Dharmasthala Case Probe Intensifies: SIT Officers Visit Mahesh Shetty Timarodi’s Residence
x
ಮಹೇಶ್‌ ಶೆಟ್ಟಿ ತಿಮರೋಡಿ ಮನೆಯ ಸುತ್ತ ಕೆಎಸ್‌ಆರ್‌ಪಿ ಪಡೆಯಿಂದ ಭದ್ರತೆ ಒದಗಿಸಲಾಗಿದೆ.

ಧರ್ಮಸ್ಥಳ ಪ್ರಕರಣದ ತನಿಖೆ ಚುರುಕು: ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ತೆರಳಿದ ಎಸ್‌ಐಟಿ ಅಧಿಕಾರಿಗಳು

ಈ ಹಿಂದೆ, ಪ್ರಕರಣದ ತನಿಖೆಯನ್ನು ದಾರಿ ತಪ್ಪಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ 'ಮುಸುಕುಧಾರಿ' ದೂರುದಾರ, ತನ್ನ ವಿಚಾರಣೆ ವೇಳೆ ನೀಡಿದ್ದ ಮಾಹಿತಿಗಳ ಆಧಾರದ ಮೇಲೆ ಈ ಮಹಜರು ಪ್ರಕ್ರಿಯೆ ನಡೆಯುತ್ತಿದೆ


ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಧರ್ಮಸ್ಥಳ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ಚುರುಕುಗೊಳಿಸಿದೆ. ತನಿಖೆಯ ಭಾಗವಾಗಿ ಎಸ್‌ಐಟಿ ಅಧಿಕಾರಿಗಳ ತಂಡವು, ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾದ ಹಿಂದೂಪರ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ಬಳಿಯ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ, ಮಹತ್ವದ ಮಹಜರು ಪ್ರಕ್ರಿಯೆ ಆರಂಭಿಸಿದೆ.

ಈ ಹಿಂದೆ, ಪ್ರಕರಣದ ತನಿಖೆಯನ್ನು ದಾರಿ ತಪ್ಪಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ 'ಮುಸುಕುಧಾರಿ' ದೂರುದಾರ, ತನ್ನ ವಿಚಾರಣೆ ವೇಳೆ ನೀಡಿದ್ದ ಮಾಹಿತಿಗಳ ಆಧಾರದ ಮೇಲೆ ಈ ಮಹಜರು ಪ್ರಕ್ರಿಯೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಭೀಮ ನೀಡಿದ ಹೇಳಿಕೆಗಳನ್ನು ಪರಿಶೀಲಿಸಲು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಲು ಅಧಿಕಾರಿಗಳು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಎಸ್‌ಐಟಿ ಅಧಿಕಾರಿಗಳೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ (FSL) ತಜ್ಞರ ತಂಡ ಮತ್ತು ಪ್ರಕರಣದ ಪ್ರಮುಖ ಸಾಕ್ಷಿದಾರರೊಬ್ಬರು ಕೂಡ ತಿಮರೋಡಿ ಅವರ ಮನೆಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಪಡೆಯ ತುಕಡಿಗಳನ್ನು ನಿಯೋಜಿಸಲಾಗಿದ್ದು, ತಿಮರೋಡಿ ಅವರ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ತನಿಖೆಯ ಗೌಪ್ಯತೆಯನ್ನು ಕಾಪಾಡುವ ದೃಷ್ಟಿಯಿಂದ, ಮಾಧ್ಯಮ ಪ್ರತಿನಿಧಿಗಳು ಮತ್ತು ಸಾರ್ವಜನಿಕರಿಗೆ ತಿಮರೋಡಿ ಅವರ ಮನೆಯ ಸಮೀಪ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಮನೆಯಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿಯೇ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಮಾಧ್ಯಮದವರನ್ನು ತಡೆದಿದ್ದಾರೆ.

ಪ್ರಕರಣದ ಹಿನ್ನೆಲೆ:

ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ಮೃತದೇಹಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ಆರೋಪಿಸಿದ್ದರು. ಈ ಆರೋಪ ರಾಜ್ಯಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾದ ನಂತರ, ಸರ್ಕಾರವು ಪ್ರಕರಣದ ಸತ್ಯಾಸತ್ಯತೆ ಪರಿಶೀಲಿಸಲು ವಿಶೇಷ ತನಿಖಾ ತಂಡವನ್ನು (SIT) ರಚಿಸಿತ್ತು. ತನಿಖೆಯ ಹಂತದಲ್ಲಿ ದೂರುದಾರನೇ ಗೊಂದಲದ ಹೇಳಿಕೆಗಳನ್ನು ನೀಡಿದ ಕಾರಣ, ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದೀಗ, ಆತನ ಹೇಳಿಕೆಗಳ ಆಧಾರದ ಮೇಲೆ ತನಿಖೆ ಮುಂದುವರಿದಿದ್ದು, ತಿಮರೋಡಿ ಅವರ ಮನೆಯಲ್ಲಿ ನಡೆಯುತ್ತಿರುವ ಮಹಜರು ಪ್ರಕ್ರಿಯೆಯು ಪ್ರಕರಣಕ್ಕೆ ಹೊಸ ತಿರುವು ನೀಡುವ ಸಾಧ್ಯತೆಯಿದೆ.

Read More
Next Story