Dengue Outbreak | ಬೆಂಗಳೂರಿನಲ್ಲಿ ಡೆಂಗ್ಯೂ ಉಲ್ಬಣ: ತಡವಾಗಿ ಎಚ್ಚೆತ್ತ ಬಿಬಿಎಂಪಿ
x
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌

Dengue Outbreak | ಬೆಂಗಳೂರಿನಲ್ಲಿ ಡೆಂಗ್ಯೂ ಉಲ್ಬಣ: ತಡವಾಗಿ ಎಚ್ಚೆತ್ತ ಬಿಬಿಎಂಪಿ

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಉಲ್ಬಣವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಪ್ರತಿ ಶುಕ್ರವಾರ ಡ್ರೈ ಡೇ (ನೀರು ಸಂಗ್ರಹ ಮಾಡುವ ಸಾಧನಗಳನ್ನು ಖಾಲಿ ಮಾಡಿ ಸ್ವಚ್ಛಗೊಳಿಸುವ ದಿನ) ಹಾಗೂ ಸೋಂಕು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದೆ. ಶುಕ್ರವಾರದಿಂದ (ಜೂ.28ರಿಂದ) ಈ ಅಭಿಯಾನ ಪ್ರಾರಂಭವಾಗಿದೆ.


ಬೆಂಗಳೂರಿನಲ್ಲಿ ಡೆಂಗ್ಯೂ ಉಲ್ಬಣವಾದ ಹಿನ್ನೆಲೆಯಲ್ಲಿ ಬಿಬಿಎಂಪಿಯಿಂದ ಜೂ.28ರಿಂದ ಪ್ರತಿ ಶುಕ್ರವಾರ ಡ್ರೈ ಡೇ (ನೀರು ಸಂಗ್ರಹ ಮಾಡುವ ಸಾಧನಗಳನ್ನು ಖಾಲಿ ಮಾಡಿ ಸ್ವಚ್ಛಗೊಳಿಸುವ ದಿನ) ಹಾಗೂ ಸಾರ್ವಜನಿಕ ಜಾಗೃತಿ ಅಭಿಯಾನ ಆರಂಭವಾಗಿದೆ.

ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಜಾಗೃತಿ ಮೂಡಿಸುತ್ತಿದ್ದು, ಖುದ್ದು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರೇ ಶುಕ್ರವಾರ ಫೀಲ್ಡ್‌ಗೆ ಇಳಿದರು.

ಪೂರ್ವ ವಲಯ ಸಿ.ವಿ ರಾಮನ್ ನಗರದ ಜಿ.ಎಂ ಪಾಳ್ಯ ಹಾಗೂ ನ್ಯೂ ತಿಪ್ಪಸಂದ್ರ ವ್ಯಾಪ್ತಿಯಲ್ಲಿ ಮನೆ-ಮನೆ ಭೇಟಿ ನೀಡಿ, ಸಾರ್ವಜನಿಕರಲ್ಲಿ ಡೆಂಗ್ಯೂ ಕುರಿತು ಆಯುಕ್ತರು ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಬಿಬಿಎಂಪಿಯ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದ ತುಷಾರ್ ಗಿರಿನಾಥ್ ಅವರು, ನಗರದಲ್ಲಿ ಸಮಗ್ರ ಮೈಕ್ರೋ ಪ್ಲಾನ್ ಮಾಡಿಕೊಂಡು, ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಬೇಕು ಎಂದು ಸೂಚನೆ ನೀಡಿದರು.

ಮನೆ-ಮನೆ ಭೇಟಿ ನೀಡಿದ ತುಷಾರ್ ಗಿರಿನಾಥ್ ಹಾಗೂ ಬಿಬಿಎಂಪಿಯ ಆರೋಗ್ಯ ವಿಭಾಗದ ಅಧಿಕಾರಿಗಳು ಈಡೀಸ್ ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಗ್ಯೂ ರೋಗ ಹರಡುತ್ತದೆ. ಹೀಗಾಗಿ, ನೀರಿನ ಸಂಪ್, ಡ್ರಮ್, ಹೂವಿನ ಕುಂಡ ಸೇರಿದಂತೆ ನೀರು ಸಂಗ್ರಹ ಮಾಡುವ ಅಥವಾ ನೀರು ನಿಲ್ಲುವ ಜಾಗದಲ್ಲಿ ವಾರಕ್ಕೊಮ್ಮೆ ಎಲ್ಲಾ ಕಡೆ ನೀರನ್ನು ಹೊರ ಹಾಕಿ ಒಣಗಿಸಿ ಮತ್ತೆ ಶುದ್ಧ ನೀರು ಸಂಗ್ರಹಿಸಿಕೊಳ್ಳಬೇಕು. ವಾರಕ್ಕಿಂತ ಹೆಚ್ಚು ದಿನಗಳು ಒಂದೇ ನೀರು ಸಂಗ್ರಹವಾಗಿದ್ದರೆ ಲಾರ್ವಾ ಉತ್ಪತ್ತಿಯಾಗಿ ಸೊಳ್ಳೆಗಳು ಹೆಚ್ಚಾಗುತ್ತವೆ. ಈ ನಿಟ್ಟಿನಲ್ಲಿ ವಾರಕ್ಕೊಮ್ಮೆ ತಪ್ಪದೆ ಹಳೆ ನೀರು ತೆಗೆದು ಹೊಸ ನೀರು ತುಂಬಿಸಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಇನ್ನು ಡೆಂಗ್ಯೂ ಹರಡುವ ಬಗ್ಗೆ ಆಶಾ ಕಾರ್ಯಕರ್ತೆಯರು ಮನೆ-ಮನೆ ಭೇಟಿ ನೀಡುವ ವೇಳೆ ಭಿತ್ತಿಪತ್ರಗಳನ್ನು ವಿತರಿಸಿದರೆ ಲಾರ್ವಾ ಉತ್ಪತ್ತಿಯಾಗುವುದನ್ನು ತಡೆಗಟ್ಟಲು ಸಹಕಾರಿಯಾಗಲಿದೆ. ಲಾರ್ವಾ ಉತ್ಪತ್ತಿ ತಾಣಗಳನ್ನು ಗುರುತಿಸಿರುವ ಕಡೆ ಔಷಧಿ ಸಿಂಪಡಣೆ ಮಾಡಿ ಸೊಳ್ಳೆಗಳ ಉತ್ಪತ್ತಿ ತಾಣವನ್ನು ನಿಯಂತ್ರಿಸಬೇಕು ಎಂದು ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಧ್ವನಿವರ್ಧಕಗಳ ಮೂಲಕ ಜಾಗೃತಿ

ನಗರದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಿರುವ ಪ್ರದೇಶದಲ್ಲಿ ಆಟೋಗಳ ಮೂಲಕ ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಡೆಂಗ್ಯೂ ನಿಯಂತ್ರಿಸುವ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.

ಶುಕ್ರವಾರ ನಡೆದ ಡ್ರೈ ಡೇ ಅಭಿಯಾನದಲ್ಲಿ ಬಿಬಿಎಂಪಿಯ ಮುಖ್ಯ ಆರೋಗ್ಯಾಧಿಕಾದಿಯಾದ ಡಾ. ಸೈಯದ್ ಸಿರಾಜುದ್ದೀನ್ ಮದನಿ, ವಲಯ ಆರೋಗ್ಯಾಧಿಕಾರಿ ಡಾ. ಭಾಗ್ಯಲಕ್ಷ್ಮೀ ಸೇರಿದಂತೆ ಹಲವರು ಭಾಗವಹಿಸಿದ್ದರು.

Read More
Next Story