ಸರ್ಕಾರಿ ನೌಕರರ ಸಂಘದ ಚುನಾವಣೆ | ಅಧ್ಯಕ್ಷ ಸ್ಥಾನಕ್ಕೆ ಸಿ.ಎಸ್.ಷಡಾಕ್ಷರಿ ಸರ್ವಾನುಮತದ ಅಭ್ಯರ್ಥಿ
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ನಡೆದ ವಿವಿಧ ಜಿಲ್ಲೆಗಳ ಅಧ್ಯಕ್ಷರು, ತಾಲೂಕು ಅಧ್ಯಕ್ಷರು ಹಾಗೂ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು, ಪದಾಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ರಾಜ್ಯ ಖಜಾಂಚಿ ಸೇರಿ ಪದಾಧಿಕಾರಿಗಳ ಸ್ಥಾನಗಳಿಗೆ ಡಿ.27ರಂದು ಚುನಾವಣೆ ನಡೆಯಲಿದೆ. ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷರಾಗಿರುವ ಸಿ.ಎಸ್ ಷಡಾಕ್ಷರಿ ಅವರನ್ನೇ ಸರ್ವಾನುಮತದ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ನಡೆದ ವಿವಿಧ ಜಿಲ್ಲೆಗಳ ಅಧ್ಯಕ್ಷರು, ತಾಲೂಕು ಅಧ್ಯಕ್ಷರು ಹಾಗೂ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು, ಪದಾಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಕೊಪ್ಪಳ ಜಿಲ್ಲಾಧ್ಯಕ್ಷ ನಾಗರಾಜ್ ಜುಮ್ಮಣ್ಣ ಅವರನ್ನು ರಾಜ್ಯ ಖಜಾಂಚಿ ಸ್ಥಾನಕ್ಕೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ.
ಸೋಮವಾರ (ಡಿ.9) ಬೆಳಿಗ್ಗೆ 11:30ಕ್ಕೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಗೆ ಈ ಇಬ್ಬರೂ ನಾಮಪತ್ರ ಸಲ್ಲಿಸಲಿದ್ದಾರೆ. ಡಿ. 9 ರಿಂದ ಚುನಾವಣೆ ಪ್ರಕ್ರಿಯೆ ಆರಂಭವಾಗಲಿದ್ದು, ಡಿ. 27 ರಂದು ಚುನಾವಣೆ ನಡೆಯಲಿದೆ. ಅಂದೇ ಫಲಿತಾಂಶ ಹೊರಬೀಳಲಿದೆ.
ಚುನಾವಣಾ ವೇಳಾಪಟ್ಟಿ ಘೋಷಣೆ
ರಾಜ್ಯಾಧ್ಯಕ್ಷ ಮತ್ತು ಖಜಾಂಚಿ ಸ್ಥಾನದ ಚುನಾವಣೆ ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದೆ. ಡಿ.9 ರಂದು ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಡಿ. 18 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಡಿಸೆಂಬರ್ 19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿ.21 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಅಂದೇ ಅಂತಿಮ ಅಭ್ಯರ್ಥಿಗಳ ಪಟ್ಟಿಯೂ ಪ್ರಕಟವಾಗಲಿದೆ. ಅಗತ್ಯವಿದ್ದರೆ ಡಿ. 27ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ.
ಈಗಾಗಲೇ ಜಿಲ್ಲಾ, ತಾಲೂಕು ಹಾಗೂ ಬೆಂಗಳೂರು ರಾಜ್ಯ ಪರಿಷತ್ ಚುನಾವಣೆಗಳಲ್ಲಿ ಸಿ. ಎಸ್. ಷಡಾಕ್ಷರಿ ಬಣ ಮೇಲುಗೈ ಸಾಧಿಸಿದೆ. ರಾಜ್ಯ ಖಜಾಂಚಿ ಮತ್ತು ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಜಿಲ್ಲಾ ಸಂಘ, ತಾಲೂಕು ಸಂಘ, ಬೆಂಗಳೂರು ಪರಿಷತ್ ಹಾಗೂ ಯೋಜನಾ ಶಾಖೆಗಳಿಂದ ಆಯ್ಕೆಯಾಗಿರುವ 1006 ಮತದಾರರು ಅಂದು ಮತದಾನ ಮಾಡಲಿದ್ದಾರೆ.