ಸುಳ್ಳು ಅಫಿಡವಿಟ್‌ ಆರೋಪ: ಚುನಾವಣಾ ಆಯೋಗ, ರೆಡ್ಡಿಗೆ ಹೈಕೋರ್ಟ್ ನೋಟಿಸ್
x

ಸುಳ್ಳು ಅಫಿಡವಿಟ್‌ ಆರೋಪ: ಚುನಾವಣಾ ಆಯೋಗ, ರೆಡ್ಡಿಗೆ ಹೈಕೋರ್ಟ್ ನೋಟಿಸ್

ಆಂಧ್ರಪ್ರದೇಶದ ಅನಂತಪುರದ ಟಪಾಲ್‌ ಶ್ಯಾಮ್‌ ಪ್ರಸಾದ್‌ ಸಲ್ಲಿಸಿರುವ ಈ ಅರ್ಜಿ ಕುರಿತು ನ್ಯಾಯಮೂರ್ತಿ ಎಸ್‌ ಸುನೀಲ್‌ ದತ್‌ ಯಾದವ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.


ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ (ಕೆಆರ್‌ಪಿಪಿ) ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ಒಳಗೊಂಡ ಪ್ರಮಾಣಪತ್ರ ಸಲ್ಲಿಸಿದ ಆರೋಪ ಕೇಳಿಬಂದಿದೆ. ಈ ಸಂಬಂಧ, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಕುರಿತು ಕೇಂದ್ರ ಚುನಾವಣಾ ಆಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಹಾಗೂ ಸ್ವತಃ ಜನಾರ್ದನ ರೆಡ್ಡಿ ಅವರಿಗೆ ಕರ್ನಾಟಕ ಹೈಕೋರ್ಟ್ ಇಂದು ನೋಟಿಸ್ ಜಾರಿಗೊಳಿಸಿದೆ.

ಅರ್ಜಿದಾರರ ಆಕ್ಷೇಪವೇನು?

ಆಂಧ್ರಪ್ರದೇಶದ ಅನಂತಪುರದ ಟಪಾಲ್‌ ಶ್ಯಾಮ್‌ ಪ್ರಸಾದ್‌ ಸಲ್ಲಿಸಿರುವ ಈ ಅರ್ಜಿ ಕುರಿತು ನ್ಯಾಯಮೂರ್ತಿ ಎಸ್‌ ಸುನೀಲ್‌ ದತ್‌ ಯಾದವ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪ್ರಕಾರ, ಜನಾರ್ದನ ರೆಡ್ಡಿ ಅವರು ಫಾರ್ಮ್‌ 25 ಮತ್ತು 26ರಲ್ಲಿ ತಮ್ಮ ನೈಜ ಆಸ್ತಿ ವಿವರ, ಹೊಂದಿರುವ ಕಾರುಗಳ ಮಾಹಿತಿ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ತಮ್ಮ ವಿರುದ್ಧ ಬಾಕಿ ಇರುವ ಪ್ರಕರಣಗಳ ವಿವರ, ಇತ್ಯರ್ಥವಾಗಿರುವ ಮತ್ತು ಶಿಕ್ಷೆಗೆ ಒಳಗಾದ ಪ್ರಕರಣಗಳ ಮಾಹಿತಿಯನ್ನು ಸರಿಯಾಗಿ ನೀಡಿಲ್ಲ ಎಂದು ಆಕ್ಷೇಪಿಸಿದ್ದಾರೆ. ಈ ಸಂಬಂಧ 2023ರ ಜೂನ್ 14 ಮತ್ತು ಜೂನ್ 12ರಂದು ಕೇಂದ್ರ ಚುನಾವಣಾ ಆಯೋಗ, ಮುಖ್ಯ ಚುನಾವಣಾಧಿಕಾರಿ ಮತ್ತು ಗಂಗಾವತಿ ಕ್ಷೇತ್ರದ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿ, ರೆಡ್ಡಿ ವಿರುದ್ಧ ಸೂಕ್ತ ಕ್ರಮಕ್ಕೆ ಕೋರಲಾಗಿದೆ. ಆದರೆ, ಸಂಬಂಧಪಟ್ಟ ಪ್ರಾಧಿಕಾರಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ದಾಖಲೆಗಳನ್ನು ತರಿಸಿ ಪರಿಶೀಲಿಸಬೇಕು ಎಂದು ಅವರು ಕೋರಿದರು.

ಅರ್ಜಿದಾರರ ವಾದ ಆಲಿಸಿದ ಪೀಠವು ಕೇಂದ್ರ ಚುನಾವಣಾ ಆಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ, ಗಂಗಾವತಿ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜನಾರ್ದನ ರೆಡ್ಡಿ ಅವರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿದೆ.

ಕಳೆದ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಗೆಲುವು

ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜನಾರ್ದನ ರೆಡ್ಡಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ 66,213 ಮತಗಳನ್ನು ಪಡೆದು, ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಇಕ್ಬಾಲ್‌ ಅನ್ಸಾರಿ ಅವರ ವಿರುದ್ಧ 8,266 ಮತಗಳ ಅಂತರದಿಂದ ಜಯಗಳಿಸಿದ್ದರು. ಈ ಪ್ರಕರಣದ ಕುರಿತು ನ್ಯಾಯಾಲಯದ ಮುಂದಿನ ವಿಚಾರಣೆ ಕುತೂಹಲ ಮೂಡಿಸಿದೆ.

Read More
Next Story