
ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ
ಮತ ಕಳವು ಆರೋಪ| ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪ್ರತಿಭಟನೆ ಆ.8ಕ್ಕೆ ಮುಂದೂಡಿಕೆ
ಮತಕಳವು ಆರೋಪ ಮಾಡಿದ್ದ ಕಾಂಗ್ರೆಸ್ ಪಕ್ಷವು ಆಗಸ್ಟ್ 5ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದು ನಿಗದಿಯಾಗಿತ್ತು.
ಬೆಂಗಳೂರಿನ ಲೋಕಸಭಾ ಕ್ಷೇತ್ರವೊಂದರಲ್ಲಿ ಮತಕಳವು ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಆ.5ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪ್ರತಿಭಟನೆಯನ್ನು ಆ.೮ಕ್ಕೆ ಮುಂದೂಡಲಾಗಿದೆ.
ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮತ ಕಳವು ಆರೋಪಕ್ಕೆ ಸಂಬಂಧಿಸಿದ ದಾಖಲೆ ಬಿಡುಗಡೆಗೆ ಉದ್ದೇಶಿಸಲಾಗಿತ್ತು. ಈಗ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ "ಅಕ್ರಮ" ನಡೆದಿದೆ. "ಅನಧಿಕೃತವಾಗಿ ಮತದಾನ ತಿರುಚಲಾಗಿದೆ" ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದರು. ಮತಗಳವು ಆರೋಪ ಸಾಬೀತುಪಡಿಸಲು ತಮ್ಮ ಬಳಿ ಪುರಾವೆಗಳಿವೆ ಎಂದು ಹೇಳಿದ್ದರು.
ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿರುವ ಬಗ್ಗೆ ಕಾಂಗ್ರೆಸ್ ಪಕ್ಷದಿಂದ ಅಧ್ಯಯನ ನಡೆಸಲಾಗಿತ್ತು. ಬೆಂಗಳೂರಿನಲ್ಲೇ ಮತಕಳವು ಆರೋಪ ಸಾಬೀತುಪಡಿಸಲು ದಾಖಲೆ ಬಿಡುಗಡೆ ಮಾಡುವುದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದರು. ಹಾಗಾಗಿ ಫ್ರೀಡಂ ಪಾರ್ಕ್ನಲ್ಲಿ ಆ.5ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಇದೀಗ ದಿಢೀರನೇ ಪ್ರತಿಭಟನೆಯನ್ನು ಆ.8ಕ್ಕೆ ಮುಂದೂಡಲಾಗಿದೆ.
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನದ ಹಿನ್ನೆಲೆಯಲ್ಲಿ ಅಂತಿಮ ನಮನ ಸಲ್ಲಿಸಲು ಹಿರಿಯ ನಾಯಕರು ತೆರಳುತ್ತಿದ್ದಾರೆ. ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಾರ್ಖಂಡ್ಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಆ.5ರಂದು ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಸುರ್ಜೇವಾಲ ಹೇಳಿದ್ದಾರೆ.