
Bamul Election | ಕೆಎಂಎಫ್ ಅಧ್ಯಕ್ಷ ಗಾದಿ ಮೇಲೆ ಕಣ್ಣು; ಬಮೂಲ್ ಚುನಾವಣೆಗೆ ಡಿ.ಕೆ.ಸುರೇಶ್ ಸ್ಪರ್ಧೆ
ಕರ್ನಾಟಕ ಹಾಲು ಮಹಾಮಂಡಳ(ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಇದೀಗ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಕೆಎಂಎಫ್ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ (ಬಮೂಲ್) ನಿರ್ದೇಶಕ ಸ್ಥಾನಕ್ಕೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷದ ಹಿರಿಯ ನಾಯಕರ ಒತ್ತಡ ಹಾಗೂ ರಾಮನಗರ ಜಿಲ್ಲೆಯ ನಾಯಕರ ಸರ್ವಾನುಮತದ ಒಪ್ಪಿಗೆ ಅನುಸಾರ ಬಮೂಲ್ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದೇನೆ ಎಂದು ಡಿ.ಕೆ. ಸುರೇಶ್ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು, ಲೋಕಸಭಾ ಚುನಾವಣೆ ನಂತರ ಸಂಪೂರ್ಣ ವಿಶ್ರಾಂತಿಯಲ್ಲಿದ್ದೆ. ಈಗ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುವಂತೆ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಿದ್ದೇನೆ. ಮೊದಲಿನಿಂದಲೂ ಬಮೂಲ್ ಜೊತೆಗೆ ಅವಿನಾಭಾವ ಸಂಬಂಧವಿದೆ ಎಂದು ಹೇಳಿದ್ದಾರೆ.
ಕೆಎಂಎಫ್ ಅಧ್ಯಕ್ಷ ಸ್ಥಾನದ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದ ಚರ್ಚೆ ಸದ್ಯಕ್ಕಿಲ್ಲ. ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಅಷ್ಟೇ. ನಾನೊಬ್ಬ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ನಾಯಕರ ಸೂಚನೆಗೆ ತಲೆಬಾಗಬೇಕಾಗುತ್ತದೆ ಎಂದು ಹೇಳಿದ್ದಾರೆ.
ಮೇ 25ರಂದು ಚುನಾವಣೆ
ಸಹಕಾರ ತತ್ವದಡಿ ಕಾರ್ಯನಿರ್ವಹಿಸುವ ಕೆಎಂಎಫ್ ಇದೀಗ ರಾಜಕೀಯ ಪ್ರತಿಷ್ಠೆಯ ಸಂಸ್ಥೆಯಾಗಿ ಮಾರ್ಪಟ್ಟಿದೆ. ರಾಮನಗರ, ಬೆಂಗಳೂರು ಗ್ರಾಮಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳನ್ನು ಒಳಗೊಂಡ ಬಮೂಲ್ ರಾಜ್ಯದಲ್ಲೇ ಅತ್ಯಂತ ಶ್ರೀಮಂತ ಒಕ್ಕೂಟವಾಗಿದೆ. ರಾಮನಗರ ಜಿಲ್ಲೆಯಲ್ಲಿ ಮೇ 25ರಂದು ಬಮೂಲ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಬಮೂಲ್ ನಿರ್ದೇಶಕ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಹಾಗೂ ಜೆಡಿಎಸ್ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸಲಿವೆ. ನಿರ್ದೇಶಕ ಸ್ಥಾನ ಬಯಸಿರುವ ಅಭ್ಯರ್ಥಿಗಳು ಈಗಾಗಲೇ ತಮ್ಮ ಪಕ್ಷಗಳ ನಾಯಕರ ಮನವೊಲಿಕೆಯಲ್ಲಿ ನಿರತರಾಗಿದ್ದಾರೆ. ಬಮೂಲ್ ವ್ಯಾಪ್ತಿಯಲ್ಲಿ ರಾಮನಗರ, ಚನ್ನಪಟ್ಟಣ, ಕನಕಪುರ, ಹಾರೋಹಳ್ಳಿ, ಮಾಗಡಿ, ಕುದೂರು, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ಬೆಂಗಳೂರು ಉತ್ತರ, ಪೂರ್ವ, ದಕ್ಷಿಣ ಮತ್ತು ಆನೇಕಲ್ ಸೇರಿ ಒಟ್ಟು 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.