ಚಂದ್ರದ್ರೋಣ ಪರ್ವತ ಮಾರ್ಗದಲ್ಲಿ ಧರೆಗುರುಳಿದ ಮರಗಳು; ಪ್ರವಾಸಿಗರ ಪರದಾಟ
x
ಚಂದ್ರದ್ರೋಣ ಪರ್ವತ ಮಾರ್ಗದಲ್ಲಿ ಮರ ಧರೆಗುರುಳಿದೆ.

ಚಂದ್ರದ್ರೋಣ ಪರ್ವತ ಮಾರ್ಗದಲ್ಲಿ ಧರೆಗುರುಳಿದ ಮರಗಳು; ಪ್ರವಾಸಿಗರ ಪರದಾಟ

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಮಳೆಯಿಂದಾಗಿ ಚಂದ್ರಿಕಾ‌ ಎಸ್ಟೇಟ್, ತಿಪ್ಪೇನಹಳ್ಳಿ ಎಸ್ಟೇಟ್ ಮತ್ತು ಇಂದಿರಾನಗರ ಬಳಿ ಬೃಹತ್ ಗಾತ್ರದ ಮರ ಧರೆಗುರುಳಿವೆ.


ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರೆದಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಲವೆಡೆ ಅವಾಂತರ ಸೃಷ್ಟಿಸಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಿಂದ ಚಂದ್ರದ್ರೋಣ ಪರ್ವತ ರಸ್ತೆಯ ಮೂರು ಕಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ. ಇದರಿಂದ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಮತ್ತು ಝರಿ ಫಾಲ್ಸ್​ ಸಂಪರ್ಕಿಸುವ ರಸ್ತೆ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ.

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಮಳೆಯಿಂದಾಗಿ ಚಂದ್ರಿಕಾ‌ ಎಸ್ಟೇಟ್, ತಿಪ್ಪೇನಹಳ್ಳಿ ಎಸ್ಟೇಟ್ ಮತ್ತು ಇಂದಿರಾನಗರ ಬಳಿ ಬೃಹತ್ ಗಾತ್ರದ ಮರ ಧರೆಗುರುಳಿವೆ. ಸದ್ಯ ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯುತ್ ಕಂಬಗಳಿಗೂ ಹಾನಿ ಉಂಟಾಗಿದೆ.

ಸಂಚಾರ ದಟ್ಟಣೆ

ವಾರಾಂತ್ಯದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಹೆಚ್ಚಿನ ಪ್ರವಾಸಿಗರು ಆಗಮಿಸಿದ್ದು, ದಟ್ಟಣೆ ಉಂಟಾಗಿದೆ. ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಹೊನ್ನಮ್ಮನಹಳ್ಳ, ಝರಿ ಫಾಲ್ಸ್ ವೀಕ್ಷಣೆಗಾಗಿ ಬರುತ್ತಿರುವ ಸಾವಿರಾರು ಪ್ರವಾಸಿಗರಿಂದಾಗಿ ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದೆ.

ಒಂದು ವಾರ ಮಳೆ ಮುನ್ಸೂಚನೆ

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಆಗಸ್ಟ್​ 2ರವರೆಗೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Read More
Next Story