
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಶನಿವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
92 ವರ್ಷದ ಎಸ್.ಎಂ. ಕೃಷ್ಣ ಅವರಿಗೆ ಮಣಿಪಾಲ್ ಆಸ್ಪತ್ರೆ ವೈದ್ಯರಾದ ಡಾ. ಸತ್ಯನಾರಾಯಣ ಹಾಗೂ ಸುನಿಲ್ ಕಾರಂತ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಜಿ ಸಿಎಂ ಆಸ್ಪತ್ರೆಗೆ ದಾಖಲಾದ ವಿಷಯ ತಿಳಿಯುತ್ತಿದ್ದಂತೆ ಮಣಿಪಾಲ್ ಆಸ್ಪತ್ರೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.
ಕಳೆದ ಏಪ್ರಿಲ್ 30 ರಂದು ಎಸ್.ಎಂ. ಕೃಷ್ಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದರು.
ಅದೇ ರೀತಿ 2022 ಸೆಪ್ಟೆಂಬರ್ ತಿಂಗಳಲ್ಲಿ ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ತಂಡ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿತ್ತು.
ಎಸ್.ಎಂ. ಕೃಷ್ಣ ಅವರು 1999 ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. 2004 ರಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದರು. 2009 ಮತ್ತು 2012 ರ ನಡುವೆ ವಿದೇಶಾಂಗ ವ್ಯವಹಾರಗಳ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. 2023 ರಲ್ಲಿ ಎಸ್.ಎಂ. ಕೃಷ್ಣ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ವಿಭೂಷಣ ಪುರಸ್ಕಾರ ನೀಡಲಾಗಿದೆ.