
ಪರಿಶಿಷ್ಟ ಜಾತಿ-ಪಂಗಡದ ದೌರ್ಜನ್ಯ ತಡೆ ಸಮಿತಿಯ ಸಭೆಯಲ್ಲಿ ಸಿಎಂ ಮಾತನಾಡಿದರು.
ಎಸ್‌ಸಿ-ಎಸ್‌ಟಿ ದೌರ್ಜನ್ಯ ಪ್ರಕರಣ | ಆರೋಪಿಗಳ ಜೊತೆ ಶಾಮೀಲಾಗುವ ಪೊಲೀಸರ ವಿರುದ್ಧ ಕಠಿಣ ಕ್ರಮ; ಸಿಎಂ ಎಚ್ಚರಿಕೆ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾದರೆ ಅಂತವರ ವಿರುದ್ಧ ಕಠಿಣ, ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಬೆಂಗಳೂರಿನ ವಿಧಾನಸೌಧದ ಸಭಾಂಗಣದಲ್ಲಿ ಸೋಮವಾರ ನಡೆದ ರಾಜ್ಯ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ(ದೌರ್ಜನ್ಯ ನಿಯಂತ್ರಣ) ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದೆ. ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60ದಿನಗಳ ಒಳಗೆ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲು ಪೊಲೀಸರು ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11ವಿಶೇಷ ನ್ಯಾಯಾಲಯ ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು ಎಂದು ಹೇಳಿದರು.
ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು. ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಸಭೆಯಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಆರ್.ಬಿ.ತಿಮ್ಮಾಪುರ ಸೇರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.