LS POLLS | ಕರ್ನಾಟಕ ಬಿಜೆಪಿ ಪಟ್ಟಿ ಇನ್ನೂ ಮೂರ್ನಾಲ್ಕು ದಿನ ವಿಳಂಬ!
ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದು, ಭಾರತೀಯ ಜನತಾ ಪಕ್ಷ ಈಗಾಗಲೇ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದರೆ, ಮೊದಲ ಪಟ್ಟಿಯಲ್ಲಿ ಕರ್ನಾಟಕದ ಯಾವುದೇ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಆಗಿಲ್ಲ. ಆದರೆ, ಆ ಕುರಿತ ಕುತೂಹಲಕ್ಕೆ ತೆರೆ ಎಳೆದಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ಇನ್ನೆರಡು ದಿನಗಳಲ್ಲಿ ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ದೆಹಲಿ ವರಿಷ್ಠರಿಗೆ ಕಳಿಸುವುದಾಗಿ ಹೇಳಿದ್ದಾರೆ.
ಭಾನುವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ವರಿಷ್ಠರ ಸಭೆಯಲ್ಲಿ ಎಲ್ಲಾ ಕ್ಷೇತ್ರಗಳ ಪ್ರಮುಖ ಆಕಾಂಕ್ಷಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಎಲ್ಲಾ ಕ್ಷೇತ್ರಗಳಿಗೆ ಪ್ರಮುಖರು ಭೇಟಿ ನೀಡಿ, ಸ್ಥಳೀಯ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಪಟ್ಟಿ ತಯಾರಿಸಲಾಗಿದೆ. ಪಟ್ಟಿಯನ್ನು ಇನ್ನು ಒಂದೆರಡು ದಿನಗಳಲ್ಲಿ ದೆಹಲಿ ವರಿಷ್ಠರಿಗೆ ತಲುಪಿಸಲಾಗುವುದು ಎಂದು ವಿಜಯೇಂದ್ರ ಹೇಳಿದ್ದಾರೆ.
ಎಲ್ಲಾ 28 ಕ್ಷೇತ್ರಗಳಲ್ಲಿ ಪಕ್ಷದ ಗೆಲುವಿಗೆ ಪೂರಕ ವಾತಾವರಣ ಇದೆ. ಮಿತ್ರಪಕ್ಷ ಜೆಡಿಎಸ್ ಜೊತೆ ಚರ್ಚಿಸಿ ಸೂಕ್ತ ವ್ಯಕ್ತಿಗಳನ್ನು ಕಣಕ್ಕಿಳಿಸುವ ಮೂಲಕ ಎಲ್ಲಾ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಆದರೆ ಅಂತಿಮವಾಗಿ ಯಾವ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸುವುದು ಎಂಬ ತೀರ್ಮಾನವನ್ನು ದೆಹಲಿಯ ನಾಯಕರೇ ತೆಗೆದುಕೊಳ್ಳಲಿದ್ದಾರೆ ಎಂದೂ ವಿಜಯೇಂದ್ರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಕ್ಷೇತ್ರವಾರು ಆಕಾಂಕ್ಷಿಗಳ ಪಟ್ಟಿ ಅಂತಿಮಗೊಳಿಸಲು ಸೇರಿದ್ದ ಪ್ರಮುಖರ ಸಭೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ ವಿ ಸದಾನಂದ ಗೌಡ, ಪ್ರತಿಪಕ್ಷ ನಾಯಕ ಆರ್ ಅಶೋಕ್, ಸಿ ಟಿ ರವಿ, ಗೋವಿಂದ ಕಾರಜೋಳ, ಡಾ ಸಿ ಎನ್ ಅಶ್ವಥನಾರಾಯಣ ಮತ್ತಿತರರು ಭಾಗಿಯಾಗಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.
ವಿಜಯೇಂದ್ರ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಮೂರ್ನಾಲ್ಕು ದಿನ ವಿಳಂಬವಾಗಿ ಪ್ರಕಟವಾಗಲಿದೆ.