ಧರ್ಮಸ್ಥಳದಲ್ಲಿ ಅಸಹಜ ಸಾವುಗಳ ಪ್ರಕರಣ | ಅಗತ್ಯಬಿದ್ದರಷ್ಟೇ ತನಿಖೆ ಎಂದ ಗೃಹ ಸಚಿವ
x

ಧರ್ಮಸ್ಥಳದಲ್ಲಿ ಅಸಹಜ ಸಾವುಗಳ ಪ್ರಕರಣ | ಅಗತ್ಯಬಿದ್ದರಷ್ಟೇ ತನಿಖೆ ಎಂದ ಗೃಹ ಸಚಿವ

ರಾಜ್ಯ ಮಹಿಳಾ ಆಯೋಗ ಕೂಡ ಧರ್ಮಸ್ಥಳ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿತ್ತು.


ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಹಾಗೂ ಶವಗಳನ್ನು ಹೂತು ಹಾಕಿರುವ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದೆ.

ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸುವಂತೆ ಆಗ್ರಹಿಸಿ ಹಲವು ಸಂಘಟನೆಗಳು, ನಿವೃತ್ತ ನ್ಯಾಯಮೂರ್ತಿಗಳು ಆಗ್ರಹಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಹಿಂದೇಟು ಹಾಕುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳದ ಸೌಜನ್ಯ ಪ್ರಕರಣ ಸೇರಿದಂತೆ ಹಲವು ನಿಗೂಢ ಪ್ರಕರಣಗಳು ಕುತೂಹಲ ಕೆರಳಿಸಿವೆ.

ಅಗತ್ಯ ಬಿದ್ದರೆ SIT ತನಿಖೆ; ಪರಮೇಶ್ವರ್‌

ಯಾರೋ ಹೇಳಿದರೆಂದು ಎಸ್‌ಐಟಿ ತನಿಖೆಗೆ ಆದೇಶಿಸುವುದಿಲ್ಲ, ಎಸ್‌ಐಟಿ ರಚನೆ ಅಗತ್ಯಬಿದ್ದಾಗ ಮಾಡುತ್ತೇವೆ ಎಂದಿದ್ದ ಸಿಎಂ ಸಿದ್ದರಾಮಯ್ಯ ನಂತರ ಈಗ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಕೂಡ ಅದೇ ರಾಗ ಹಾಡಿದ್ದಾರೆ.

ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಪ್ರಾಥಮಿಕ ಹಂತದಲ್ಲಿರುವಾಗ ಎಸ್​ಐಟಿ ರಚನೆ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಅವರು, ಅಗತ್ಯ ನೋಡಿಕೊಂಡು ಎಸ್​ಐಟಿ ರಚನೆಗೆ ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

ಸಿಎಂ ಜತೆ ಚರ್ಚಿಸಿ ತೀರ್ಮಾನ

ಧರ್ಮಸ್ಥಳದಲ್ಲಿ ಅಸಹಜ ಸಾವುಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗುವುದು. ಸದ್ಯ ಸಿದ್ದರಾಮಯ್ಯ ಅವರು ಎಸ್​ಐಟಿ ರಚನೆ ಮಾಡಲ್ಲ ಎಂದಿದ್ದಾರೆ. ಅಲ್ಲದೇ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ​ಹೇಳಿದ್ದು, ಪೊಲೀಸರ ಪ್ರಾಥಮಿಕ ತನಿಖೆ ನಂತರ ಎಸ್‌ಐಟಿ ರಚನೆ ಕುರಿತು ತೀರ್ಮಾನಿಸಲಾಗುವುದು ಎಂದು ಪರಮೇಶ್ವರ್‌ ಹೇಳಿದ್ದಾರೆ.

ರಾಜ್ಯ ಮಹಿಳಾ ಆಯೋಗ ಕೂಡ ಧರ್ಮಸ್ಥಳ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿತ್ತು.

ಶವಗಳನ್ನು ನಾನೇ ಹೂತು ಹಾಕಿದ್ದೀನಿ

ಧರ್ಮಸ್ಥಳ ಗ್ರಾಮದ ಅರಣ್ಯ ಪ್ರದೇಶಗಳಲ್ಲಿ ಹಲವು ಶವಗಳನ್ನು ಹೂತಿಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ವ್ಯಕ್ತಿಯೊಬ್ಬ ತಾನೇ ಶವ ಹೂತಿಟ್ಟಿದ್ದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಇದೇ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅನಾಮಧೇಯ ವ್ಯಕ್ತಿಯೊಬ್ಬ ಮ್ಯಾಜಿಸ್ಪ್ರೇಟ್‌ ನ್ಯಾಯಾಲಯದಲ್ಲಿ ಪ್ರಕರಣದ ಪ್ರಮುಖ ಸಾಕ್ಷಿಯಾಗಿ ತನ್ನ ಹೇಳಿಕೆ ದಾಖಲಿಸಿದ್ದಾರೆ. ಇದಾದ ಬಳಿಕ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Read More
Next Story