
ಡಿಸಿಎಂ ದೆಹಲಿ ಪ್ರವಾಸ: ಎತ್ತಿನಹೊಳೆ ಯೋಜನೆ ಬಗ್ಗೆ ಚರ್ಚೆ, ಹೈಕಮಾಂಡ್ ಭೇಟಿ ಸಾಧ್ಯತೆ
ಇದೇ ವೇಳೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭೇಟಿಗೆ ಅವರು ಸಮಯಾವಕಾಶ ಕೋರಿದ್ದಾರೆ ಎಂದು ತಿಳಿದುಬಂದಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು (ಜುಲೈ 8, 2025) ದೆಹಲಿಗೆ ತೆರಳಿದ್ದು, ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಹಾಗೂ ಅರಣ್ಯ ಸಚಿವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಕೆಲವು ತೊಡಕುಗಳಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಇದೇ ವೇಳೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭೇಟಿಗೆ ಅವರು ಸಮಯಾವಕಾಶ ಕೋರಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆಗಳು ಹಾಗೂ ಶಾಸಕರ ಅಸಮಾಧಾನದ ಬಹಿರಂಗ ಹೇಳಿಕೆಗಳ ನಂತರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಒಂದು ಸುತ್ತಿನ ಸಭೆ ನಡೆಸಿ ಹೈಕಮಾಂಡ್‌ಗೆ ವರದಿ ಸಲ್ಲಿಸಿದ್ದರು. ಈ ಬೆಳವಣಿಗೆಗಳ ನಂತರ ಡಿಸಿಎಂ ಅವರ ಮೊದಲ ದೆಹಲಿ ಪ್ರವಾಸ ಇದಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ನಾಳೆ (ಜುಲೈ 9, 2025) ದೆಹಲಿಗೆ ತೆರಳಲಿದ್ದಾರೆ. ಮೈಸೂರು ದಸರಾ ಮಹೋತ್ಸವದ ವೇಳೆ ವೈಮಾನಿಕ ಪ್ರದರ್ಶನ ಆಯೋಜಿಸುವ ಸಂಬಂಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲು ಸಿಎಂ ತೆರಳುತ್ತಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ಅವರು ಕೂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ರಾಜ್ಯ ರಾಜಕಾರಣದಲ್ಲಿನ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಉಭಯ ನಾಯಕರ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ.