
ರಾಜೀವ್ ಗೌಡ ವಿರುದ್ಧ ಎಫ್‌ಐಆರ್
ಪೌರಯುಕ್ತೆಗೆ ಜೀವ ಬೆದರಿಕೆ: ರಾಜೀವ್ ಗೌಡ ವಿರುದ್ಧ FIR, ಆರೋಪಿ ಪರಾರಿ
ಐಆರ್ ದಾಖಲಾಗುತ್ತಿದ್ದಂತೆ ರಾಜೀವ್ ಗೌಡ ಪರಾರಿಯಾಗಿದ್ದಾರೆ. ಈ ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ.
ನಗರಸಭೆಯ ಮಹಿಳಾ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿರುವ ಗಂಭೀರ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸದ್ಯ ತಲೆಮರೆಸಿಕೊಂಡಿದ್ದಾರೆ.
ನಗರದಲ್ಲಿ ಅಕ್ರಮವಾಗಿ ಅಳವಡಿಸಲಾಗಿದ್ದ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿದ್ದ ರಾಜೀವ್ ಗೌಡ, ಪೌರಾಯುಕ್ತೆಗೆ ದೂರವಾಣಿ ಕರೆ ಮಾಡಿ "ಕಚೇರಿಗೆ ಬೆಂಕಿ ಹಚ್ಚುತ್ತೇನೆ, ನಿನ್ನನ್ನು ಸುಟ್ಟು ಹಾಕುತ್ತೇನೆ" ಎಂದು ಬೆದರಿಕೆ ಹಾಕಿದ್ದರು ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಈ ಸಂಬಂಧ ಪೌರಾಯುಕ್ತೆ ನೀಡಿದ ದೂರಿನ ಮೇರೆಗೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗುತ್ತಿದ್ದಂತೆ ರಾಜೀವ್ ಗೌಡ ಪರಾರಿಯಾಗಿದ್ದಾರೆ. ಈ ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ.
ವಿವಿಧ ಸೆಕ್ಷನ್ಸ್ ಅಡಿಯಲ್ಲಿ ಪ್ರಕರಣ ದಾಖಲು
ಪೌರಾಯುಕ್ತೆ ನೀಡಿದ ದೂರಿನನ್ವಯ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಠಿಣ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ BNS ಸೆಕ್ಷನ್ 132, ಕಚೇರಿಗೆ ಬೆಂಕಿ ಹಚ್ಚುವ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತರುವ ಬೆದರಿಕೆ ಹಾಕಿದ್ದಕ್ಕಾಗಿ ಸೆಕ್ಷನ್ 351(3), ಅಪರಾಧಕ್ಕೆ ಪ್ರಚೋದನೆ ನೀಡಿದ ಸಂಬಂಧ ಸೆಕ್ಷನ್ 56 ಹಾಗೂ ಸರ್ಕಾರಿ ನೌಕರನಿಗೆ ದೈಹಿಕ ಮತ್ತು ಮಾನಸಿಕವಾಗಿ ಹಾನಿ ಮಾಡುವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಸೆಕ್ಷನ್ 224 ರ ಅಡಿ ದೂರು ದಾಖಲಾಗಿದೆ. ಅಲ್ಲದೆ, ಸಮಾಜದಲ್ಲಿ ಶಾಂತಿ ಭಂಗ ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸಿದ ಕಾರಣಕ್ಕೆ ಸೆಕ್ಷನ್ 352 ರ ಅಡಿಯಲ್ಲಿಯೂ ಕೇಸ್ ದಾಖಲಿಸಲಾಗಿದೆ.
ಈ ಘಟನೆಯನ್ನು ಖಂಡಿಸಿ ನಗರಸಭೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಮಹಿಳಾ ಅಧಿಕಾರಿಗೆ ರಕ್ಷಣೆ ನೀಡದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕೂಡ ರಾಜೀವ್ ಗೌಡ ಅವರನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಏನಿದು ಘಟನೆ?
ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಜೀವಬೆದರಿಕೆ ಹಾಕಿರುವ ಪ್ರಕರಣವು ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಗರದಲ್ಲಿ ಅಕ್ರಮವಾಗಿ ಅಳವಡಿಸಲಾಗಿದ್ದ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪೌರಾಯುಕ್ತರು ತೆರವುಗೊಳಿಸಿದ್ದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪೌರಾಯುಕ್ತರಿಗೆ ಫೋನ್ ಕರೆ ಮಾಡಿದ್ದ ಕೆಪಿಸಿಸಿ ರಾಜ್ಯ ಸಂಯೋಜಕ ರಾಜೀವ್ ಗೌಡ, ಅತ್ಯಂತ ಅಶ್ಲೀಲ ಪದಗಳಿಂದ ಮಹಿಳಾ ಅಧಿಕಾರಿಯನ್ನು ನಿಂದಿಸಿದ್ದಲ್ಲದೆ, ಜನರನ್ನು ಸೇರಿಸಿ ಚಪ್ಪಲಿಯಿಂದ ಹೊಡೆಸುವುದಾಗಿ ಮತ್ತು ತಾಲೂಕು ಬಿಟ್ಟು ಓಡಿಸುವುದಾಗಿ ಬೆದರಿಕೆ ಹಾಕಿದ್ದರು. ಈ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಸಾರ್ವಜನಿಕ ವಲಯದಲ್ಲಿ ಮತ್ತು ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಯಿತು.
ಆಡಿಯೋದಲ್ಲಿ ಏನಿದೆ?
ಅಧಿಕಾರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವುದಲ್ಲದೆ, ಸ್ಥಳೀಯ ಶಾಸಕರನ್ನೂ ಏಕವಚನದಲ್ಲಿ ಬೈಯಲಾಗಿತ್ತು. ಅಷ್ಟೇ ಅಲ್ಲದೆ, "ಜನರನ್ನು ಸೇರಿಸಿ ನಿನಗೆ ಚಪ್ಪಲಿಯಿಂದ ಹೊಡೆಸುತ್ತೇನೆ" ಎಂಬ ಗಂಭೀರ ಬೆದರಿಕೆ ಹಾಕಿದ ಆಡಿಯೋ ಎಲ್ಲೆಡೆ ವೈರಲ್ ಆಗಿತ್ತು.

