
ಸಮೀರ್ ಎಂ ಡಿ
ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್‌ಗೆ ಮತ್ತೆ ನೋಟಿಸ್, ಇಂದು ವಿಚಾರಣೆಗೆ ಹಾಜರಾಗಲು ಸೂಚನೆ
ನಿರೀಕ್ಷಣಾ ಜಾಮೀನು ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಸಮೀರ್‌ಗೆ ಮತ್ತೊಮ್ಮೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ಕುರಿತ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ 'ದೂತ' ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಚೋದನಾಕಾರಿ ವಿಡಿಯೊ ಪ್ರಸಾರ ಮಾಡಿದ್ದ ಆರೋಪದ ಮೇರೆಗೆ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ಪೊಲೀಸರು ಮತ್ತೊಮ್ಮೆ ನೋಟಿಸ್ ಜಾರಿ ಮಾಡಿದ್ದಾರೆ.
ಶನಿವಾರ (ಆಗಸ್ಟ್ 23) ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.
ಸಮೀರ್ ಪ್ರಸಾರ ಮಾಡಿದ್ದ ವಿಡಿಯೊಗಳಿಗೆ ಸಂಬಂಧಿಸಿದಂತೆ ಜುಲೈ 12 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ, ಪೊಲೀಸರು ಸಮೀರ್ ಗೆ ಈ ಹಿಂದೆಯೂ ಮೂರು ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ನಂತರ ಧರ್ಮಸ್ಥಳ ಪೊಲೀಸರ ತಂಡವು ಸಮೀರ್ ಬಂಧಿಸಲು ಬೆಂಗಳೂರಿಗೆ ತೆರಳಿತ್ತು. ಆದರೆ, ಅಷ್ಟರಲ್ಲಾಗಲೇ ಸಮೀರ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.
ಇದೀಗ, ನಿರೀಕ್ಷಣಾ ಜಾಮೀನು ಲಭಿಸಿದ ಹಿನ್ನೆಲೆಯಲ್ಲಿ, ಪೊಲೀಸರು ಸಮೀರ್ ಅವರಿಗೆ ಮತ್ತೊಮ್ಮೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿದ್ದಾರೆ. ಕಾನೂನು ಪ್ರಕಾರ, ನಿರೀಕ್ಷಣಾ ಜಾಮೀನು ಪಡೆದ ವ್ಯಕ್ತಿ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವುದು ಕಡ್ಡಾಯ. ಈ ಹಿನ್ನೆಲೆಯಲ್ಲಿ ಸಮೀರ್ ಇಂದು ವಿಚಾರಣೆಗೆ ಹಾಜರಾಗುವುದು ಅನಿವಾರ್ಯವಾಗಿದೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಸಮೀರ್ ಅವರ ವಿಚಾರಣೆಯ ನಂತರ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.