Govt Schools | ಸರ್ಕಾರಿ ಶಾಲೆಗಳ ಸಬಲೀಕರಣ; ಅನುದಾನ ಮೀಸಲಿಗೆ ಪಾಫ್ರೆ ಒತ್ತಾಯ
ರಾಜ್ಯದ ಸರ್ಕಾರಿ ಶಾಲೆಗಳು ಕನಿಷ್ಠ ಮೂಲಸೌಕರ್ಯ ಹಾಗೂ ಕಾಯಂ ಶಿಕ್ಷಕರ ಕೊರತೆಯಿಂದ ಬಳಲುತ್ತಿವೆ. ಹಾಗಾಗಿ ಮುಂಬರುವ ಬಜೆಟ್‌ನಲ್ಲಿ ಅನುದಾನ ಮೀಸಲಿಡುವಂತೆ ಫಾಫ್ರೆ ಸರ್ಕಾರವನ್ನು ಒತ್ತಾಯಿಸಿದೆ.
ರಾಜ್ಯದ ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಮುಂಬರುವ ಬಜೆಟ್‌ನಲ್ಲಿ ಅಗತ್ಯ ಅನುದಾನ ಒದಗಿಸುವಂತೆ ʼಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ- ಫಾಫ್ರೆ (People’s Alliance for Fundamental Right to ಎಜುಕೇಶನ್- PAFRE) ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ರಾಜ್ಯದ ಬಹಳಷ್ಟು ಸರ್ಕಾರಿ ಶಾಲೆಗಳು ಕನಿಷ್ಠ ಮೂಲಸೌಕರ್ಯ ಹಾಗೂ ಕಾಯಂ ಶಿಕ್ಷಕರ ಕೊರತೆಯಿಂದ ಬಳಲುತ್ತಿವೆ. ಇದರಿಂದ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಸಾರ್ವಜನಿಕ ಶಿಕ್ಷಣ ಬಲವರ್ಧನೆಗೊಂಡಾಗ ಮಾತ್ರ ಸಮಾನತೆಯ ಆಶಯ ಈಡೇರಲು ಸಾಧ್ಯ. ಹಾಗಾಗಿ ಪ್ರತಿ ಶಾಲೆಯನ್ನು ನೆರೆಹೊರೆಯ ಸಮಾನ ಶಾಲೆಯನ್ನಾಗಿ ಪರಿವರ್ತಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು ಎಂದು ಫಾಫ್ರೆ ಪರವಾಗಿ ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ.ವಿ.ಪಿ. ಮನವಿ ಮಾಡಿದ್ದಾರೆ.
2024 ಮಾರ್ಚ್ 21 ರಂದು 5, 8, 9 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಇದೇ ʼಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯʼ(ಫಾಫ್ರೆ) ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿ ತಡೆ ತಂದಿತ್ತು.
ಸರ್ಕಾರದ ಮುಂದಿಟ್ಟ ಬೇಡಿಕೆ ಏನು?
- ರಾಜ್ಯದಲ್ಲಿ ಕಿರಿಯ ಪ್ರಾಥಮಿಕ ,ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಬಜೆಟ್ ನಲ್ಲಿ ಘೋಷಿಸಿ, ಹಣ ಮೀಸಲೀಡಬೇಕು.
- ಕಳೆದ ನಾಲ್ಕು ವರ್ಷದಿಂದ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಿಸದ ಕಾರಣ ನೂರಾರು ಮಕ್ಕಳು ಶಿಕ್ಷಣದ ಹಕ್ಕಿನಿಂದ ವಂಚಿತರಾಗಿದ್ದಾರೆ. ಪ್ರಸಕ್ತ ಬಜೆಟ್‌ನಲ್ಲಿ ಉಚಿತ ಬೈಸಿಕಲ್ ವಿತರಣೆಗೆ ಅನುದಾನ ಮೀಸಲಿಡಬೇಕು.
- ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಲ್ಲಿಸಿರುವ ವಿಸ್ತೃತ ಸಂಶೋಧನೆಯ ’ಸರ್ಕಾರಿ ಶಾಲೆಗಳ ಸಬಲೀಕರಣ ವರದಿʼಯನ್ನು ಕೂಡಲೇ ಜಾರಿ ಮಾಡಬೇಕು. ವರದಿಯನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಅಂಗೀಕರಿಸಿ ಜಾರಿಗೊಳಿಸಲು ಆಯವ್ಯಯದಲ್ಲಿ ಹಣ ಮೀಸಲಿಡಬೇಕು.
- ಯುಪಿಎ ಸರ್ಕಾರ ಜಾರಿಗೊಳಿಸಿದ ಶಿಕ್ಷಣ ಹಕ್ಕು ಕಾಯಿದೆ-2009 ಅನ್ನು ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಕಾಯ್ದೆಯನ್ವಯ ಶಿಕ್ಷಕರು, ಕಲಿಕಾ ಕೊಠಡಿ, ಅಗತ್ಯ ಪಾಠೋಪಕರಣ, ಪೀಠೋಪಕರಣ ,ಕ್ರೀಡಾ ಸಾಮಗ್ರಿ , ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು.
- ಶಿಕ್ಷಣ ಹಕ್ಕು ಕಾಯಿದೆ ಜಾರಿಗೊಳಿಸಲು ರೋಡ್ ಮ್ಯಾಪ್ ರೂಪಿಸಬೇಕು. ಕಾಯ್ದೆ ಜಾರಿಗೆ ಉನ್ನತ ಮಟ್ಟದ ಸಮಿತಿ ರಚಿಸುವ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಬೇಕು.
- ಕರ್ನಾಟಕ ಅಭಿವೃದ್ಧಿ ಮಾದರಿಯ ಭಾಗವಾಗಿ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗೆ ವಿಸ್ತರಿಸಬೇಕು.
- ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಒದಗಿಸಲು ಅಗತ್ಯ ಸೌಕರ್ಯ ಮತ್ತು ನರ್ಸರಿ ಶಿಕ್ಷಕರ ನೇಮಕಾತಿ, ತರಬೇತಿಗೆ ವಿಶೇಷ ಅನುದಾನ ಒದಗಿಸಬೇಕು.