
AI ಸವಾಲಿಗೆ ಕನ್ನಡ ಹೊಂದಿಕೊಳ್ಳುವ ತಂತ್ರಜ್ಞಾನ ಅಭಿವೃದ್ಧಿ: ಸಿಎಂ ಘೋಷಣೆ
ಕನ್ನಡ ಭಾಷೆ, ಪರಂಪರೆಗಳನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಬೇಕಾದ ಅನಿವಾರ್ಯತೆ ಇರುವುದರಿಂದ ಹೊಸ ನೀತಿ ತರುವ ಸಿದ್ಧತೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದು, ಕೃತಕ ಬುದ್ಧಿಮತ್ತೆ(AI) ಪ್ರತಿ ಕ್ಷೇತ್ರದಲ್ಲಿಯೂ ಅನಿವಾರ್ಯವಾಗಿದೆ. ಇದರಿಂದ ಉದ್ಯೋಗಕ್ಕೆ ಕತ್ತರಿ ಬೀಳುವ ಜತೆಗೆ ಭಾಷೆಯ ಮೇಲೂ ವ್ಯಾಪಕ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾಷಾ ಅಭಿವೃದ್ಧಿಗೆ ಪೂರಕವಾಗುವ ಹೊಸ ನೀತಿ ರೂಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆಯಿಂದ ಉಂಟಾಗಬಹುದಾದ ಉದ್ಯೋಗ ನಷ್ಟದ ಕುರಿತು ಎಚ್ಚರಿಕೆ ನೀಡಿದ ಅವರು, ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವ ಇಂದಿನ ಕಾಲದಲ್ಲಿ ಮಾನವ ಶ್ರಮದ ಅವಲಂಬನೆ ಕಡಿಮೆಯಾಗುತ್ತಿದೆ ಎಂದು ಹೇಳಿದರು.
ಕೃತಕ ಬುದ್ಧಿಮತ್ತೆನಿಂದ (ಎಐ) ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ಹೊಸ ಸವಾಲಿಗೆ ತಕ್ಕಂತೆ ಭಾಷೆ ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ. ಕನ್ನಡ ಭಾಷೆಯನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಬೇಕು. ಮಾಹಿತಿ ತಂತ್ರಜ್ಞಾನ ಯುಗ ಈಗ ಎಐ ತಂತ್ರಜ್ಞಾನದ ಯುಗವಾಗಿ ಮಾರ್ಪಟ್ಟಿದೆ. ಇದರಿಂದ ಉದ್ಯೋಗ ನಷ್ಟವಾಗಬಹುದು ಎಂಬ ಆತಂಕವೂ ಎದುರಾಗಿದೆ.
ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸುವ ಕಾರ್ಯವನ್ನೂ ಸರ್ಕಾರ ಮಾಡುತ್ತಿದೆ. ಇದರ ಭಾಗವಾಗಿ ಕೃತಕ ಬುದ್ದಿಮತ್ತೆಯಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲಾಗುವುದು. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಬೇಕು ಎಂದು ಕರೆ ನೀಡಿದರು.
ನಗರದ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ಕನ್ನಡ ಭಾಷೆ, ಪರಂಪರೆಗಳನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಬೇಕಾದ ಅನಿವಾರ್ಯತೆ ಇರುವುದರಿಂದ ಇದಕ್ಕಾಗಿ ಹೊಸ ನೀತಿಯನ್ನು ತರುವ ಸಿದ್ಧತೆಯಲ್ಲಿದ್ದೇವೆ.
800 ಶಾಲೆಗಳು ಕೆಪಿಎಸ್ ಆಗಿ ಪರಿವರ್ತನೆ
ರಾಜ್ಯದಲ್ಲಿ ಶತಮಾನ ಪೂರೈಸಿರುವ ಸುಮಾರು 3 ಸಾವಿರ ಸರ್ಕಾರಿ ಶಾಲೆಗಳಿವೆ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ 2,500 ಕೋಟಿ. ರೂ.ವೆಚ್ಚದಲ್ಲಿ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಪರಿವರ್ತಿಸಲಾಗುವುದು. ಪ್ರತಿ ಶಾಲೆಯನ್ನು 4 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ ನೀಡುತ್ತಿದ್ದೇವೆ. ಅಲ್ಪಸಂಖ್ಯಾತ ಸಮುದಾಯಗಳು ಮುಖ್ಯವಾಹಿನಿಗೆ ಬರುವ ಜತೆಗೆ ಸುಲಭವಾಗಿ ಸಮಾಜದಲ್ಲಿ ಬೆರೆಯುವಂತೆ ಪ್ರಾಥಮಿಕ ಕನ್ನಡವನ್ನು ಮದರಸಾ ಶಿಕ್ಷಣದ ಭಾಗವಾಗಿ ಕಲಿಸಲು ಪ್ರಸ್ತುತ ವರ್ಷದಲ್ಲಿ 180 ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದೆ. ಇದನ್ನು ರಾಜ್ಯದಲ್ಲಿರುವ 1500 ಮದರಸಾಗಳಿಗೆ ವಿಸ್ತರಿಸಲಾಗುವುದು. ಇದಕ್ಕಾಗಿ 483 ಕೋಟಿ ರೂ. ವೆಚ್ಚದಲ್ಲಿ 100 ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಭಾಷೆಯ ನಿರ್ಲಕ್ಷ್ಯದಿಂದ ಸಮಸ್ಯೆ:
ಬಹು ಭಾಷೆ, ಬಹು ಧರ್ಮ, ಬಹು ಸಂಸ್ಕೃತಿ ಹಾಗೂ ಬಹು ಜನಾಂಗಗಳು ಒಟ್ಟುಗೂಡಿ ಬದುಕುವ ತತ್ವಗಳನ್ನು ಹಿರಿಯರು ಕಂಡುಕೊಂಡಿದ್ದು, ಹಿಂದಿನಿಂದಲೂ ಎಲ್ಲರೂ ಒಟ್ಟಾಗಿ ಬಾಳಿ ಬದುಕಿ ನಾಡನ್ನು ಕಟ್ಟಿ ನಿಲ್ಲಿಸಿ ಸಮೃದ್ಧಗೊಳಿಸಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಲು ಪ್ರಯತ್ನಿಸಿದ್ದಾರೆ. ಸಾವಿರಾರು ವರ್ಷಗಳಷ್ಟು ಹಳೆಯ ಇತಿಹಾಸವುಳ್ಳ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕಾಗಿದೆ. ಶಿಕ್ಷಣದಲ್ಲಿ ಕನ್ನಡ ಭಾಷೆಯ ನಿರ್ಲಕ್ಷ್ಯವು ಹಲವು ಸಮಸ್ಯೆಗಳನ್ನು ಹುಟ್ಟಿ ಹಾಕಿದೆ. ಜಗತ್ತಿನ ಮುಂದುವರೆದ ಭಾಷೆಗಳಿಗೆ ಇಲ್ಲದ ಬಿಕ್ಕಟ್ಟು ಇಂದು ಕನ್ನಡದಂತಹ ಭಾಷೆಗೆ ಬಂದಿದೆ. ಮುಂದುವರೆದ ದೇಶಗಳ ಮಕ್ಕಳು ತಮ್ಮ ತಾಯಿ ನುಡಿಗಳಲ್ಲಿಯೆ ಯೋಚಿಸುತ್ತಾರೆ, ಕಲಿಯುತ್ತಾರೆ ಮತ್ತು ಕನಸು ಕಾಣುತ್ತಾರೆ. ಆದರೆ ನಮ್ಮಲ್ಲಿ ಇದಕ್ಕೆ ತದ್ವಿರುದ್ಧವಾದ ಪರಿಸ್ಥಿತಿಯಿದೆ. ಇಂಗ್ಲೀಷ್ , ಹಿಂದಿಯಂತಹ ಭಾಷೆಗಳು ನಮ್ಮ ಮಕ್ಕಳ ಪ್ರತಿಭೆಯನ್ನು ಭಾಷೆಯ ಕಾರಣಕ್ಕೆ ದುರ್ಬಲಗೊಳಿಸುತ್ತಿವೆ. ಹಾಗಾಗಿ ಮಾತೃಭಾಷೆಯಲ್ಲಿಯೆ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲು ಸೂಕ್ತ ಕಾನೂನುಗಳನ್ನು ತರಬೇಕಾದ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರವೂ ಗಮನ ಹರಿಸಬೇಕೆಂದು ಒತ್ತಾಯಿಸುತ್ತೇನೆ ಎಂದರು.
ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ
ಒಕ್ಕೂಟ ಸರ್ಕಾರವು ಕಳೆದ ಕೆಲವು ವರ್ಷಗಳಿಂದ ಮಲತಾಯಿ ಧೋರಣೆಯನ್ನು ತೋರುತ್ತಿದೆ. 4.5 ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚಿನ ತೆರಿಗೆ ಸಂಪತ್ತನ್ನು ಕರ್ನಾಟಕವು ನೀಡುತ್ತಿದೆ. ಆದರೆ ನಮಗೆ ಬಿಡಿಗಾಸು ಕೊಟ್ಟು ಪ್ರತಿ ವರ್ಷ ಸಾವಿರಾರು ಕೋಟಿ ರೂ. ವಂಚಿಸುತ್ತಿದೆ. ಹಿಂದಿ ಭಾಷೆಯನ್ನು ಹೇರಿಕೆ ಮಾಡಲು ನಿರಂತರ ಹುನ್ನಾರ ನಡೆಯುತ್ತಿದೆ. ಹಿಂದಿ, ಸಂಸ್ಕೃತ ಭಾಷೆಗಳ ಅಭಿವೃದ್ಧಿಗೆ ಮಾತ್ರ ಅನುದಾನಗಳನ್ನು ನೀಡಲಾಗುತ್ತಿದೆ. ಕನ್ನಡವೂ ಸೇರಿದಂತೆ ಉಳಿದ ದೇಶಭಾಷೆಗಳನ್ನು ನಿರ್ಲಕ್ಷಿಸಲಾಗುತ್ತಿದೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಬೇಕಾಗಿದ್ದ ಯೋಜನೆಗಳನ್ನು ರಾಜ್ಯಕ್ಕೆ ಕೊಡದೆ ವಂಚಿಸಲಾಗುತ್ತಿದೆ. ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಲಾಗಿದ್ದರೂ, ರಾಜ್ಯಕ್ಕೆ ನೀಡಬೇಕಾದ ಅನುದಾನಗಳನ್ನೂ ಕೊಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಪ್ರತ್ಯೇಕ ವಸತಿ ಶಾಲೆ
ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಪ್ರತ್ಯೇಕ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಕ್ಯಾನ್ಸರ್‌ನಿಂದ ಬಾಧಿತರಾದ ಮಕ್ಕಳಿಗೆ ವೈದ್ಯಕೀಯ ಬೆಂಬಲದೊಂದಿಗೆ ಶಿಕ್ಷಣವನ್ನು ಒದಗಿಸುವ ಕೆಲಸ ಮಾಡಲಾಗುತ್ತಿದೆ. ಶಿಕ್ಷಣ ಕ್ಷೇತ್ರದ ಬಲವರ್ಧನೆಗಾಗಿ ಈ ವರ್ಷ 65 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಸಂಪನ್ಮೂಲಗಳನ್ನು ವಿನಿಯೋಗಿಸುತ್ತಿದ್ದೇವೆ. ನಮ್ಮ ವಸತಿ ಶಾಲೆಗಳು, ವಸತಿ ನಿಲಯಗಳಲ್ಲಿ 8.36 ಲಕ್ಷಕ್ಕೂ ಹೆಚ್ಚಿನ ಮಕ್ಕಳು ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಹೊಸದಾಗಿ ವಸತಿ ಶಾಲೆಗಳು, ವಸತಿ ನಿಲಯಗಳನ್ನು ಸ್ಥಾಪಿಸುತ್ತಿದ್ದೇವೆ. ಕಾಲಕಾಲಕ್ಕೆ ಶಿಕ್ಷಕರ ನೇಮಕಾತಿ ಮತ್ತು ತರಬೇತಿಗಳನ್ನು ನಡೆಸಲಾಗುತ್ತಿದೆ.
2024ರಲ್ಲಿ 14,499 ಪದವಿ ಪ್ರಾಥಮಿಕ ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಮತ್ತು ಇತರೆ ಪ್ರದೇಶಗಳಲ್ಲಿ 5,000 ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದೆ. 800 ಹೊಸ ಪಿಯು ಉಪನ್ಯಾಸಕರ ನೇಮಕಾತಿ ಮಾಡಲಾಗಿದೆ. ಹೊಸದಾಗಿ 18000 ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ. ಅನುದಾನಿತ ಶಾಲೆಗಳಿಗೆ 5,000 ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಲು ಅನುಮತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಇತ್ತೀಚೆಗೆ ಪ್ರೊ.ಸುಖ್‌ದೇವ್ ಥೋರಟ್ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ರಾಜ್ಯ ಶಿಕ್ಷಣ ನೀತಿ ಆಯೋಗವು ವರದಿಯನ್ನು ನೀಡಿದೆ. ರಾಜ್ಯದ್ದೇ ಆದ ಶಿಕ್ಷಣ ನೀತಿಯು ರಚನೆಯಾಗಿರುವುದು ಇದೇ ಮೊದಲು. ಸದರಿ ವರದಿಯನ್ನು ಗಂಭೀರವಾಗಿ ಪರಿಶೀಲಿಸಿ ಅದರ ಅನುಷ್ಠಾನಕ್ಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳ ಜತೆಗೆ ಮಕ್ಕಳ ಬದುಕು ರೂಪುಗೊಳ್ಳಲು ಪೋಷಕರ ಪಾತ್ರವೂ ಅಷ್ಟೇ ಮಹತ್ವದ್ದಾಗಿದೆ.
ಹೊಸ ತಲೆಮಾರು ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಸಂಕಷ್ಟಗಳನ್ನು ಎದುರಿಸುತ್ತಿದೆ. ರಾಜ್ಯವು ತಲಾದಾಯದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಶೇ.101 ರಷ್ಟು ಪ್ರಗತಿಯನ್ನು ಸಾಧಿಸಿದೆ. ಈ ಮೂಲಕ ಅತಿ ಹೆಚ್ಚು ತಲಾದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ಜನರಲ್ಲಿ ಕೊಳ್ಳುವ ಸಾಮರ್ಥ್ಯ ವನ್ನು ಹೆಚ್ಚಿಸಿ, ಅವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುವ ಮೂಲಕ ಅಭಿವೃದ್ಧಿ ಸಾಧ್ಯ ಎಂಬುದನ್ನು ಸಾಧಿಸಿ ತೋರಿಸಿದ್ದೇವೆ. ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆಂದು ಈ ವರ್ಷ ವಿಶೇಷವಾಗಿ 8 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಅನುದಾನವನ್ನು ನೀಡುತ್ತಿದ್ದೇವೆ ಎಂದು ಹೇಳಿದರು.

