
ವಿಧಾನಸೌಧ
ಇ-ಸ್ವತ್ತು ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದ ಮಟ್ಟದಲ್ಲಿ ಕಾರ್ಯನಿರ್ವಹಣಾ ಸಮಿತಿ ರಚನೆ
ಇ-ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳನ್ನು ಅಧ್ಯಯನ ಮಾಡಲು 12 ಮಂದಿ ಅಧಿಕಾರಿಗಳ ಸದಸಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇ-ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಧ್ಯಯನ ಮಾಡಲು 12 ಮಂದಿ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 199 ಕ್ಕೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಇ-ಸ್ವತ್ತುಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆಗಳ ಪರಿಹಾರಕ್ಕಾಗಿ ಮತ್ತು ಇ-ಸ್ವತ್ತು ಸುಧಾರಣೆಗೆ ಸಂಬಂಧಿಸಿದಂತೆ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸುವ ಹೊಣೆಗಾರಿಕೆಯನ್ನು ಈ ಸಮಿತಿಗೆ ವಹಿಸಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳು) ನಿಯಮಗಳು, 2006 ರ ನಿಯಮ 28 ಮತ್ತು 30ಕ್ಕೆ ತಿದ್ದುಪಡಿ ತಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕ್ರಮಬದ್ಧ ಆಸ್ತಿಗಳಿಗೆ ನಮೂನೆ-9, 11ಎ ಮತ್ತು ಕ್ರಮಬದ್ಧವಲ್ಲದ ಆಸ್ತಿಗಳಿಗೆ ನಮೂನೆ-11ಬಿ ಅನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಡಿಜಿಟಲ್ ಸಹಿಯ ಮೂಲಕ ವಿತರಿಸಲು ಅವಕಾಶ ಕಲ್ಪಿಸಲಾಗಿದೆ.
ಸಮಿತಿಯಲ್ಲಿರುವ ಸದಸ್ಯರು
ರಾಜ್ಯ ಪಂಚಾಯತ್ ರಾಜ್ ಆಯುಕ್ತಾಲಯದ ನಿರ್ದೇಶಕರು(ಅಭಿವೃದ್ಧಿ), ವಿಜಯಪುರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯ ಅಜೂರೆ, ಸೀಮಾ ನಿರ್ಣಯ ಆಯೋಗದ ಸದಸ್ಯ ಶಿವಶಂಕರ್ ಪಿ., ರಾಜ್ಯ ಪಂಚಾಯತ್ ರಾಜ್ ಆಯುಕ್ತಾಲಯದ ನಿವೃತ್ತ ಉಪ ನಿರ್ದೇಶಕ ಕೆ.ಜಿ.ಜಗದೀಶ್, ಕಲಬುರಗಿ ಜಿಲ್ಲೆಯ ಶಹಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜು ಶರಬಯ್ಯ, ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ(ಪಂಚಾಯತ್ ರಾಜ್) ಆಶಾ ಎಂ.ಜೆ., ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದರಾಜು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಶಿಂಧೋಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಚಿಕ್ಕಮಗಳೂರು ತಾಲೂಕಿನ ಕೆ.ಬಿ.ಹಾಲ್ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಾಲುಕ್ಯ ಭಾರವಿ, ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶಿರಾಡಿ ಗ್ರಾಮ ಪಂಚಾಯಿತಿ ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಶವಂತ ಬೆಳ್ಳಡ ಅವರು ಈ ಸಮಿತಿಯ ಸದಸ್ಯರಾಗಿದ್ದು, ರಾಜ್ಯ ಪಂಚಾಯತ್ ರಾಜ್ ಆಯುಕ್ತಾಲಯದ ಉಪ ನಿರ್ದೇಶಕರು-6(ಅಭಿವೃದ್ಧಿ) ಇವರನ್ನು ಸಮಿತಿಯ ಸದಸ್ಯ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ.
ಈ 10 ಮಂದಿ ಸಮಿತಿಯ ಸದಸ್ಯರಾಗಿದ್ದು ಉಪನಿರ್ದೇಶಕರು-6 (ಅಭಿವೃದ್ಧಿ), ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಬೆಂಗಳೂರು ಇವರು ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.
ಕಾರ್ಯನಿರ್ವಹಣಾ ಸಮಿತಿಯು ಎರಡು ತಿಂಗಳೊಳಗೆ ವಿವರವಾದ ವರದಿಯೊಂದಿಗೆ ಇ-ಸ್ವತ್ತು ಸಲಹಾ ಸಮಿತಿಗೆ ಶಿಫಾರಸ್ಸು ಮಾಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಡಾ.ಅರುಂಧತಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.