CT Ravi Case | ಅಶ್ಲೀಲ ಪದಬಳಕೆ ಪ್ರಕರಣ: ಕಾನೂನು ಹೋರಾಟಕ್ಕೆ ಮುಂದಾದ ಸಿ.ಟಿ ರವಿ
ಏಳು ಪುಟಗಳ ವಿಸ್ತಾರವಾದ ದೂರಿನಲ್ಲಿ ಸಿಟಿ ರವಿ ಅವರು, ಸದನದಲ್ಲಿ ನಡೆದ ಘಟನೆ, ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
ಬೆಳಗಾವಿ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ ಟಿ ರವಿ ಅವಾಚ್ಯ ಪದ ಬಳಕೆ ಆರೋಪ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿರುವ ಬೆನ್ನಲ್ಲೇ ಸಿ.ಟಿ ರವಿ ಕೂಡ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಪ್ರಕರಣದ ಬಗ್ಗೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅವರು ಸಭಾಪತಿ ಬಸವರಾಜ್ ಹೊರಟ್ಟಿ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಹಾಗೂ ಪೊಲೀಸ್ ಮಹಾ ನಿರೀಕ್ಷಕರಿಗೆ ದೂರು ನೀಡಿದ್ದು, 7 ಪುಟಗಳ ವಿಸ್ತಾರವಾದ ದೂರಿನಲ್ಲಿ ಸಿಟಿ ರವಿ ಅವರು, ಸದನದಲ್ಲಿ ನಡೆದ ಘಟನೆ, ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ಉಲ್ಲೇಖ ಮಾಡಿದ್ದಾರೆ.
ಸಿ ಟಿ ರವಿ ಅವರು ಘಟನೆಯ ಬಗ್ಗೆ ಸಂಪೂರ್ಣವಾಗಿ ದೂರಿನಲ್ಲಿ ಉಲ್ಲೇಖ ಮಾಡಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಪರಿಷತ್ ಸದಸ್ಯರಾದ ಬೋಸರಾಜ್ ಸೇರಿದಂತೆ ಹಲವರು ತನ್ನ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ಸಿಟಿ ರವಿ ನೀಡಿದ್ದಾರೆ.
ಸಭಾಪತಿಗಳಿಗೆ ಕೊಟ್ಟ ದೂರಿನಲ್ಲಿ ಪೊಲೀಸರಿಂದ ಹಕ್ಕು ಚ್ಯುತಿ ಆಗಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದು, ಜೀವ ಬೆದರಿಕೆ, ಮಾನಹಾನಿಯಾಗಿದೆ ಎಂದು ದೂರು ನೀಡಿದ್ದಾರೆ. ಅಲ್ಲದೇ, ಸಚಿವರ ಬೆಂಬಲಿಗರಿಂದ ಹಲ್ಲೆ ಯತ್ನ ನಡೆದ ಬಗ್ಗೆಯೂ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಸಿ.ಟಿ. ರವಿಗೆ ಸವಾಲು ಹಾಕಿದ ಲಕ್ಷ್ಮೀ ಹೆಬ್ಬಾಳ್ಕರ್
ಮತ್ತೊಂದು ಕಡೆ, ಸಿಟಿ ರವಿ ವಿರುದ್ಧದ ಅವಹೇಳನಕಾರಿ ಪದ ಬಳಕೆ ಆರೋಪವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿಟಿ ರವಿ ಅವರು ಅಶ್ಲೀಲ ಪದ ಬಳಸಿಲ್ಲ ಎಂಬುದೇ ನಿಜವಾದರೆ ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಸಿಟಿ ರವಿ ಪತ್ನಿ ಸಮೇತ ಧರ್ಮಸ್ಥಳಕ್ಕೆ ಬಂದು ಮಂಜುನಾಥನ ಎದುರು ಪ್ರಮಾಣ ಮಾಡಲಿ. ನಾನು ನನ್ನ ಕುಟುಂಬದ ಜೊತೆಗೆ ಬರುತ್ತೇನೆ. ಧರ್ಮಸ್ಥಳದಲ್ಲಿ ನನ್ನ ಉಪಸ್ಥಿತಿಯಲ್ಲಿ ಈ ಕುರಿತು ಪ್ರಮಾಣ ಮಾಡಲಿ ಎಂದು ಸಿ.ಟಿ ರವಿಗೆ ಸವಾಲೆಸೆದಿದ್ದಾರೆ.
ಸಿಟಿ ರವಿ ಪ್ರತಿಕ್ರಿಯೆ
ತಮಗೆ ಧರ್ಮಸ್ಥಳಕ್ಕೆ ಬರುವಂತೆ ಸವಾಲು ಹಾಕಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ತಿರುಗೇಟು ನೀಡಿರುವ ಸಿಟಿ ರವಿ, ಧರ್ಮಸ್ಥಳ ನಮಗೆ ಪಕ್ಕದಲ್ಲೇ ಇರುವ ಊರು. ನಾನು ಆಗಾಗ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಲೇ ಇರುತ್ತೇನೆ ಎಂದು ವ್ಯಂಗ್ಯದ ಧಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಸರ್ಕಾರದಿಂದ ಸಿಐಡಿ ತನಿಖೆ
ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕುರಿತ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಇನ್ನೂ ಕೆಲವರು ಅಶ್ಲೀಲ ಪದ ಬಳಸಿಲ್ಲ ಎಂದು ಹೇಳುತ್ತಿದ್ದಾರೆ. ಸಿಟಿ ರವಿ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಹೀಗಾಗಿ, ಸತ್ಯಾಸತ್ಯತೆ ತಿಳಿಯಲು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.