ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಹಕಾರ ಸಚಿವ ಕೆ ಎನ್ ರಾಜಣ್ಣ
ಸಹಕಾರ ಸಚಿವ ಕೆ ಎನ್ ರಾಜಣ್ಣ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. “ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತೇನೆ. ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ” ಎಂದಿದ್ದಾರೆ.
ತುಮಕೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕೆ ಎನ್ ರಾಜಣ್ಣ ಚುನಾವಣಾ ರಾಜಕೀಯಕ್ಕೆ ಮಾತ್ರ ನಿವೃತ್ತಿ ಘೋಷಣೆ ಮಾಡುತ್ತಾರೆ. ಸಕ್ರಿಯ ರಾಜಕೀಯದಲ್ಲಿ ಇದ್ದೇ ಇರುತ್ತೇನೆ. ಬೇಕಾದವರನ್ನು ಗೆಲ್ಲಿಸುವುದು, ಬೇಡವಾದವರನ್ನು ಸೋಲಿಸುವ ನನ್ನ ಮುಂದಿನ ಕೆಲಸ” ಎಂದು ಹೇಳಿದರು.
“ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡಿಸುತ್ತಿಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡಿಸುತ್ತೇನೆ. ನಾನು ಪ್ರತಿನಿಧಿಸುವ ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡುವ ಪ್ರಯತ್ನವನ್ನು ಮುಂದುವರೆಸುತ್ತೇನೆ. ನನ್ನ ಅಧಿಕಾರ ಮುಗಿಯುವುದರೊಳಗೆ ಜಿಲ್ಲಾ ಕೇಂದ್ರ ಮಾಡಿಸುತ್ತೇನೆ” ಎಂದು ಭರವಸೆ ನೀಡಿದರು.
ಸಿಎಂ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿ, “ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ. ಯಾವ ಅನುಮಾನವೂ ಬೇಡ. ಬಿಜೆಪಿಯಲ್ಲಿ ಎಷ್ಟು ಬಾರಿ ಸಿಎಂ ಬದಲಾವಣೆ ಆಗಿದೆ. ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ” ಎಂದರು.
ಕೆ ಎನ್ ರಾಜಣ್ಣ ಹಾಲಿ ಮಧುಗಿರಿ ಕ್ಷೇತ್ರದ ಶಾಸಕರು. 2023ರ ವಿಧಾನಸಭೆ ಚುನಾವಣೆಯಲ್ಲಿ 91,166 ಮತಗಳನ್ನು ಪಡೆದು ಜೆಡಿಎಸ್‌ನ ಎಂ ವಿ ವೀರಭದ್ರಯ್ಯ ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಹಕಾರ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.