
ಸಿಎಂ ಸಿದ್ದರಾಮಯ್ಯ
ವಿಪಕ್ಷಗಳ ಆಕ್ರೋಶಕ್ಕೆ ಮಣಿದ ಸಿಎಂ: ಪ್ರತಿ ಕ್ಷೇತ್ರಕ್ಕೆ 25 ಕೋಟಿ ರೂಪಾಯಿ ಅನುದಾನ ಬಿಡುಗಡೆಗೆ ಅಸ್ತು
ಈ ಹಿಂದೆ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಮಾತ್ರ ತಲಾ 50 ಕೋಟಿ ರೂಪಾಯಿ ಅನುದಾನ ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದರು. ಇದು ವಿರೋಧ ಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಸರ್ಕಾರ ತಾರತಮ್ಯ ಎಸಗುತ್ತಿದೆ ಎಂದು ವಿರೋಧ ಪಕ್ಷಗಳು ನಿರಂತರವಾಗಿ ಮಾಡುತ್ತಿದ್ದ ಆರೋಪ ಮತ್ತು ಆಕ್ರೋಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ಮಣಿದಿದ್ದಾರೆ. ವಿಪಕ್ಷ ಶಾಸಕರ ಕ್ಷೇತ್ರಗಳಿಗೂ ಸಮಾನವಾಗಿ ಅನುದಾನ ಹಂಚಿಕೆ ಮಾಡುವ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 25 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲು ಹಸಿರು ನಿಶಾನೆ ತೋರಿದ್ದಾರೆ.
ಈ ಹಿಂದೆ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಮಾತ್ರ ತಲಾ 50 ಕೋಟಿ ರೂಪಾಯಿ ಅನುದಾನ ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದರು. ಇದು ವಿರೋಧ ಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಸರ್ಕಾರದ ಈ ನಡೆ 'ದ್ವೇಷದ ರಾಜಕಾರಣ' ಎಂದು ಆರೋಪಿಸಿದ್ದ ವಿಪಕ್ಷಗಳು, ವಿಧಾನಸಭಾ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದವು. ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ಸಮಾನವಾಗಿ ಅನುದಾನ ಹಂಚಿಕೆಯಾಗಬೇಕು ಎಂದು ವಿಪಕ್ಷ ನಾಯಕರು ಬಲವಾಗಿ ಆಗ್ರಹಿಸಿದ್ದರು.
ಅನುದಾನ ಹಂಚಿಕೆ ಹೇಗೆ?
ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಈ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ. ಪ್ರತಿ ಕ್ಷೇತ್ರಕ್ಕೆ ನಿಗದಿಪಡಿಸಲಾದ 25 ಕೋಟಿ ರೂಪಾಯಿ ಅನುದಾನವನ್ನು ಈ ಕೆಳಗಿನಂತೆ ಹಂಚಿಕೆ ಮಾಡಲಾಗಿದೆ
ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳ ಅಡಿಯಲ್ಲಿ ಬರುವ ರಸ್ತೆ, ಸೇತುವೆ ಮತ್ತು ನಗರ ಪ್ರದೇಶಗಳ ಮೂಲಸೌಕರ್ಯ ಕಾಮಗಾರಿಗಳಿಗೆ 18.75 ಕೋಟಿ ರೂಪಾಯಿ ವಿನಿಯೋಗಿಸಲಾಗುತ್ತದೆ.
ಶಾಸಕರ ವಿವೇಚನಾಧಿಕಾರದ ಅಡಿಯಲ್ಲಿ, ಅವರು ತಮ್ಮ ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ಆಯ್ಕೆ ಮಾಡುವ ಇತರೆ ಇಲಾಖೆಗಳ ಕಾಮಗಾರಿಗಳಿಗೆ 6.25 ಕೋಟಿ ರೂಪಾಯಿ ಬಳಸಿಕೊಳ್ಳಬಹುದು.