Covid | ಶೀತ, ಜ್ವರ ಇದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ; ಪೋಷಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
x

ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಕೋವಿಡ್‌ ಕುರಿತು ಮಹತ್ವದ ಸಭೆ ನಡೆಸಿದರು

Covid | ಶೀತ, ಜ್ವರ ಇದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ; ಪೋಷಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸದ್ಯ ಕೋವಿಡ್‌ ಕುರಿತು ಆತಂಕಪಡುವ ಅಗತ್ಯವಿಲ್ಲ. ಆದರೆ, ಸಂಭವನೀಯ ಪರಿಸ್ಥಿತಿ ಅವಲೋಕಿಸಿ ಅಗತ್ಯವಾದ ಕ್ರಮ, ಸಿದ್ಧತೆ ಕೈಗೊಳ್ಳಬೇಕು. ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯ ವಸ್ತುಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.


ಮಕ್ಕಳಿಗೆ ಶೀತ, ನೆಗಡಿ, ಜ್ವರ ಇದ್ದರೆ ಯಾವುದೇ ಕಾರಣಕ್ಕೂ ಶಾಲೆಗೆ ಕಳುಹಿಸಬಾರದು. ಶಾಲಾ ಆಡಳಿತ ಮಂಡಳಿಗಳು ಕೂಡ ಅನಾರೋಗ್ಯದ ಲಕ್ಷಣ ಹೊಂದಿರುವ ಮಕ್ಕಳನ್ನು ವಾಪಸ್‌ ಮನೆಗೆ ಕಳುಹಿಸಿಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ ಅವಲೋಕಿಸಲು ಸೋಮವಾರ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಈ ಸೂಚನೆ ನೀಡಿದ್ದಾರೆ.

ಸದ್ಯ ಕೋವಿಡ್‌ ಕುರಿತು ಆತಂಕಪಡುವ ಅಗತ್ಯವಿಲ್ಲ. ಆದರೆ, ಸಂಭವನೀಯ ಪರಿಸ್ಥಿತಿ ಅವಲೋಕಿಸಿ ಅಗತ್ಯವಾದ ಕ್ರಮ, ಸಿದ್ಧತೆ ಕೈಗೊಳ್ಳಬೇಕು. ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯ ವಸ್ತುಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸಬೇಕು. ಈ ಸಂಬಂಧ ಜನರಲ್ಲಿ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಮೂರು ದಿನಕ್ಕೊಮ್ಮೆ ಪರಿಸ್ಥಿತಿ ಅವಲೋಕನ

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ವಸ್ತುಸ್ಥಿತಿ ಪರಿಶೀಲನೆ ನಡೆಸಬೇಕು. ಪ್ರಕರಣಗಳ ಪತ್ತೆ, ಹರಡುವಿಕೆ ಕುರಿತು ತೀವ್ರ ನಿಗಾ ವಹಿಸಬೇಕು. ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಸಮರ್ಪಕ ಚಿಕಿತ್ಸೆ ಸಿಗುವಂತೆ ವ್ಯವಸ್ಥೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪರಿಸ್ಥಿತಿ ಎದುರಿಸಲು ಸರ್ವಸನ್ನದ್ಧವಾಗಿರಿ

ಕೋವಿಡ್‌ ಸಂಬಂಧಿತ ಎಂತಹದ್ದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ಇಲಾಖೆಗಳು ಸರ್ವ ಸನ್ನದ್ಧವಾಗಿರಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ. ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಿಂದ ಪ್ರಸ್ತುತ ವಸ್ತುಸ್ಥಿತಿಯ ಮಾಹಿತಿ ಪಡೆದ ಸಿಎಂ, ಕಳೆದ ಜನವರಿಯಿಂದಲೂ ಕೋವಿಡ್‌ ಪ್ರಕರಣಗಳು ಅಲ್ಲಲ್ಲಿ ಒಂದೆರಡು ಕಂಡು ಬರುತ್ತಿವೆ. ಮೇ ತಿಂಗಳಲ್ಲಿ ಅವುಗಳ ಸಂಖ್ಯೆ ಉಲ್ಬಣವಾಗಿದ್ದು, ಈ ಮಾಸಾಂತ್ಯದಲ್ಲಿ 62 ಪ್ರಕರಣಗಳು ವರದಿಯಾಗಿವೆ. ಆದರೆ, ಗಂಭೀರ ಪ್ರಕರಣಗಳ ಸಂಖ್ಯೆ ಕೇವಲ ಒಂದು ಮಾತ್ರ ಇದೆ ಎಂದು ಹೇಳಿದ್ದಾರೆ.

SARI (ತೀವ್ರ ಉಸಿರಾಟದ ಸಮಸ್ಯೆ) ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳುನಾಡಿನಲ್ಲಿ 66, ಮಹಾರಾಷ್ಟ್ರದಲ್ಲಿ 56 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಹೆಚ್ಚು ಪ್ರಕರಣಗಳು ಹರಡದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಾಣಂತಿಯರ ಬಗ್ಗೆ ವಿಶೇಷ ಕಾಳಜಿ ವಹಿಸಿ

ಬಾಣಂತಿ ಹಾಗೂ ಮಕ್ಕಳ ಆರೋಗ್ಯ ಬಗ್ಗೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೊನಾ ಸಹಾಯವಾಣಿ ಪ್ರಾರಂಭ ಮಾಡಬೇಕು ಎಂದು ಸಿಎಂ ಸೂಚಿಸಿದರು.

ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಿನಿಂದ ಬರುವ ಪ್ರಯಾಣಿಕರಿಗಾಗಿ ತಪಾಸಣಾ ಘಟಕಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುವುದು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ತಾಳಬಾರದು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸಾ ವ್ಯವಸ್ಥೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಹೇಳಿದ್ದಾರೆ.

ಆರೋಗ್ಯ ಇಲಾಖೆ ಸಿಬ್ಬಂದಿಗೆ ರಜೆ ಇಲ್ಲ

ಕೋವಿಡ್‌ ಪ್ರಕರಣಗಳ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದೆ. ಯಾವುದೇ ಕಾರಣಕ್ಕೂ ಸಿಬ್ಬಂದಿ ರಜೆ ಹಾಕದೇ ಕೇಂದ್ರ ಸ್ಥಾನದಲ್ಲಿಯೇ ಉಳಿಯಬೇಕು. ಕೋವಿಡ್‌ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರೂಪಾಂತರಿ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಮುನ್ನೆಚ್ಚರಿಕೆಯಾಗಿ ಕ್ರಮವಾಗಿ ವ್ಯಾಕ್ಸಿನ್ ಗಳನ್ನು ಸಿದ್ದವಾಗಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

Read More
Next Story