C T Ravi Case | ಅಶ್ಲೀಲ ಪದಬಳಕೆ ಪ್ರಕರಣ: ಸಿ.ಟಿ. ರವಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ರಾಜ್ಯ ಸರ್ಕಾರ!
ತನಿಖೆಯನ್ನು ಸರಿಯಾಗಿ ಮಾಡಬೇಕು. ಪ್ರಕರಣದ ಸತ್ಯಾಸತ್ಯತೆ ಹಾಗೂ ಎಲ್ಲಾ ವಿಚಾರಗಳ ಬಗ್ಗೆ ತನಿಖೆ ಆಗಬೇಕು ಎಂದೇ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿಯ ಮಾಜಿ ಸಚಿವ, ಎಂಎಲ್ಸಿ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕುರಿತ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಅವರು ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಇನ್ನೂ ಕೆಲವರು ಅಶ್ಲೀಲ ಪದ ಬಳಸಿಲ್ಲ ಎಂದು ಹೇಳುತ್ತಿದ್ದಾರೆ. ಸಿಟಿ ರವಿ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಹೀಗಾಗಿ, ಸತ್ಯಾಸತ್ಯತೆ ತಿಳಿಯಲು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ. ಸಭಾಪತಿ ತಮ್ಮ ಕೆಲಸ ಮಾಡಿದ್ದಾರೆ, ಪೊಲೀಸರು ತನಿಖೆ ಮಾಡಬೇಕು ಎಂದು ತಿಳಿಸಿದ್ದಾರೆ.
ಪ್ರಕರಣ ಮುಗಿದ ಅಧ್ಯಾಯ
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಮುಗಿದ ಅಧ್ಯಾಯ. ಈ ಪ್ರಕರಣವನ್ನು ನೈತಿಕತೆ ಸಮಿತಿಗೆ ನೀಡುವ ಅಗತ್ಯ ಇಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಪಾದಿಸಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್, ಸ್ಪೀಕರ್ ಅವರು ತಮ್ಮ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ ಬಾಧಕಗಳನ್ನು ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದರೆ ತನಿಖೆಯನ್ನು ಸರಿಯಾಗಿ ಮಾಡಬೇಕು. ಪ್ರಕರಣದ ಸತ್ಯಾಸತ್ಯತೆ ಹಾಗೂ ಎಲ್ಲಾ ವಿಚಾರಗಳ ಬಗ್ಗೆ ತನಿಖೆ ಆಗಬೇಕು ಎಂದೇ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಅವರು ತಿಳಿಸಿದರು.
ನಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ
ಗೃಹ ಇಲಾಖೆಯಲ್ಲಿ ಕೆಲ ಸಚಿವರ ಹಸ್ತಕ್ಷೇಪ ಆರೋಪದ ವಿಚಾರದ ಬಗ್ಗೆ ಮಾತನಾಡಿರುವ ಪರಮೇಶ್ವರ್, ಸಿ.ಟಿ. ರವಿ ಪ್ರಕರಣದಲ್ಲಿ ಯಾರೂ ನಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ. ಅಧಿಕಾರಿಗಳು ಸಿಎಂ ಹಾಗೂ ಗೃಹ ಸಚಿವರ ಮಾತು ಮಾತ್ರ ಕೇಳುತ್ತಾರೆ. ಬೇರೆ ಘಟನೆಗಳಲ್ಲಿ ಮಾತ್ರ ಬೇರೆ ಸಚಿವರ ಮಾತು ಕೇಳುತ್ತಾರೆ. ಇಂತಹ ಘಟನೆಗಳಲ್ಲಿ ಪೊಲೀಸರು ಮಾತು ಕೇಳಲ್ಲ. ಎಲ್ಲದಕ್ಕೂ ಪೊಲೀಸರು ಉತ್ತರ ಕೊಡಬೇಕಲ್ಲವೇ? ಪೊಲೀಸರಿಗೂ ಈ ವಿಚಾರ ಗೊತ್ತಿದೆ. ಅವರಿವರು ಆರೋಪ ಮಾಡುತ್ತಾರೆ ಎಂದು ನಾವು ಇಲಾಖೆ ನಡೆಸುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಏನಿದು ಪ್ರಕರಣ?
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಕೊನೆಯ ದಿನ ಗುರುವಾರ (ಡಿ.19) ರಂದು ವಿಧಾನ ಪರಿಷತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕುರಿತು ಅವಹೇಳನಕಾರಿ ಪದಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ ಅವರನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ರವಿ ಹೊರಬಂದಿದ್ದರು.
ಈ ಪ್ರಕರಣವನ್ನು ಇಲ್ಲಿಗೆ ಮುಗಿಸುವ ಪ್ರಶ್ನೆಯೇ ಇಲ್ಲ ಎಂದಿರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿ.ಟಿ ರವಿಗೆ ಸರಿಯಾದ ಶಿಕ್ಷೆಯಾಗುವವರೆಗೆ ತಾವು ಕಾನೂನು ಹೋರಾಟ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಈಗಾಗಲೇ ಸಿ.ಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎನ್ನಲಾಗಿರುವ ಎರಡು ವಿಡಿಯೋಗಳನ್ನು ಸೋಮವಾರ ಬಿಡುಗಡೆ ಮಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ಪತ್ರ ಬರೆಯುವುದಾಗಿಯೂ ಘೋಷಿಸಿದ್ದಾರೆ.