ ಕಾಂಗ್ರೆಸ್ ಕಾರ್ಯಕರ್ತರು
ಸರ್ಕಾರದ ಸಾಧನಾ ಸಮಾವೇಶದಲ್ಲಿ ಸಿಎಂ ಅಭಿಮಾನಿಗಳದ್ದೇ ಅಬ್ಬರ
ಮೈಸೂರು ಸಿಎಂ ಅವರ ತವರು ಕ್ಷೇತ್ರವಾಗಿರುವುದರಿಂದ ಸಹಜವಾಗಿಯೇ ಅವರಿಗೆ ಬೆಂಬಲ ವ್ಯಕ್ತವಾಗುತ್ತಿದೆ ಎನ್ನುವುದರ ಜತೆಗೆ ಈ ವೇದಿಕೆಯ ಮೂಲಕ ತಮ್ಮ ಸ್ಥಾನ ಭದ್ರ ಮಾಡಿಕೊಳ್ಳುವ ದಾಳ ಉರುಳಿಸಿದ್ದಾರೆ.
ಮೈಸೂರಿನಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮ ಅಕ್ಷರಶಃ ಸಿಎಂ ಸಿದ್ದರಾಮಯ್ಯ ಮಯವಾಗಿದೆ.
ಸಿಎಂ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿರುವ ಈ ಸಂದರ್ಭದಲ್ಲಿ ನಡೆಯುತ್ತಿರುವ ಸಮಾವೇಶ ಸಾಕಷ್ಟು ರಾಜಕೀಯ ಮಹತ್ವ ಪಡೆದುಕೊಂಡಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇಡೀ ಸಮಾವೇಶ ಕುತೂಹಲ ಮೂಡಿಸಿದೆ.
ನಗರದಲ್ಲಿ ಎಲ್ಲಿ ನೋಡಿದರೂ ಅಭಿಮಾನಿಗಳು ಸಿದ್ದರಾಮಯ್ಯ ಅವರ ಫೋಟೋ ಪ್ರದರ್ಶನ ಮಾಡುತ್ತಾ ಅವರ ಪರವಾಗಿ ಘೋಷಣೆ ಕೂಗುತ್ತಿದ್ದಾರೆ. ಮೈಸೂರು ಸಿಎಂ ಅವರ ತವರು ಕ್ಷೇತ್ರವಾಗಿರುವುದರಿಂದ ಸಹಜವಾಗಿಯೇ ಅವರಿಗೆ ಬೆಂಬಲ ವ್ಯಕ್ತವಾಗುತ್ತಿದೆ ಎನ್ನುವುದರ ಜತೆಗೆ ಈ ವೇದಿಕೆಯ ಮೂಲಕ ತಮ್ಮ ಸ್ಥಾನ ಭದ್ರ ಮಾಡಿಕೊಳ್ಳುವ ದಾಳ ಉರುಳಿಸಿದ್ದಾರೆ ಎನ್ನುವ ಮಾತುಗಳೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ಸಾಧನಾ ಸಮಾವೇಶದ ಮೂಲಕ ತನ್ನ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಹಾಗೂ ರಾಜಕೀಯ ವಿರೋಧಿಗಳಿಗೆ ಸಂದೇಶ ರವಾನಿಸಲಿದ್ದಾರೆ. ಆ ಮೂಲಕ ಸಿಎಂ ಕುರ್ಚಿಯನ್ನು ಮತ್ತಷ್ಟು ಭದ್ರಪಡಿಸಿಕೊಳ್ಳಲು ಮುಂದಾಗಿದ್ದಾರೆ. ಸಮಾವೇಶದ ಸಂಪೂರ್ಣ ಜವಬ್ದಾರಿಯನ್ನು ಸಿಎಂ ಆಪ್ತ, ಮೈಸೂರು ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹದೇವಪ್ಪ ವಹಿಸಿಕೊಂಡಿದ್ದು ಸಿದ್ದರಾಮಯ್ಯರ ಕೈ ಬಲ ಪಡಿಸಲೆಂದೇ ಈ ಕಾರ್ಯಕ್ರಮ ಮಾಡಿದಂತಿದೆ.
ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹೈಕಮಾಂಡ್ ನಾಯಕರು ಹಾಗೂ ಸಚಿವರು ಭಾಗವಹಿಸಿದ್ದಾರೆ