
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಚುಕ್ಕಾಣಿ ಈಶ್ವರ ಖಂಡ್ರೆ ಹೆಗಲಿಗೆ
ಸಭೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ನಾಮಪತ್ರ ಸಲ್ಲಿಕೆ ಸೇರಿದಂತೆ ವಿವಿಧ ಪ್ರಕ್ರಿಯೆಗಳ ನಂತರ, ಈಶ್ವರ ಖಂಡ್ರೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.
ದೇಶದ ಪ್ರಬಲ ಸಮುದಾಯ ಸಂಸ್ಥೆಗಳಲ್ಲಿ ಒಂದಾದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ರಾಜ್ಯದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಮಹಾಸಭಾದ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಖಂಡ್ರೆ ಅವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಹಿರಿಯ ಮುತ್ಸದ್ದಿ, ಮಹಾಸಭಾದ ನಿಕಟಪೂರ್ವ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಈ ಸ್ಥಾನ ತೆರವಾಗಿತ್ತು. ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇದೀಗ ಹಿರಿಯ ನಾಯಕ ಈಶ್ವರ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ.
ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರ
ಮಹಾಸಭಾದ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ನಾಮಪತ್ರ ಸಲ್ಲಿಕೆ ಸೇರಿದಂತೆ ವಿವಿಧ ಪ್ರಕ್ರಿಯೆಗಳ ನಂತರ, ಈಶ್ವರ ಖಂಡ್ರೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.
ಶಾಮನೂರು ಶಿವಶಂಕರಪ್ಪ ಅವರ ಅಗಲಿಕೆಯ ನಂತರ ಸಮುದಾಯವನ್ನು ಮುನ್ನಡೆಸುವ ಹೊಣೆಗಾರಿಕೆ ಯಾರ ಹೆಗಲಿಗೆ ಬೀಳಲಿದೆ ಎಂಬ ಕುತೂಹಲವಿತ್ತು. ಇದೀಗ ಅನುಭವಿ ರಾಜಕಾರಣಿ ಹಾಗೂ ಸಚಿವರಾಗಿರುವ ಈಶ್ವರ ಖಂಡ್ರೆ ಅವರನ್ನು ಆಯ್ಕೆ ಮಾಡುವ ಮೂಲಕ ಸಮುದಾಯದ ಮುಖಂಡರು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಖಂಡ್ರೆ ಅವರು ಈ ಹಿಂದೆ ಮಹಾಸಭಾದ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದು, ಸಂಸ್ಥೆಯ ಬೆಳವಣಿಗೆಗೆ ಶ್ರಮಿಸಿದ್ದರು.
ಈಶ್ವರ ಖಂಡ್ರೆ ಅವರ ಆಯ್ಕೆಗೆ ಸಭೆಯಲ್ಲಿ ಉಪಸ್ಥಿತರಿದ್ದ ಪದಾಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಹರ್ಷ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.

