Mysore MUDA case | ಸಿಎಂ ಬಾಮೈದ ವಿಚಾರಣೆ: ಜಮೀನಿನ ಮಾಹಿತಿ ಕಲೆಹಾಕಿದ ಇಡಿ
x

Mysore MUDA case | ಸಿಎಂ ಬಾಮೈದ ವಿಚಾರಣೆ: ಜಮೀನಿನ ಮಾಹಿತಿ ಕಲೆಹಾಕಿದ ಇಡಿ

ಮೈಸೂರು ಹೊರವಲಯದ ಕೆಸರೆ ಗ್ರಾಮದಲ್ಲಿರುವ 3.16 ಎಕರೆ ಜಮೀನಿನ ಖರೀದಿ ಹಾಗೂ ಸೋದರಿಗೆ ದಾನ ನೀಡಿದ ಕುರಿತಂತೆ ಇಡಿ ಅಧಿಕಾರಿಗಳು ಮಲ್ಲಿಕಾರ್ಜುನ ಸ್ವಾಮಿ ಅವರನ್ನು ವಿಚಾರಣೆ ನಡೆಸಿದರು.


ಮುಡಾದ ನಿವೇಶನ ಹಂಚಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಸೋಮವಾರ ಸಿಎಂ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರನ್ನು ವಿಚಾರಣೆ ನಡೆಸಿದ್ದಾರೆ.

ಮುಡಾ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಲ್ಲಿಕಾರ್ಜುನ ಸ್ವಾಮಿ ಬೆಂಗಳೂರಿನ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದರು. ಮೈಸೂರು ಹೊರವಲಯದ ಕೆಸರೆ ಗ್ರಾಮದಲ್ಲಿರುವ 3.16 ಎಕರೆ ಜಮೀನಿನ ಖರೀದಿ ಹಾಗೂ ಸೋದರಿಗೆ ದಾನ ನೀಡಿದ ಕುರಿತಂತೆ ಹಲವು ಮಾಹಿತಿಗಳನ್ನು ಕಲೆ ಹಾಕಿದರು.

ಈ ಹಿಂದೆ ಲೋಕಾಯುಕ್ತ ಪೊಲೀಸರು ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾಲೀಕ ದೇವರಾಜುರನ್ನು ಸತತ 10ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ಈಗ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಪ್ರಕರಣ ಸಂಬಂಧ ಹಲವು ಮಾಹಿತಿಗಳು ಹೊರಬೀಳುತ್ತಿವೆ.

ಮಾಜಿ ಆಯುಕ್ತ ನಟೇಶ್‌ಗೆ ನೋಟಿಸ್

ಈ ಮಧ್ಯೆ ಲೋಕಾಯುಕ್ತ ಅಧಿಕಾರಿಗಳು ಮುಡಾದ ಮಾಜಿ ಆಯುಕ್ತ ನಟೇಶ್ ಅವರಿಗೆ ನೋಟಿಸ್ ನೀಡಿದ್ದು, ನ.19(ಮಂಗಳವಾರ) ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಬರುವಂತೆ ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ನೋಟಿಸ್ ಮೂಲಕ ತಿಳಿಸಿದ್ದಾರೆ.

ಸರ್ಕಾರಿ ಅಧಿಕಾರಿಯನ್ನು ವಿಚಾರಣೆ ನಡೆಸಲು ಸರ್ಕಾರದ ಅನುಮತಿ ಕಡ್ಡಾಯ. ಹೀಗಾಗಿ ಸೆಕ್ಷನ್ 17(A) ಅಡಿ ಮುಡಾದ ಮಾಜಿ ಆಯುಕ್ತ ನಟೇಶ್ ವಿಚಾರಣೆಗೆ ಲೋಕಾಯುಕ್ತ ಅಧಿಕಾರಿಗಳು ತಿಂಗಳ ಹಿಂದೆಯೇ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅನುಮತಿ ಕೇಳಿದ್ದರು.

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಎರಡು ದಿನಗಳ ಹಿಂದಷ್ಟೇ ವಿಚಾರಣೆಗೆ ಅನುಮತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಟೇಶ್ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಮುಡಾ ಆಯುಕ್ತರಾಗಿದ್ದ ವೇಳೆ ನಟೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಬದಲಿ ನಿವೇಶನ ಹಂಚಿಕೆ ಮಾಡಿದ್ದರು. ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರದ ಆರೋಪ ಕೇಳಿಬಂದಿರುವ ಕಾರಣ ನಟೇಶ್ ವಿಚಾರಣೆ ನಡೆಸಲಾಗುತ್ತಿದೆ. ನಟೇಶ್‌ ಈಗಾಗಲೇ ಮೂರು ಬಾರಿ ಇಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದರು. ಈಗ ಲೋಕಾಯುಕ್ತ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಬೇಕಿದೆ.

Read More
Next Story