
ದೆಹಲಿಯಲ್ಲಿ ಅಲೆಮಾರಿ ಸಮುದಾಯದವರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಅಲೆಮಾರಿ ಸಮುದಾಯ; ಶೇ.1 ಮೀಸಲಾತಿಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ
ಕರ್ನಾಟಕ ಸರ್ಕಾರ ನಮಗೆ ಅನ್ಯಾಯ ಮಾಡಿದೆ. ನಾವು ಕೇಳುತ್ತಿರುವುದು ಶೇ.1ರಷ್ಟು ಮೀಸಲಾತಿ ಮಾತ್ರ. ನಮ್ಮ ಬೇಡಿಕೆಗೆ ಮಣಿಯದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಅಲೆಮಾರಿ ಸಮುದಾಯದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಪರಿಶಿಷ್ಟ ಜಾತಿಯ ಒಳ ಮೀಸಲಾತಿಯಲ್ಲಿ ಬಲಾಢ್ಯ ಜಾತಿಗಳೊಂದಿಗೆ ಸೇರಿಸಿರುವುದನ್ನು ವಿರೋಧಿಸಿ ಅಲೆಮಾರಿ ಸಮುದಾಯ ದೆಹಲಿಯ ಜಂತರ್ ಮಂತರ್‌ನಲ್ಲೂ ಪ್ರತಿಭಟನೆ ನಡೆಸಿದೆ. ಬೆಂಗಳೂರಿನಲ್ಲಿ ಒಂದೂವರೆ ತಿಂಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ದೆಹಲಿಗೆ ವಿಸ್ತರಿಸಿದೆ. ಅಲ್ಲದೇ ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದೆ.
ನಿವೃತ್ತ ನ್ಯಾಯಮೂರ್ತಿ ಡಾ.ಎಚ್.ಎನ್. ನಾಗಮೋಹನ್ ದಾಸ್ ವರದಿಯಂತೆ ಅಲೆಮಾರಿಗಳಿಗೆ ಶೇ.1ರಷ್ಟು ಮೀಸಲಾತಿ ನೀಡಲಾಗಿತ್ತು. ಆದರೆ, ರಾಜ್ಯ ಸರ್ಕಾರ ಅಲೆಮಾರಿ ಸಮುದಾಯವನ್ನು ಪ್ರಬಲರಾದ ಸ್ಪಶ್ಯ ಜಾತಿಗಳೊಂದಿಗೆ ಸೇರಿಸಿರುವುದು ಅಲೆಮಾರಿ ಸಮುದಾಯಗಳ ಆಕ್ರೋಶಕ್ಕೆ ಕಾರಣವಾಗಿದೆ.
ಕಳೆದ 75 ವರ್ಷಗಳಿಂದ ತುಳಿತಕ್ಕೆ ಒಳಗಾದ ಅಲೆಮಾರಿಗಳಿಗೆ ಈವರೆಗೂ ಮೀಸಲಾತಿ ಲಾಭ ದಕ್ಕಿಲ್ಲ, ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಲಾಯಿತು. ದೆಹಲಿಯ ಅಕ್ಬರ್ ರಸ್ತೆಯಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದರು.
ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಮೀಸಲಾತಿ
ಹಂಪಿ ಕನ್ನಡ ವಿ.ವಿ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಎ.ಎಸ್ ಪ್ರಭಾಕರ್ ಮಾತನಾಡಿ, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ವೈಜ್ಞಾನಿಕವಾಗಿ ವರದಿ ತಯಾರಿಸಿ ಮೀಸಲಾತಿ ಹಂಚಿಕೆ ಮಾಡಿತ್ತು. ಆದರೆ, ಸರ್ಕಾರವು ಆಯೋಗದ ಶಿಫಾರಸುಗಳನ್ನು ತಿರಸ್ಕರಿಸಿದೆ. 49 అಲೆಮಾರಿ ಸಮುದಾಯಗಳು ಹಾಗೂ 10 ಸೂಕ್ಷ ಜಾತಿಗಳನ್ನು ಒಳಗೊಂಡಂತೆ 59 ಸಮುದಾಯಗಳನ್ನು ಬಲಾಡ್ಯ ಸ್ಪೃಶ್ಯರು ಇರುವ ʼಸಿʼ ಗುಂಪಿಗೆ ಸೇರಿಸಿದೆ. ಇದು ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ಹೇಳಿದರು.
ನ್ಯಾಯ ಸಿಗದಿದ್ದರೆ ಬೃಹತ್ ಹೋರಾಟ
'ʼಅಲೆಮಾರಿಗಳಿಗೆ ಅನ್ಯಾಯ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಬ್ಬ ಮಾಡುತ್ತಿದ್ದಾರೆ. ಸಂವಿಧಾನ ಪುಸ್ತಕ ಹಿಡಿದು ಹೋರಾಟ ಮಾಡುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೂಡ ನಮಗೆ ನ್ಯಾಯ ಕೊಡಿಸಿಲ್ಲ. ನಮಗೆ ನ್ಯಾಯ ಸಿಗದಿದ್ದರೆ ಮುಂದಿನ ದಿನಗಳಲ್ಲಿ ಭಾರೀ ಹೋರಾಟ ಮಾಡಲಾಗುವುದು'ʼ ಎಂದು ಅಲೆಮಾರಿ ಸಮುದಾಯದ ಮುಖಂಡ ಲೋಹಿತ್ ಎಚ್ಚರಿಕೆ ನೀಡಿದರು.
ಕಾಂಗ್ರೆಸ್‌ನಿಂದ ಅನ್ಯಾಯ
ಸಮುದಾಯದ ಮುಖಂಡ ಮೂರ್ತಿ ಮಾತನಾಡಿ, "ವಿಧಾನಸೌಧದಲ್ಲಿ ನಮ್ಮ ಪ್ರತಿನಿಧಿಗಳಿಲ್ಲ. ಈ ಕಾರಣಕ್ಕೆ ಸರ್ಕಾರ ನಮಗೆ ಅನ್ಯಾಯ ಮಾಡಿದೆ. ನಾವು ಕೇಳುತ್ತಿರುವುದು ಶೇ.1ರಷ್ಟು ಮೀಸಲಾತಿ ಮಾತ್ರ. ನಮ್ಮ ಬೇಡಿಕೆಗೆ ಮಣಿಯದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತೇವೆ'ʼ ಎಂದರು.
ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಸಮುದಾಯ
ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ನೇತೃತ್ವದಲ್ಲಿ 49 ಅಸ್ಪಶ್ಯ ಅಲೆಮಾರಿ ಸಮುದಾಯಗಳು ಮತ್ತು 10 ಸೂಕ್ಷ್ಮ ಪರಿಶಿಷ್ಟ ಜಾತಿಗಳು ಶೇ.1 ರಷ್ಟು ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಕಳೆದ ಸೆ.4 ರಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ 'ಬೆಂಗಳೂರು ಚಲೋ' ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದವು. ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕವ್ಯಕ್ತಿ ಆಯೋಗದ ವರದಿಯು ಅಲೆಮಾರಿ ಸಮುದಾಯಗಳಲ್ಲಿ ಆಶಾವಾದ ಹುಟ್ಟಿಸಿತ್ತು. ಆಯೋಗವು ಅಲೆಮಾರಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ದತ್ತಾಂಶ ಸಂಗ್ರಹಿಸಿ ಮೀಸಲಾತಿ ಹಂಚಿಕೆ ಮಾಡಿತ್ತು. ಆದರೆ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಈ ಎಲ್ಲ ಸಮುದಾಯವನ್ನು ʼಸಿʼ ಗುಂಪಿಗೆ ಸೇರಿಸುವ ಮೂಲಕ ಪ್ರಬಲರ ಜತೆ ಪೈಪೋಟಿಗೆ ಇಳಿಸಿದೆ ಎಂಬ ಅಲೆಮಾರಿ ಸಮುದಾಯಗಳ ಮುಖಂಡರು ಆರೋಪಿಸಿದ್ದರು.