
ಸಿಎಂ ಸಿದ್ದರಾಮಯ್ಯ
ದೇವನಹಳ್ಳಿ ಭೂಸ್ವಾಧೀನ ವಿವಾದ | ಇಂದು ಕಾನೂನು ತಜ್ಞರ ಜತೆ ಸಿಎಂ ಸಿದ್ದರಾಮಯ್ಯ ಸಭೆ
ಏರೋಸ್ಪೇಸ್ ಪಾರ್ಕ್ ನಿರ್ಮಾಣ ಮಾಡಲು ಸರ್ಕಾರ ಭೂಸ್ವಾಧೀನಕ್ಕೆ ಮುಂದಾದ ಕಾರಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ರೈತರು ಇತ್ತೀಚೆಗೆ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು.
ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳಲ್ಲಿ 1,777 ಎಕರೆಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವ ಕುರಿತಂತೆ ಶನಿವಾರ (ಜು.12) ಸಂಜೆ ಸಿಎಂ ಸಿದ್ದರಾಮಯ್ಯ ಅವರು ಕಾನೂನು ತಜ್ಞರ ಜತೆ ಸಭೆ ನಡೆಸಲಿದ್ದಾರೆ.
ಏರೋಸ್ಪೇಸ್ ಪಾರ್ಕ್ ನಿರ್ಮಾಣ ಮಾಡಲು ಸರ್ಕಾರ ಭೂಸ್ವಾಧೀನಕ್ಕೆ ಮುಂದಾದ ಕಾರಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ರೈತರು ಸಾವಿರಕ್ಕೂ ಹೆಚ್ಚು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು ಇತ್ತೀಚೆಗೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಹಿನ್ನಲೆಯಲ್ಲಿ ಕಳೆದ ವಾರ ಪ್ರತಿಭಟನಾಕಾರರು ಮತ್ತು ರೈತ ಮುಖಂಡರ ಜತೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ 10 ದಿನಗಳ ಕಾಲ ಸಮಯಾವಕಾಶ ಕೇಳಿದ್ದರು.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಜು.15 ರಂದು ರೈತರ ಜತೆ ಸಭೆ ನಿಗದಿಯಾಗಿದೆ. ಅದಕ್ಕೂ ಮುನ್ನ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಕಾನೂನು ವಿಚಾರವಾಗಿ ಶನಿವಾರ ಸಂಜೆ ಕಾನೂನು ತಜ್ಞರ ಜತೆ ಸಿಎಂ ಸಭೆ ನಡೆಸಲಿದ್ದಾರೆ. ಈಗಾಗಲೇ ಭೂಸ್ವಾಧೀನದ ಬಗ್ಗೆ ಅಂತಿಮ ಅಧಿಸೂಚನೆ ಆಗಿರುವುದರಿಂದ ಭೂಸ್ವಾಧೀನ ಕೈಬಿಟ್ಟರೆ ಏನಾಗಲಿದೆ ಎಂಬುದರ ಬಗ್ಗೆ ಸಮಾಲೋಚನೆ ನಡೆಸಿ ಅಭಿಪ್ರಾಯ ಪಡೆಯಲಿದ್ದಾರೆ.
ಇಕ್ಕಟ್ಟಿನಲ್ಲಿ ಸಿಲುಕಿದ ಸಿಎಂ
ಭೂ ಸ್ವಾಧೀನದ ಬಗ್ಗೆ ರೈತರಿಂದ ಈಗಾಗಲೇ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅದರ ಜತೆಗೆ ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷದಲ್ಲಿದ್ದಾಗ ಭೂಸ್ವಾಧೀನ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಅವರೇ ಮುಖ್ಯಮಂತ್ರಿಯಾಗಿದ್ದು ಇಕ್ಕಟ್ಟಿನಲ್ಲಿ ಸಿಲುಕಿದ್ದು ರೈತರ ಪರ ತಿರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.