
ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಮತದಾರರ ನೋಂದಣಾಧಿಕಾರಿಗಳಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಪ್ರಕಟಿಸಿದರು.
ಬೆಂಗಳೂರು ಶಿಕ್ಷಕ, ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟ
ನವೆಂಬರ್ 25 ರಂದು ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಂತೆ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 21,496 ಮತದಾರರು ನೋಂದಾಯಿಸಿಕೊಂಡಿದ್ದಾರೆ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ನೋಂದಾಯಿತ ಮತದಾರರ ಸಂಖ್ಯೆ 151374 ಇದೆ.
ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಕರಡು ಮತದಾರರ ಪಟ್ಟಿಯನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಮತದಾರರ ನೋಂದಣಾಧಿಕಾರಿಗಳಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಪ್ರಕಟಿಸಿದರು.
ಬೆಂಗಳೂರಿನ ಶಾಂತಿನಗರದ ಬಿಎಂಟಿಸಿ ಕಟ್ಟಡದಲ್ಲಿರುವ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟಿಸುವ ಸಲುವಾಗಿ ಕರೆದಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.
2025 ನವೆಂಬರ್ 25 ರಂದು ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಂತೆ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 21496 ಮತದಾರರು ನೋಂದಾಯಿಸಿಕೊಂಡಿದ್ದಾರೆ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ನೋಂದಾಯಿತ ಮತದಾರರ ಸಂಖ್ಯೆಯು 151374 ತಲುಪಿದೆ ಎಂದು ತಿಳಿಸಿದರು.
ಈ ಹಿಂದೆ 2020ರ ಸಾಲಿನಲ್ಲಿ ಪ್ರಕಟಿಸಿದ ಮತದಾರರ ಪಟ್ಟಿಯಂತೆ ಶಿಕ್ಷಕರ ಕ್ಷೇತ್ರದಲ್ಲಿ 21965 ಮತದಾರರು ಹಾಗೂ ಪದವೀಧರರ ಕ್ಷೇತ್ರದಲ್ಲಿ 109127 ಮತದಾರರು ನೋಂದಾಯಿಸಿಕೊಂಡಿದ್ದರು ಎಂದು ಮಾಹಿತಿ ನೀಡಿದರು.
ಭಾರತ ಚುನಾವಣಾ ಆಯೋಗದ ವೇಳಾ ಪಟ್ಟಿಯಂತೆ ಡಿಸೆಂಬರ್ 10, 2025ರ ವರೆಗೆ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ನೋಂದಣಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ವ್ಯಕ್ತಿಗಳು ಈ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದು ಹಾಗೂ ಯಾವುದೇ ತಿದ್ದುಪಡಿಗಳು ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಕೂಡ ಸಲ್ಲಿಸಬಹುದು. ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30, 2025 ರಂದು ಪ್ರಕಟಿಸಲಾಗುವುದು ಎಂದರು.
ಸಭೆಯಲ್ಲಿ ಬೆಂಗಳೂರು ವಿಭಾಗದ ಅಪರ ಪ್ರಾದೇಶಿಕ ಆಯುಕ್ತರು-1 ಇಸ್ಲಾವುದ್ದೀನ್ ಜೆ. ಗದ್ಯಾಳ, ಬೆಂಗಳೂರು ವಿಭಾಗದ ಅಪರ ಪ್ರಾದೇಶಿಕ ಆಯುಕ್ತರು-2 ಷಣ್ಮುಖ.ಡಿ, ಬೆಂಗಳೂರು ವಿಶೇಷ ಜಿಲ್ಲಾಧಿಕಾರಿ ಜಯ ಮಾಧವ.ಪಿ, ತಹಸೀಲ್ದಾರ್ ಶೀತಲ್ ಟಿ.ಎಸ್ ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

